ಜಿಲ್ಲಾಸುದ್ದಿಗಳು

ಪಡಿತರ ಚೀಟಿಗೆ ಹಣ ವಸೂಲಿ: ಮಧ್ಯವರ್ತಿಗಳ ವಿರುದ್ಧ ಕ್ರಮದ ಎಚ್ಚರಿಕೆ

ಜೇವರ್ಗಿ, ಆ. 11: ವೈದ್ಯಕೀಯ ತುರ್ತು ಚಿಕಿತ್ಸೆಯ ಆಧಾರದ ಮೇಲೆ ಹೊಸ ಆದ್ಯತಾ ಪಡಿತರ ಚೀಟಿ (ಪಿಎಚ್‌ಎಚ್‌) ಪಡೆಯಲು ಹಾಗೂ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ಯಾವುದೇ ಆನ್‌ಲೈನ್ ಕೇಂದ್ರಗಳು ಅಥವಾ ಮಧ್ಯವರ್ತಿಗಳಿಗೆ ಹಣ ನೀಡಬಾರದು ಎಂದು ಆಹಾರ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ಜೇವರ್ಗಿ ಹಾಗೂ ಯಡ್ರಾಮಿ ತಾಲ್ಲೂಕುಗಳ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕೆಲವು ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಇತರ ಆನ್‌ಲೈನ್ ಕೇಂದ್ರಗಳವರು ಮತ್ತು ಮಧ್ಯವರ್ತಿಗಳು, ಹೊಸ ಪಡಿತರ ಚೀಟಿ ಮಾಡಿಸಿಕೊಡುವುದಾಗಿ ಹಾಗೂ ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆದ್ದರಿಂದ ಸಾರ್ವಜನಿಕರು ಇಂತಹ ದಂಧೆಕೋರರಿಂದ ಎಚ್ಚರಿಕೆಯಿಂದಿದ್ದು, ಯಾವುದೇ ಕಾರಣಕ್ಕೂ ಹಣ ನೀಡಬಾರದು. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಆಹಾರ ಇಲಾಖೆಯ ಶಿರಸ್ತೆದಾರರು, ಆಹಾರ ನಿರೀಕ್ಷಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸಿ ದೂರು ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ.

ನಿಷ್ಕ್ರಿಯ ಪಡಿತರ ಚೀಟಿಗಳ ದುರ್ಬಳಕೆ

ಕಳೆದ 6ರಿಂದ 12 ತಿಂಗಳಿನಿಂದ ಪಡಿತರ ಪಡೆಯದ ಪಡಿತರ ಚೀಟಿಗಳನ್ನು ಗುರುತಿಸಿಕೊಂಡು, ಮೃತಪಟ್ಟ ವ್ಯಕ್ತಿಗಳ ಹೆಸರಿನಲ್ಲಿರುವ ಹಾಗೂ ಏಕವ್ಯಕ್ತಿ ಹೆಸರಿನಲ್ಲಿರುವ ಪಡಿತರ ಚೀಟಿಗಳಿಗೆ ಬೇರೆಯವರ ಹೆಸರು ಸೇರ್ಪಡೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಅಂತಹ ಪಡಿತರ ಚೀಟಿಗಳನ್ನು ಸಂಬಂಧಪಟ್ಟವರಿಗೆ ಮರಳಿಸಬೇಕು. ಇಲ್ಲವಾದಲ್ಲಿ ಪಡಿತರ ಚೀಟಿ ಪಡೆದವರು ಹಾಗೂ ಮಾಡಿಸಿಕೊಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ಲಾಗಿನ್ ದುರ್ಬಳಕೆ

ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಲಾಗಿನ್‌ಗಳನ್ನು ನಕಲು ಮಾಡಿ ಇಂತಹ ಕೃತ್ಯಗಳಿಗೆ ಬಳಸಿಕೊಳ್ಳುತ್ತಿರುವುದು ಕೂಡ ಇಲಾಖೆಯ ಗಮನಕ್ಕೆ ಬಂದಿದೆ. ಲಾಗಿನ್ ನಕಲು ಮಾಡಲು ಸಹಕರಿಸುತ್ತಿರುವ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ. ಸಂಬಂಧಪಟ್ಟ ಕೇಂದ್ರಗಳ ಐಡಿ ಮತ್ತು ಪಾಸ್‌ವರ್ಡ್‌ಗಳನ್ನು ನಿಷ್ಕ್ರಿಯಗೊಳಿಸುವಂತೆ ಸೂಚಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆದ್ಯತಾ ಪಡಿತರ ಚೀಟಿ ಪಡೆಯಲು ಹಾಗೂ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಾರ್ವಜನಿಕರು ಮಧ್ಯವರ್ತಿಗಳ ಮೊರೆ ಹೋಗದೆ ನೇರವಾಗಿ ಆಹಾರ ಇಲಾಖೆಯ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಉಚಿತವಾಗಿ ಸೇವೆ ಪಡೆಯಬೇಕು ಎಂದು ಇಲಾಖೆ ಮನವಿ ಮಾಡಿದೆ.

Related Articles

Leave a Reply

Your email address will not be published. Required fields are marked *

Back to top button