ಶಿಸ್ತು, ಶಿಕ್ಷಣವೇ ಯಶಸ್ಸಿನ ಮೂಲ: ಅಶೋಕ್ ಕುಮಾರ್ ತಳಕೇರಿ

ಕೆಂಭಾವಿ: ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆಗೆ ಶಿಸ್ತನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಕೆಂಭಾವಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಅಶೋಕ್ ಕುಮಾರ್ ತಳಕೇರಿ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
‘ಶಿಸ್ತು ಮತ್ತು ಶಿಕ್ಷಣವೇ ಯಶಸ್ಸಿನ ಮೂಲ. ವಿದ್ಯಾರ್ಥಿಗಳು ಕಷ್ಟಪಟ್ಟು ಓದಿ ಉತ್ತಮ ಹುದ್ದೆಗಳನ್ನು ಅಲಂಕರಿಸುವ ಮೂಲಕ ತಮ್ಮ ಕುಟುಂಬ ಹಾಗೂ ಊರಿನ ಕೀರ್ತಿ ಹೆಚ್ಚಿಸಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಲೆಕ್ಕಿಸದೆ ಹೋರಾಡಿ ವೀರಮರಣ ಹೊಂದಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು’ ಎಂದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಂಕ ಗಳಿಸುವುದಷ್ಟೇ ಶಿಕ್ಷಣದ ಉದ್ದೇಶವಲ್ಲ. ಜ್ಞಾನ, ನೈತಿಕ ಮೌಲ್ಯಗಳು, ಶಿಸ್ತು ಹಾಗೂ ಸಮಯಪಾಲನೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ದೇಶದ ಜವಾಬ್ದಾರಿಯುತ ಪ್ರಜೆಯಾಗಿ ರೂಪುಗೊಳ್ಳಲು ಶಿಸ್ತುಬದ್ಧ ಶಿಕ್ಷಣವೇ ಬುನಾದಿಯಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.



