16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ:ಕರ್ನಾಟಕ ಸೇನೆ ಸ್ವಾಗತ

ಕೆಂಭಾವಿ: 2026–27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿಷೇಧ ಘೋಷಣೆ ಮಾಡಿರುವುದು ಸ್ವಾಗತಾರ್ಹ ನಿರ್ಧಾರವಾಗಿದೆ ಎಂದು ನಮ್ಮ ಕರ್ನಾಟಕ ಸೇನೆ ಕೆಂಭಾವಿ ಹೋಬಳಿ ಘಟಕದ ಅಧ್ಯಕ್ಷ ಶರಣು ಎಸ್. ದೇವರಮನಿ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಇಂದಿನ ಕಾಲದಲ್ಲಿ ಶ್ರೀಮಂತರ ಮಕ್ಕಳಾಗಲಿ ಬಡವರ ಮಕ್ಕಳಾಗಲಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಮಯ ಕಳೆಯುತ್ತಿರುವುದು ಅವರ ಉಜ್ವಲ ಭವಿಷ್ಯಕ್ಕೆ ಧಕ್ಕೆಯಾಗಿದೆ ಎಂದು ಹೇಳಿದರು. ರೈತರು, ಕಾರ್ಮಿಕರು ಹಾಗೂ ವಿವಿಧ ಉದ್ಯಮಗಳಲ್ಲಿ ತೊಡಗಿರುವ ಕುಟುಂಬಗಳ ಮಕ್ಕಳೂ ಕೂಡ ಮೊಬೈಲ್ ಬಳಕೆಯಿಂದ ಅಧ್ಯಯನದಿಂದ ದೂರವಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ 2026–27ನೇ ಸಾಲಿನ ಬಜೆಟ್‌ನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿಷೇಧಿಸುವ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿರುವುದು ಮಕ್ಕಳ ಭವಿಷ್ಯ ರಕ್ಷಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು. ಈ ಜನಪರ ನಿರ್ಧಾರ ಕೈಗೊಂಡ ಮುಖ್ಯಮಂತ್ರಿಗಳಿಗೆ ನಮ್ಮ ಕರ್ನಾಟಕ ಸೇನೆ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ಶರಣು ಎಸ್. ದೇವರಮನಿ ತಿಳಿಸಿದ್ದಾರೆ.



