ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘಕ್ಕೆ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ

ಚಿತ್ತಾಪುರ: ಪಟ್ಟಣದ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಮೈತ್ರಿಯಿಂದ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ದೇವಿಂದ್ರ ಅಣಕಲ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಶೋಕ ಭೀಮಯ್ಯ ಹರನಾಳ ಆಯ್ಕೆಯಾದರು.
ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಸಂಘದ ಕಚೇರಿಯಲ್ಲಿ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಭಾಗೊಡಿ ಮತಕ್ಷೇತ್ರದ ಸದಸ್ಯರಾದ ದೇವಿಂದ್ರ ಅಣಕಲ್ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ವಿರುದ್ಧ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವರನ್ನು ಅಧ್ಯಕ್ಷರಾಗಿ ಘೋಷಿಸಲಾಯಿತು.
ಅದೇ ರೀತಿ ಉಪಾಧ್ಯಕ್ಷ ಸ್ಥಾನಕ್ಕೆ ಅಶೋಕ ಭೀಮಯ್ಯ ಹರನಾಳ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಮುಂದಿನ ಐದು ವರ್ಷಗಳ ಅವಧಿಗೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿಗಳು ಘೋಷಿಸಿದರು.
ವಿಜಯೋತ್ಸವ ಆಚರಣೆ:ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಭೀಮಣ್ಣ ಸಾಲಿ, ಬಿಜೆಪಿ ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ವೀರಣ್ಣ ಯಾರಿ, ನಾಗರೆಡ್ಡಿ ಗೊಬಶೇನ್, ಮಲ್ಲಿಕಾರ್ಜುನ ಬೊಮ್ಮನಳ್ಳಿ, ಆನಂದ ಪಾಟೀಲ್ ನರಬೋಳ, ಮಲ್ಲಿಕಾರ್ಜುನ ಇಟಗಿ, ನಾಗರಾಜ ಹೂಗಾರ, ಶಿವರಾಮ ಚವ್ವಾಣ, ಹಣಮಂತ ಸಂಕನೂರ, ದೇವಿಂದ್ರ ಯಾಬಾಳ, ಮಲ್ಲಿಕಾರ್ಜುನ ಕಾಳಗಿ, ಮಹೇಶ್ ಜಾಯಿ, ರಸೂಲ ಮುಸ್ತಫಾ, ಈರಯ್ಯ ಬೆಣ್ಣೂರ, ಭೀಮಾಶಂಕರ, ಅಬ್ದುಲ್ ರಶೀದ್, ಶ್ರೀನಿವಾಸ ರಾಚಪ್ಪ, ವಿಜಯಕುಮಾರ, ಗೌರಮ್ಮ, ಸುನಿತಾ, ಮಹೇಶ್ ಧರಿ, ಅಂಬರೀಶ ಸುಲೇಗಾಂವ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.



