ಗ್ಯಾರಂಟಿ ಯೋಜನೆಗಳು ಸ್ಥಗಿತವಿಲ್ಲ, ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಶೌಕತ್ ಅಲಿ ಆಲೂರು

ಜೇವರ್ಗಿ ತಾಲೂಕಿನ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಯಾವುದೇ ವದಂತಿ ಅಥವಾ ಅಪಪ್ರಚಾರಕ್ಕೆ ಕಿವಿಗೊಡದೆ, ಹತ್ತಿರದ ಗ್ರಾಮ ಒನ್ ಕೇಂದ್ರಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಮರು ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಸಿಡಿಪಿಒ (CDPO) ಕಚೇರಿ ಸಂಪರ್ಕಿಸುವಂತೆ ಶೌಕತ್ ಅಲಿ ಆಲೂರು ಮನವಿ ಮಾಡಿದ್ದಾರೆ.
ಜೇವರ್ಗಿ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ಯೋಜನೆಗಳ ಕುರಿತು ಹರಡುತ್ತಿರುವ ಅಪಪ್ರಚಾರಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಜೇವರ್ಗಿ ತಾಲೂಕು ಅಧ್ಯಕ್ಷ ಶೌಕತ್ ಅಲಿ ಆಲೂರು ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಶಕ್ತಿ ಯೋಜನೆಗಳು ಬಡವರು, ಮಹಿಳೆಯರು ಮತ್ತು ದುರ್ಬಲ ವರ್ಗಗಳ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಜಾರಿಗೆ ತರಲಾಗಿದ್ದು, ಲಕ್ಷಾಂತರ ಕುಟುಂಬಗಳು ಇದರ ಪ್ರಯೋಜನ ಪಡೆಯುತ್ತಿವೆ ಎಂದರು.
ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ರದ್ದು ಮಾಡಲಿದೆ ಎಂಬ ವದಂತಿಗಳು ಸುಳ್ಳು. ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಗಳ ಸೌಲಭ್ಯ ತಲುಪಿಸುವ ಉದ್ದೇಶದಿಂದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳಲ್ಲಿ ಮರು ಪರಿಶೀಲನೆ ಹಾಗೂ ಮರು ಅರ್ಜಿ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೆಲವರು ಈ ಆಡಳಿತಾತ್ಮಕ ಕ್ರಮವನ್ನು ತಪ್ಪಾಗಿ ಬಿಂಬಿಸಿ ಜನರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಯೋಜನೆಗಳನ್ನು ಇನ್ನಷ್ಟು ಪಾರದರ್ಶಕವಾಗಿ ಜಾರಿಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು, ಫಲಾನುಭವಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳನ್ನು “ಬಿಟ್ಟಿ ಭಾಗ್ಯ” ಎಂದು ಟೀಕಿಸುತ್ತಿವೆ. ಆದರೆ ಹಲವು ರಾಜ್ಯಗಳಲ್ಲಿ ಜನಪರ ಯೋಜನೆಗಳು ಜಾರಿಯಲ್ಲಿವೆ. ಜನರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಯೋಜನೆಗಳನ್ನು ರಾಜಕೀಯ ದೃಷ್ಟಿಯಿಂದ ಟೀಕಿಸುವುದು ಸರಿಯಲ್ಲ ಎಂದರು.
ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕಾರ್ಯಕರ್ತರು ಹಾಗೂ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಶೌಕತ್ ಅಲಿ ಆಲೂರು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ನಾಗರಾಜ, ರಕುಂ ತೋಲಾ ಬಾಗವಾನ್, ರಾಜು ಗುತ್ತೇದಾರ್ ಹಾಗೂ ಬಸವರಾಜ ದೇವದುರ್ಗ ಉಪಸ್ಥಿತರಿದ್ದರು.




