ಭೂಮಾನಂದ ಹತ್ಯೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಕೆಡಿಎಸ್‌ಎಸ್ ಆಗ್ರಹ
ದಲಿತ ಕುಟುಂಬಕ್ಕೆ ರಕ್ಷಣೆ, ಸೂಕ್ತ ಪರಿಹಾರ ನೀಡಲು ಸಿದ್ದು ಕೆರೂರ ಒತ್ತಾಯ

ಜೇವರ್ಗಿ, ಆ. 11: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ದಲಿತ ವ್ಯಕ್ತಿ ಭೂಮಾನಂದ ಅವರ ಭೀಕರ ಹತ್ಯೆ ಪ್ರಕರಣವನ್ನು ಖಂಡಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಜೇವರ್ಗಿ ತಾಲೂಕು ಸಂಚಾಲಕ ಸಿದ್ದು ಕೆರೂರ, ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಕುರಿತು ಮಂಗಳವಾರ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ, ಮಾರಣಾಂತಿಕ ಹಲ್ಲೆ, ಕೊಲೆ ಹಾಗೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ಇಂತಹ ಅಮಾನವೀಯ ಘಟನೆಗಳು ಮರುಕಳಿಸುತ್ತಿವೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಭೂಮಾನಂದ ಹತ್ಯೆ ಪ್ರಕರಣದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ, ಪ್ರಕರಣವನ್ನು ತ್ವರಿತ ನ್ಯಾಯಾಲಯಕ್ಕೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ, ಅಗತ್ಯವಿದ್ದರೆ ಗಲ್ಲು ಶಿಕ್ಷೆ ವಿಧಿಸುವಂತೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಮೃತ ಭೂಮಾನಂದ ಅವರ ಕುಟುಂಬಕ್ಕೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಿ, ಸರ್ಕಾರದಿಂದ ತಕ್ಷಣವೇ ಸಮರ್ಪಕ ಪರಿಹಾರವನ್ನು ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದು, ಇಂತಹ ಘಟನೆಗಳು ಮರುಕಳಿಸದಂತೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಸಿದ್ದು ಕೆರೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



