ಜಿಲ್ಲಾಸುದ್ದಿಗಳು

ಕಲಬುರಗಿಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ: ರೈತರಿಗೆ ₹50 ಸಾವಿರ ಪರಿಹಾರ, ₹3 ಲಕ್ಷ ಸಾಲಮನ್ನಾಕ್ಕೆ ಕೆಆರ್‌ಆರ್‌ಎಸ್ ಆಗ್ರಹ

ಕಲಬುರಗಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡುವುದರೊಂದಿಗೆ ₹3 ಲಕ್ಷದವರೆಗೆ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಸರ್ಕಾರವನ್ನು ಒತ್ತಾಯಿಸಿದೆ.

ಸಂಘದ ಜಿಲ್ಲಾ ಅಧ್ಯಕ್ಷ ನಾಗೇಂದ್ರ ಆರ್. ಥಂಭೆ ಅವರು ಸೋಮವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, ಮುಂಗಾರು ಹಂಗಾಮಿನಲ್ಲಿ ರೈತರು ಸಾಲ ಮಾಡಿ ಜಮೀನು ಸಿದ್ಧಪಡಿಸಿ, ಬೀಜ ಹಾಗೂ ರಸಗೊಬ್ಬರ ಖರೀದಿಸಿ ಬಿತ್ತನೆ ನಡೆಸಿದ್ದರೂ ಸಮರ್ಪಕ ಮಳೆಯ ಕೊರತೆಯಿಂದ ಬೆಳೆಗಳು ಒಣಗುತ್ತಿವೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದ ಶೇ.80ರಷ್ಟು ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಜಾನುವಾರುಗಳಿಗೆ ಮೇವು ಕೊರತೆ ಉಂಟಾಗಿದೆ. ಅನೇಕ ರೈತರು ತಮ್ಮ ದನ-ಕರುಗಳನ್ನು ಮಾರಾಟ ಮಾಡುವ ಅನಿವಾರ್ಯ ಸ್ಥಿತಿಗೆ ತಲುಪಿದ್ದಾರೆ. ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ 31 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಸರ್ಕಾರ ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರಸಗೊಬ್ಬರ ಹಾಗೂ ಡೀಸೆಲ್ ದರ ಏರಿಕೆಯಿಂದ ಕೃಷಿ ಉತ್ಪಾದನಾ ವೆಚ್ಚ ಗಣನೀಯವಾಗಿ ಹೆಚ್ಚಿದ್ದು, ರೈತರು ಮತ್ತಷ್ಟು ಸಾಲದ ಸುಳಿಗೆ ಸಿಲುಕುತ್ತಿದ್ದಾರೆ. ಬೆಳೆಗಳಿಗೆ ಸೂಕ್ತ ಬೆಲೆ ದೊರೆಯದ ಕಾರಣ ರೈತರು ನಷ್ಟ ಅನುಭವಿಸುತ್ತಿದ್ದು, ಸರ್ಕಾರ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಸಂಘವು ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳಲ್ಲಿ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವುದು, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡುವುದು, ₹3 ಲಕ್ಷದವರೆಗೆ ಕೃಷಿ ಸಾಲ ಮನ್ನಾ ಮಾಡುವುದು, ರಸಗೊಬ್ಬರ ದರ ಇಳಿಸುವುದು ಅಥವಾ ಹೆಚ್ಚುವರಿ ಡಿಬಿಟಿ (DBT) ಸಹಾಯಧನ ನೀಡುವುದು, ಕೃಷಿ ಚಟುವಟಿಕೆಗಳಿಗೆ ರಿಯಾಯಿತಿ ದರದಲ್ಲಿ ಡೀಸೆಲ್ ಪೂರೈಕೆ ಮಾಡುವುದು ಸೇರಿವೆ.

ಇದೇ ವೇಳೆ, ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಳೆಗಳಿಗೆ ವೈಜ್ಞಾನಿಕ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು. ಗೊಬ್ಬರ ಮಾರಾಟದಲ್ಲಿನ ಕಡ್ಡಾಯ ಲಿಂಕ್ ಪದ್ಧತಿಯನ್ನು ರದ್ದುಗೊಳಿಸಿ, ಗೊಬ್ಬರದ ಕಾಳಸಂತೆ ಹಾಗೂ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಸಂಘ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷ ಉಮಾಪತಿ ಪಾಟೀಲ, ಪ್ರಧಾನ ಕಾರ್ಯದರ್ಶಿ ರಮೇಶ್ ರಾಗಿ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಭಜಂತ್ರಿ, ಪ್ರಧಾನ ಕಾರ್ಯದರ್ಶಿ ಮಹಾದೇವಿ ಭಜಂತ್ರಿ, ತಾಲೂಕು ಅಧ್ಯಕ್ಷೆ ಅಶ್ವಿನಿ ಬಾರಗಿಡ, ಯುವ ಮೋರ್ಚಾ ಅಧ್ಯಕ್ಷ ಸಿದ್ದು ಪಾಟೀಲ, ಕಾರ್ಯದರ್ಶಿ ಕರಪ್ಪ ಕುರಗೊಂಡ, ಆಳಂದ ಅಧ್ಯಕ್ಷ ವಿಜಯಕುಮಾರ ಹತ್ತರಗಿ, ಕಾರ್ಯಾಧ್ಯಕ್ಷ ಸಿದ್ದು ವೇದಶೆಟ್ಟಿ ಹಾಗೂ ಜೇವರ್ಗಿ ಅಧ್ಯಕ್ಷ ಶರಣು ಪಾಟೀಲ ಸೇರಿದಂತೆ ವಿವಿಧ ಪದಾಧಿಕಾರಿಗಳು ಸಂಘದ ಬೇಡಿಕೆಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button