ಕಲಬುರಗಿಜಿಲ್ಲಾಸುದ್ದಿ

ದಲಿತ ಮಹಿಳೆ ಕೊಲೆ ಖಂಡಿಸಿ ಬಿಜೆಪಿ ಎಸ್‌ಸಿ ಮೋರ್ಚಾ ಬೃಹತ್ ಪ್ರತಿಭಟನೆ

ಕಲಬುರಗಿ:ಹುಬ್ಬಳ್ಳಿ ತಾಲೂಕಿನ ಇನಾಮ ವೀರಪೂರ ಗ್ರಾಮದಲ್ಲಿ ಮಾದಿಗ ಸಮಾಜದ ವಿವೇಕಾನಂದ ಅವರ ಕುಟುಂಬದ ಮಹಿಳೆಯನ್ನು ಕೊಲೆ ಮಾಡಿ, ಕುಟುಂಬಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ, ನೊಂದ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾ ನಗರ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ್ ಜೀನಕೇರಿ ಅವರ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ದಿನಾಂಕ 21-12-2025 ರಂದು ಬಸಪ್ಪ, ಅನೀಲ ಗೌಡ ಸೇರಿದಂತೆ ಸುಮಾರು 14ಕ್ಕೂ ಹೆಚ್ಚು ಆರೋಪಿಗಳು ಕೂಡಿ ಮಾದಿಗ ಸಮಾಜದ ಮಹಿಳೆಯನ್ನು ಕೊಲೆ ಮಾಡಿ, ಕುಟುಂಬದ ಇತರ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು. ಈ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ, ದೌರ್ಜನ್ಯ ಪ್ರಕರಣಕ್ಕೆ ಅನುಗುಣವಾಗಿ ಸರಕಾರಿ ಉದ್ಯೋಗ ನೀಡಬೇಕು ಹಾಗೂ ಕುಟುಂಬದ ಸದಸ್ಯರಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕೆಂದು ಒತ್ತಾಯಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದಲಿತ ಮಹಿಳೆಯರ ಮೇಲೆ ಹಲ್ಲೆ, ಕೊಲೆ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ. ರಾಜ್ಯ ಸರ್ಕಾರ ದಲಿತರ ಬಗ್ಗೆ ಯಾವುದೇ ರೀತಿಯ ಕಾಳಜಿ ವಹಿಸುತ್ತಿಲ್ಲ. ಹುಬ್ಬಳ್ಳಿಯ ಈ ಘಟನೆ ‘ಪ್ರೀತಿ ಸೋತಿತು, ಜಾತಿ ಗೆದ್ದಿತು’ ಎಂಬ ರೀತಿಯಲ್ಲಿ ನಡೆದಿದ್ದು, ಮುಂದಿನ ದಿನಗಳಲ್ಲಿ ಇಂತಹ ದೌರ್ಜನ್ಯಗಳು ನಡೆಯದಂತೆ ಕಠಿಣ ಕಾನೂನು ಕ್ರಮ ಜಾರಿಗೆ ತರಬೇಕೆಂದು ಬಿಜೆಪಿ ಎಸ್‌ಸಿ ಮೋರ್ಚಾ ಆಗ್ರಹಿಸಿತು.

ಇದೇ ವೇಳೆ ಡಾ. ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಯೋಜನೆಗಳನ್ನು ಕಡಿತಗೊಳಿಸಿರುವುದನ್ನು ಖಂಡಿಸಿದ ಅವರು, ಮೊದಲಿನಂತೆ ಯೋಜನೆಗಳನ್ನು ಜಾರಿಗೆ ತರಬೇಕು, ಮೋರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಒಳಮೀಸಲಾತಿ ಪ್ರಕಾರ ಪ್ರವೇಶ ನೀಡಬೇಕು ಎಂದು ಆಗ್ರಹಿಸಿದರು. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪೂರದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ರಂಜೀತಳ ಕೊಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಕುಟುಂಬಕ್ಕೆ ಹೆಚ್ಚಿನ ಪರಿಹಾರ ಹಾಗೂ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು.

ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಹಾಗೂ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅಭಿವೃದ್ಧಿ ನಿಗಮಗಳಿಗೆ ಸಮರ್ಪಕ ಅನುದಾನ ನೀಡದೇ ಎಸ್‌ಇಪಿ–ಎಸ್‌ಟಿಪಿ ನಿಧಿಗಳನ್ನು ದುರ್ಬಳಕೆ ಮಾಡಿರುವುದನ್ನು ಖಂಡಿಸಿದ ಅವರು, ಮುಂದಿನ ದಿನಗಳಲ್ಲಿ ಈ ನಿಗಮಗಳಿಗೆ ಹೆಚ್ಚಿನ ಅನುದಾನ ನೀಡಿ ದಲಿತ ಸಮುದಾಯಕ್ಕೆ ಸಾಲ ಸೌಲಭ್ಯ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಗ್ರಾಮೀಣ ಜಿಲ್ಲಾ ಅಧ್ಯಕ್ಷ ಅಶೋಕ ಬಗಲಿ, ಹಿರಿಯ ಮುಖಂಡರಾದ ಅಂಬಾರಾಯ ಅಷ್ಟಗಿ, ಅವಣ್ಣ ಮ್ಯಾಕೇರಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button