ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲಿನ ದಾಳಿಯನ್ನು ಖಂಡಿಸಿ ಪ್ರತಿಭಟನೆ

ಕಲಬುರಗಿ : ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆಯನ್ನು ದಲಿತ ಹಕ್ಕುಗಳ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ಈ ಹಿನ್ನೆಲೆಯಲ್ಲಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಪ್ರತಿಭಟನಾಕಾರರು, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ನಲ್ಲಿ ನೋಂದಾಯಿಸಿಕೊಂಡಿರುವ ವಕೀಲ ರಾಕೇಶ್ ಕಿಶೋರ್ ವಿರುದ್ಧ ದೇಶದ್ರೋಹ ಸೇರಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ತೆರೆದ ನ್ಯಾಯಾಲಯದಲ್ಲಿ ಸಿಜೆಐ ಗವಾಯಿ ಅವರತ್ತ ಶೂ ಎಸೆಯಲು ಯತ್ನಿಸಿದ ಘಟನೆಯನ್ನು ಅವರು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ದಾಳಿಯೆಂದು ಹೇಳಿದರು.
ಬಿಜೆಪಿ ನಾಯಕರು ಜಾತಿವಾದಿ ಮತ್ತು ಕೋಮುವಾದಿ ಹೇಳಿಕೆಗಳು ಇಂತಹ ಘಟನೆಗಳಿಗೆ ಪ್ರೋತ್ಸಾಹ ನೀಡುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸಿಜೆಐ ಗವಾಯಿ ಅವರಿಗೆ ಕೇಂದ್ರ ಸರ್ಕಾರವು ಸಮಗ್ರ ಭದ್ರತೆ ಒದಗಿಸಬೇಕೆಂದು ಅವರು ಒತ್ತಾಯಿಸಿದರು.
ಅದೇ ವೇಳೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಭಿನ್ನಾಭಿಪ್ರಾಯದ ಹಕ್ಕನ್ನು ರಕ್ಷಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಪ್ರಜಾಪ್ರಭುತ್ವವನ್ನು ಶಿಥಿಲಗೊಳಿಸುವ ಘಟನೆಗಳ ಬಗ್ಗೆ ಪ್ರಧಾನ ಮಂತ್ರಿ ಮೌನ ವಹಿಸಿರುವುದು ಖಂಡನೀಯವೆಂದು ಅವರು ಅಭಿಪ್ರಾಯಪಟ್ಟರು.
ಈ ಪ್ರತಿಭಟನೆಯಲ್ಲಿ ಕೆ. ನೀಲಾ, ಚಂದಮ್ಮ ಗೋಳಾ, ಡಾ. ಪ್ರಭು ಖಾನಾಪೂರೆ, ಶಾಂತಾ ಘಂಟಿ, ಪ್ರಮೋದ, ಸರ್ವೇಶ, ಕೈಲಾಸ, ಶಾಂತೇಶ, ಮಂಜುನಾಥ, ಸುಧಾಮಾ ಧನ್ನಿ, ಪಾಂಡುರಂಗ, ಲವಿತ್ರ, ಪದ್ಮನಿ, ಸಲ್ಮಾನ್ ಖಾನ್, ಇಮಾಮ್, ಸಿದ್ದಪ್ಪ, ಮಲ್ಲಿಕಾರ್ಜುನ, ಅಶೋಕ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.