ಎಸ್ಟಿ ಪ್ರಮಾಣಪತ್ರಕ್ಕೆ ಆಗ್ರಹಿಸಿ ದೀರ್ಘದಂಡ ನಮಸ್ಕಾರ ಪ್ರತಿಭಟನೆ; ತಹಶೀಲ್ದಾರ್ ಅಮಾನತಿಗೆ ಒತ್ತಾಯ

ಅಫಜಲಪೂರ, ಜು. 27: ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್ಟಿ) ಜಾತಿ ಪ್ರಮಾಣಪತ್ರ ನೀಡಬೇಕು ಹಾಗೂ ಅಫಜಲಪೂರ ತಾಲೂಕಿನ ಗ್ರೇಡ್–2 ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಂಡು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ ಸಮಾಜ ಸಂಘದ ನೇತೃತ್ವದಲ್ಲಿ ಸೋಮವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ತಳವಾರ ಸಮುದಾಯದ ವಿವಿಧ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಒತ್ತಾಯಿಸಿದರು. ಬಳಿಕ ತಹಶೀಲ್ದಾರ್ ಕಚೇರಿಯಿಂದ ಶಾಸಕ ಎಂ.ವೈ. ಪಾಟೀಲ ಅವರ ನಿವಾಸದವರೆಗೆ ದೀರ್ಘದಂಡ ನಮಸ್ಕಾರ ಮಾಡುತ್ತಾ ಸಾಗುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.ನ್ಯಾಯ ದೊರೆಯುವವರೆಗೆ ಶಾಸಕರ ನಿವಾಸದ ಎದುರು ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಈ ವೇಳೆ ಮಾತನಾಡಿದ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ ಸಮಾಜ ಸಂಘದ ಅಧ್ಯಕ್ಷ ಸಂತೋಷ ತಳವಾರ, ಹಲವು ವರ್ಷಗಳಿಂದ ಮನವಿ ಸಲ್ಲಿಸಿ, ವಿವಿಧ ರೀತಿಯ ಪ್ರತಿಭಟನೆಗಳನ್ನು ನಡೆಸುತ್ತಿದ್ದರೂ ಸಮುದಾಯದ ಸಮಸ್ಯೆಗಳಿಗೆ ಪರಿಹಾರ ದೊರೆತಿಲ್ಲ. ಆಡಳಿತ ಮತ್ತು ಜನಪ್ರತಿನಿಧಿಗಳ ಗಮನ ಸೆಳೆಯುವ ಉದ್ದೇಶದಿಂದ ದೀರ್ಘದಂಡ ನಮಸ್ಕಾರ ಹೋರಾಟ ಹಮ್ಮಿಕೊಳ್ಳಲಾಗಿದೆ. ಇದಕ್ಕೂ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ಸಂಘದ ಮುಖಂಡೆ ಸುನಿತಾ ತಳವಾರ ಮಾತನಾಡಿ, ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ತಳವಾರ ಸಮುದಾಯವನ್ನು ಅಧಿಕಾರಿಗಳು ಮತ್ತು ರಾಜಕೀಯ ನಾಯಕರು ನಿರಂತರವಾಗಿ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸಂವಿಧಾನಾತ್ಮಕವಾಗಿ ಎಸ್ಟಿ ಪಟ್ಟಿಯಲ್ಲಿ ಸೇರಿರುವ ತಳವಾರರಿಗೆ ಜಾತಿ ಮತ್ತು ಸಿಂಧುತ್ವ ಪ್ರಮಾಣಪತ್ರ ನೀಡದೆ ಅನ್ಯಾಯ ಮಾಡಲಾಗುತ್ತಿದೆ. ಇದು ಸಂವಿಧಾನದ ಆಶಯಕ್ಕೆ ವಿರುದ್ಧವಾದ ಕ್ರಮವಾಗಿದೆ ಎಂದು ಆರೋಪಿಸಿದರು.
ತಳವಾರ ಮಹಾಸಭೆ ಜಿಲ್ಲಾಧ್ಯಕ್ಷ ಚಂದ್ರಕಾಂತ್ ತಳವಾರ ಮಾತನಾಡಿ, ಸಮುದಾಯದ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು. ಅಫಜಲಪೂರ ತಾಲೂಕಿನ ಗ್ರೇಡ್–2 ತಹಶೀಲ್ದಾರ್ ವಿರುದ್ಧ ತಕ್ಷಣ ಕ್ರಮ ಕೈಗೊಂಡು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರವಿ ತಳವಾರ, ಭೋಗೇಶ್, ಪ್ರೇಮ್, ಕರಣ್ ಬಿರೇದಾರ, ಸಿದ್ದರಾಮ ಚಿಕ್ಕವಲಗಿ ಸೇರಿದಂತೆ ಸಮಾಜದ ಮುಖಂಡರು ಮತ್ತು ಸದಸ್ಯರು ಭಾಗವಹಿಸಿದ್ದರು.



