ಜಿಲ್ಲಾಸುದ್ದಿಯಾದಗಿರಿ

“ಡೊನೇಷನ್ ದಂಧೆಗೆ ಬ್ರೇಕ್ ಹಾಕಿ: ಯಾದಗಿರಿ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಆಕ್ರೋಶ”

ಯಾದಗಿರಿ: ಜಿಲ್ಲೆಯಾದ್ಯಂತ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣದ ಹೆಸರಿನಲ್ಲಿ ವಿದ್ಯಾರ್ಥಿಗಳ ಪೋಷಕರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚೆತ್ತು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಗುಣಮಟ್ಟದ ಶಿಕ್ಷಣ ನೀಡಬೇಕಾದ ಶಾಲಾ-ಕಾಲೇಜುಗಳು ಪುಸ್ತಕ, ಸಮವಸ್ತ್ರ, ವಿವಿಧ ಸಾಮಗ್ರಿಗಳು ಹಾಗೂ ಡೊನೇಷನ್ ಹೆಸರಿನಲ್ಲಿ ಪೋಷಕರಿಂದ ಮನಬಂದಂತೆ ಹಣ ವಸೂಲಿ ಮಾಡುತ್ತಿರುವ ಆರೋಪ ಮಾಡಿದ್ದಾರೆ. ಕೆಲವು ಶಿಕ್ಷಣ ಸಂಸ್ಥೆಗಳ ಕಟ್ಟಡಗಳು ಮತ್ತು ಮೂಲಸೌಕರ್ಯಗಳ ಕುರಿತು ಜಿಲ್ಲಾಡಳಿತ ವಿಶೇಷ ತಂಡ ರಚಿಸಿ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರದ ನಿಯಮಾವಳಿಗಳ ಪ್ರಕಾರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸದೇ, ಕೇವಲ ಹಣ ವಸೂಲಿಯನ್ನೇ ಮುಖ್ಯ ಉದ್ದೇಶವಾಗಿಸಿಕೊಂಡಿರುವ ಕೆಲ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅಲ್ಲದೆ, ಕಟ್ಟಡ ತೆರಿಗೆ ಸೇರಿದಂತೆ ಕಡ್ಡಾಯ ನಿಯಮಗಳನ್ನು ಪಾಲಿಸದ ಸಂಸ್ಥೆಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.

ಡೊನೇಷನ್ ಅಥವಾ ಶುಲ್ಕ ಪಾವತಿಯಲ್ಲಿ ವಿಳಂಬವಾದರೆ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಇದರಿಂದ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಬಡವರು, ರೈತರು ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕನಸಾಗುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಅನಧಿಕೃತ ಕಟ್ಟಡಗಳು, ಬಾಡಿಗೆ ಮನೆಗಳು ಹಾಗೂ ಅಪೂರ್ಣ ಮೂಲಸೌಕರ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪವೂ ಕೇಳಿಬಂದಿದೆ. ಅನುಮತಿ ಪಡೆಯುವ ವೇಳೆ ಸಲ್ಲಿಸಿದ ಮಾಹಿತಿಗೂ, ವಾಸ್ತವ ಸ್ಥಿತಿಗೂ ಸಾಕಷ್ಟು ವ್ಯತ್ಯಾಸವಿದ್ದು, ಶಿಕ್ಷಣವನ್ನು ವ್ಯಾಪಾರದ ರೂಪಕ್ಕೆ ತಳ್ಳಲಾಗಿದೆ ಎಂದು ಅವರು ಟೀಕಿಸಿದ್ದಾರೆ.

ಬೇಸಿಗೆ ಶಿಬಿರಗಳು ಹಾಗೂ ಕೋಚಿಂಗ್ ಸೆಂಟರ್‌ಗಳ ಹೆಸರಿನಲ್ಲಿಯೂ ಹೆಚ್ಚುವರಿ ಹಣ ವಸೂಲಿ ನಡೆಯುತ್ತಿದೆ ಎಂದು ಆರೋಪಿಸಿರುವ ಉಮೇಶ ಕೆ. ಮುದ್ನಾಳ, ಶಿಕ್ಷಣ ಇಲಾಖೆ ಅಧಿಕಾರಿಗಳು ಕೂಡಲೇ ಪರಿಶೀಲನೆ ನಡೆಸಿ ತಪ್ಪಿತಸ್ಥ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button