ಕಲಬುರಗಿಜಿಲ್ಲಾಸುದ್ದಿ

ಡಿಕೆ ಶಿವಕುಮಾರ್‌ರನ್ನು ಸಿಎಂ ಮಾಡಿ! | ಕಾಂಗ್ರೆಸ್ ಹೈಕಮಾಂಡ್‌ಗೆ ಪಿಡ್ಡಪ್ಪ ಜಾಲಗಾರ ಒತ್ತಾಯ

ಕಲಬುರಗಿ: ಕರ್ನಾಟಕ ರಾಜಕಾರಣದಲ್ಲಿ ಅಪಾರ ಅನುಭವ ಹೊಂದಿರುವ ಹಾಗೂ “ಟ್ರಬಲ್ ಶೂಟರ್” ಎಂದೇ ಖ್ಯಾತರಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರನ್ನು ರಾಜ್ಯದ ಮುಖ್ಯಮಂತ್ರಿಯಾಗಿ ನೇಮಕ ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಇತರೆ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಪಿಡ್ಡಪ್ಪ ಜಾಲಗಾರ ಸುರಪೂರ ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯಲು ಡಿ.ಕೆ. ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ತಂತ್ರಗಾರಿಕೆ ಹಾಗೂ ನಾಯಕತ್ವ ಪ್ರಮುಖ ಕಾರಣವಾಗಿದೆ. ಅವರ ನಿರಂತರ ಪರಿಶ್ರಮದಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದರು.

ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ, ಗುಜರಾತ್, ಅಸ್ಸಾಂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪಕ್ಷ ಸಂಕಷ್ಟಕ್ಕೆ ಸಿಲುಕಿದ ಸಂದರ್ಭಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಿದ ಕೀರ್ತಿ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ದಿಟ್ಟ ನಾಯಕತ್ವ ಹೊಂದಿರುವ ಡಿ.ಕೆ. ಶಿವಕುಮಾರ್ ಅವರಿಗೆ ಒಂದು ಅವಕಾಶ ನೀಡಬೇಕು ಎಂಬುದು ಜನಸಾಮಾನ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಬಲವಾದ ಅಭಿಪ್ರಾಯವಾಗಿದೆ ಎಂದು ಹೇಳಿದರು.

ಮೇ 15ರಂದು ಡಿ.ಕೆ. ಶಿವಕುಮಾರ್ ಅವರ ಜನ್ಮದಿನ ಇರುವುದರಿಂದ, ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ವಿಶೇಷ ಗೌರವ ಸಲ್ಲಿಸಬೇಕು ಎಂದು ಪಿಡ್ಡಪ್ಪ ಜಾಲಗಾರ ಆಗ್ರಹಿಸಿದರು.

Show More

Related Articles

Leave a Reply

Your email address will not be published. Required fields are marked *

Back to top button