ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಗ್ಯಾರಂಟಿ ಯೋಜನೆಗಳು: ಚಂದ್ರಿಕಾ ಪರಮೇಶ್ವರ

ಜೇವರ್ಗಿ: ರಾಜ್ಯದಲ್ಲಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದ್ದು, ಗ್ಯಾರಂಟಿ ಯೋಜನೆಗಳು ಮಹಿಳೆಯರ ಸಬಲೀಕರಣಕ್ಕೆ ಮಹತ್ವದ ಹೆಜ್ಜೆಯಾಗಿವೆ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ ಹೇಳಿದರು.
ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಗ್ಯಾರಂಟಿ ಯೋಜನೆಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಬಡವರ ಪರ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ಯಾರಂಟಿ ತಾಲ್ಲೂಕು ಸಮಿತಿ ಅಧ್ಯಕ್ಷ ಶೌಕತ್ ಅಲಿ ಆಲೂರ್ ಮಾತನಾಡಿ, ಮಹಿಳೆಯರು ಇಂದು ಕೇವಲ ಅಡುಗೆ ಮನೆಗೆ ಸೀಮಿತವಾಗದೆ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದಾರೆ ಎಂದರು. ಶಾಸಕ ಹಾಗೂ ಕೆಕೆಆರ್ಡಿಬಿ ಅಧ್ಯಕ್ಷರಾದ ಅಜಯ್ ಅವರ ಆಶಯದಂತೆ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪುವಂತೆ 14 ಸದಸ್ಯರ ಸಮಿತಿ ರಚಿಸಲಾಗಿದ್ದು, ಸಮಿತಿ ಸದಸ್ಯರು ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದರು.
ಅನ್ನಭಾಗ್ಯ ಯೋಜನೆಯನ್ನು ಟೀಕಿಸುವವರಿಗೆ ತಿರುಗೇಟು ನೀಡಿದ ಅವರು, ಶ್ರೀಮಂತ ಉದ್ಯಮಿಗಳಿಗೆ ನೀಡುವ ರಿಯಾಯಿತಿಗಳ ಬಗ್ಗೆ ಪ್ರಶ್ನಿಸಿದರು.
ಇದೇ ವೇಳೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸದ ಹಾಗೂ ಸಮರ್ಪಕವಾಗಿ ನಿರ್ವಹಣೆ ಮಾಡದ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ವಿರುದ್ಧ ಶೌಕತ್ ಅಲಿ ಆಲೂರ್ ಅಸಮಾಧಾನ ವ್ಯಕ್ತಪಡಿಸಿದರು. ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಫಲಾನುಭವಿಗಳು ಗೈರಾಗಿರುವುದನ್ನು ಆಕ್ಷೇಪಿಸಿದ ಅವರು, ಮಾರ್ಚ್ 16ರಂದು ನಡೆಯಲಿರುವ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷೆ ನಿರ್ಮಲಾ ಬರಗಾಲಿ, ಇಒ ರವಿಚಂದ್ರ ರೆಡ್ಡಿ, ಸಮಿತಿ ಸದಸ್ಯರಾದ ಅಂಜುಭಾಯಿ ರಾಠೋಡ್, ರಾಜು ಗುತ್ತೇದಾರ್, ರುಕುಮ್ ತೋಲಾ ಭಾಗವಾನ್, ನಾಗರಾಜ್ ವಿ.ಟಿ., ಬಸವರಾಜ್ ದೇವದುರ್ಗ ಆಂದೋಲಾ ಉಪಸ್ಥಿತರಿದ್ದರು. ಆಹಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಯುವನಿಧಿ, ಕೆಕೆಆರ್ಟಿಸಿ ಹಾಗೂ ಜೆಸ್ಕಾಂ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



