ಜಿಲ್ಲಾಸುದ್ದಿಗಳು

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಬೇಡ: ಸಂಸದರಿಗೆ ಕರುನಾಡ ವಿಜಯಸೇನೆ ಮನವಿ

ಕಲಬುರಗಿ: ಕಾವೇರಿ ನೀರು ನಿರ್ವಹಣಾ ಸಮಿತಿಯು ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ನೀಡಿರುವ ಶಿಫಾರಸ್ಸನ್ನು ತಿರಸ್ಕರಿಸಿ, ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡುವಂತೆ ಆಗ್ರಹಿಸಿ ಕರುನಾಡ ವಿಜಯಸೇನೆ ಕಲಬುರಗಿ ಜಿಲ್ಲಾ ಘಟಕದ ಪದಾಧಿಕಾರಿಗಳು ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದರಿಗೆ ಸೋಮವಾರ ಮನವಿ ಸಲ್ಲಿಸಿದರು.

ಜಿಲ್ಲಾಧ್ಯಕ್ಷ ಪೃಥ್ವಿರಾಜ ಎಸ್. ರಾಂಪೂರ ನೇತೃತ್ವದಲ್ಲಿ ಸಲ್ಲಿಸಿದ ಮನವಿಯಲ್ಲಿ, ರಾಜ್ಯದ ಹಲವು ಜಿಲ್ಲೆಗಳು ಈಗಾಗಲೇ ಬರಪೀಡಿತ ಪ್ರದೇಶಗಳಾಗಿ ಘೋಷಣೆಯಾಗಿದ್ದು, ಕೆ.ಆರ್.ಎಸ್. ಜಲಾಶಯದಲ್ಲಿಯೂ ನೀರಿನ ಸಂಗ್ರಹ ಪ್ರಮಾಣ ಕುಸಿದಿದೆ. ಇಂತಹ ಸಂದರ್ಭದಲ್ಲಿ ರಾಜ್ಯದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ನಿರ್ಧಾರ ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ತಿಳಿಸಲಾಗಿದೆ.

ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ಸಂಘಟನೆ, ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದೆ. ಮಂಡ್ಯ ಸೇರಿದಂತೆ ಕಾವೇರಿ ಕಣಿವೆಯ ರೈತರು ನೀರಿನ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದು, ರಾಜ್ಯ ಸರ್ಕಾರವು ಮರುಪರಿಶೀಲನಾ ಅರ್ಜಿ ಸಲ್ಲಿಸಿ ಕಾನೂನು ಹೋರಾಟವನ್ನು ಪರಿಣಾಮಕಾರಿಯಾಗಿ ಮುಂದುವರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ರಾಜ್ಯದ ಜನರ ಕುಡಿಯುವ ನೀರಿನ ಹಿತಾಸಕ್ತಿ ಹಾಗೂ ರೈತರ ಹಕ್ಕುಗಳನ್ನು ರಕ್ಷಿಸುವ ದೃಷ್ಟಿಯಿಂದ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಬಾರದು. ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿ ಕರ್ನಾಟಕದ ಪರವಾಗಿ ಧ್ವನಿ ಎತ್ತುವಂತೆ ಸಂಸದರನ್ನು ಸಂಘಟನೆ ಒತ್ತಾಯಿಸಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ನಾಗರಾಜ ಮ್ಯಾತ್ರಿ, ನಗರ ಅಧ್ಯಕ್ಷ ರಾಜು ಗುಂಟ್ರಾಳ, ತಾಲೂಕು ಅಧ್ಯಕ್ಷೆ ಕಲ್ಯಾಣಿ ತಳವಾರ್, ಉಪಾಧ್ಯಕ್ಷ ಪ್ರಭುಲಿಂಗ ಪೂಜಾರಿ, ಚಿಂಚೋಳಿ ತಾಲೂಕು ಯುವ ಘಟಕದ ಅಧ್ಯಕ್ಷ ಪವನ್ ಕಟ್ಟಿಮನಿ, ಶಿವಪ್ಪ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button