ಕಲಬುರಗಿಜಿಲ್ಲಾಸುದ್ದಿ

ಕರ್ತವ್ಯನಿಷ್ಠ ಶಿಕ್ಷಕಿ ದೀಪಾ ಅವರಿಗೆ ‘ಗುರು ಸರ್ವೋತ್ತಮ’ ಜಿಲ್ಲಾ ಪ್ರಶಸ್ತಿ

ಜೇವರ್ಗಿ: ತಾಲ್ಲೂಕಿನ ಕರಕಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕಿ ದೀಪಾ ಮಲ್ಲಿಕಾರ್ಜುನ ಕಟ್ಟಿಮನಿ ಅವರಿಗೆ 2025–26ನೇ ಸಾಲಿನ ಜಿಲ್ಲಾ ಮಟ್ಟದ ‘ಗುರು ಸರ್ವೋತ್ತಮ’ ಪ್ರಶಸ್ತಿ ಘೋಷಿಸಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಸಲ್ಲಿಸುತ್ತಿರುವ ಸಮರ್ಪಿತ ಸೇವೆ ಹಾಗೂ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ತೋರಿದ ವಿಶೇಷ ಶ್ರಮವನ್ನು ಗುರುತಿಸಿ ಈ ಗೌರವಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ.

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ (ರಿ), ಬೆಂಗಳೂರು ಹಾಗೂ ಕಲಬುರಗಿ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಪ್ರಶಸ್ತಿ ನೀಡಲಾಗು ತ್ತಿದೆ. ಶಿಕ್ಷಕ ವೃತ್ತಿಗೆ ಸೇರಿದ ನಂತರದಿಂದಲೇ ದೀಪಾ ಅವರು ಸಮರ್ಪಣಾ ಭಾವದಿಂದ ಕಾರ್ಯನಿರ್ವಹಿ ಸುತ್ತಿದ್ದು, ಶಾಲೆಯ ದಾಖಲಾತಿ ಹೆಚ್ಚಳ, ನವೀನ ಬೋಧನಾ ವಿಧಾನಗಳ ಅಳವಡಿಕೆ ಹಾಗೂ ಶಾಲೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ವಿಶೇಷವಾಗಿ ಶ್ರಮಿಸುತ್ತಿದ್ದಾರೆ.

ಗ್ರಾಮಸ್ಥರನ್ನು ಒಗ್ಗೂಡಿಸಿ ಶಾಲೆಯ ಅಭಿವೃದ್ಧಿಗೆ ಕೈಗೊಂಡಿರುವ ಪ್ರಯತ್ನಗಳು ಗಮನಾರ್ಹವಾಗಿವೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಅವರು ತೋರಿರುವ ಬದ್ಧತೆ ಶ್ಲಾಘನೀಯ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಮಟ್ಟದ ಜಿಪಿಟಿ ಶಿಕ್ಷಕರ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದೀಪಾ ಮಲ್ಲಿಕಾರ್ಜುನ ಕಟ್ಟಿಮನಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರಕಿಹಳ್ಳಿ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC), ಸಹೋದ್ಯೋಗಿಗಳು, ಗ್ರಾಮದ ಮುಖಂಡರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಪ್ರಶಸ್ತಿಯಿಂದ ಜೇವರ್ಗಿ ಹಾಗೂ ಯಡ್ರಾಮಿ ತಾಲ್ಲೂ ಕಿನ ಶೈಕ್ಷಣಿಕ ವಲಯಕ್ಕೆ ಹೆಮ್ಮೆ ತಂದಿದೆ ಎಂದು ಸ್ಥಳೀಯ ರು ಸಂತಸ ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button