ಜನಾಭಿಪ್ರಾಯ ವರದಿಗೆ ಸ್ಪಂದನೆ: ಅಪಾಯಕಾರಿ ಟ್ರಾನ್ಸ್‌ಫಾರ್ಮರ್‌ಗೆ ಸುರಕ್ಷತಾ ಬೇಲಿ ನಿರ್ಮಾಣ

ಜೇವರ್ಗಿ: ತಹಸೀಲ್ ಕಚೇರಿ ಎದುರು ಅಪಾಯಕಾರಿಯಾಗಿ ತೆರೆಯಾಗಿ ಇದ್ದ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಕುರಿತು ಸಾರ್ವಜನಿಕರು ವ್ಯಕ್ತಪಡಿಸಿದ್ದ ಆತಂಕಕ್ಕೆ ಕೊನೆಗೂ ಸ್ಪಂದನೆ ದೊರೆತಿದೆ. ಈ ಕುರಿತು ಜನಾಭಿಪ್ರಾಯದಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ತಾಲೂಕು ಆಡಳಿತ ಹಾಗೂ ವಿದ್ಯುತ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತುರ್ತು ಸುರಕ್ಷತಾ ಕ್ರಮ ಕೈಗೊಂಡಿದ್ದಾರೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವ ಪ್ರದೇಶದಲ್ಲಿ ಟ್ರಾನ್ಸ್‌ಫಾರ್ಮರ್ ಯಾವುದೇ ರಕ್ಷಣಾತ್ಮಕ ವ್ಯವಸ್ಥೆಯಿಲ್ಲದೆ ತೆರೆದ ಸ್ಥಿತಿಯಲ್ಲಿದ್ದ ಕಾರಣ ಅಪಘಾತ ಸಂಭವಿಸುವ ಭೀತಿ ಎದುರಾಗಿತ್ತು. ಸ್ಥಳೀಯರು ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಸಮಸ್ಯೆ ಬಗೆಹರಿದಿರಲಿಲ್ಲ. ಆದರೆ ಜನಾಭಿಪ್ರಾಯ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡು ತಕ್ಷಣ ಕ್ರಮ ಕೈಗೊಂಡಿದ್ದಾರೆ.
ಪ್ರಸ್ತುತ ಟ್ರಾನ್ಸ್‌ಫಾರ್ಮರ್ ಸುತ್ತ ಕಬ್ಬಿಣದ ಬೇಲಿ ನಿರ್ಮಿಸಿ ಸುರಕ್ಷತಾ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾರ್ವಜನಿಕರ ಆತಂಕ ದೂರವಾಗಿದೆ. ಇದರಿಂದ ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಜನರ ಸುರಕ್ಷತೆಗೆ ಆದ್ಯತೆ ನೀಡಿ ತ್ವರಿತವಾಗಿ ಸ್ಪಂದಿಸಿದ ತಾಲೂಕು ಆಡಳಿತ, ವಿದ್ಯುತ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.
ಮುಂದೆಯೂ ಇದೇ ರೀತಿಯಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಪರಿಹಾರ ಒದಗಿಸಬೇಕು ಎಂದು ಸಾರ್ವಜನಿಕರು ಆಶಯ ವ್ಯಕ್ತಪಡಿಸಿದ್ದಾರೆ.



