ಆ.20ರಂದು ಕಲಬುರಗಿ ಬಂದ್‌ಗೆ ಕರೆ: ಬರಪೀಡಿತ ಜಿಲ್ಲೆ ಘೋಷಣೆ ಸೇರಿದಂತೆ ರೈತರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಲಬುರಗಿ, ಆ.14: ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಹಾಗೂ ಬೆಳೆ ವಿಮೆಯಿಂದ ವಂಚಿತರಾದ ಎಲ್ಲ ರೈತರಿಗೆ ವಿಮೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಆಗಸ್ಟ್ 20ರಂದು ಕಲಬುರಗಿ ಬಂದ್‌ಗೆ ಕರೆ ನೀಡಿದೆ.
ಈ ಕುರಿತು ಮುಖಂಡರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಆಗಸ್ಟ್ 17ರಂದು ಬಂದ್‌ಗೆ ಕರೆ ನೀಡಲಾಗಿತ್ತಾದರೂ ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಅದನ್ನು ಮುಂದೂಡಲಾಗಿದ್ದು, ಇದೀಗ ಆಗಸ್ಟ್ 20ರಂದು ಬಂದ್ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ತೊಗರಿ, ಹೆಸರು, ಉದ್ದು, ಸೋಯಾಬಿನ್, ಹತ್ತಿ ಸೇರಿದಂತೆ ವಿವಿಧ ಬೆಳೆಗಳು ಮಳೆ ಕೊರತೆಯಿಂದ ಹಾನಿಗೊಳಗಾಗಿದ್ದು, ರೈತರು ಸಾಲ ಮಾಡಿ ಬಿತ್ತನೆ ನಡೆಸಿದರೂ ಬೆಳೆ ನಷ್ಟದ ಆತಂಕ ಎದುರಿಸುತ್ತಿದ್ದಾರೆ ಎಂದು ಹೇಳಿದರು.
ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಬರ ಪರಿಹಾರ ನೀಡಬೇಕು. ಬೆಳೆ ವಿಮೆ ಬಾಕಿ ಮೊತ್ತವನ್ನು ತಕ್ಷಣ ರೈತರ ಖಾತೆಗೆ ಜಮೆ ಮಾಡಬೇಕು. ವಿಮೆ ವಿತರಣೆಯಲ್ಲಿ ಯಾವುದೇ ತಾರತಮ್ಯ ಮಾಡದೆ ಅರ್ಹ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ಹಿಂಗಾರು ಬಿತ್ತನೆಗೆ ಉಚಿತ ಬೀಜ ಮತ್ತು ರಸಗೊಬ್ಬರ ವಿತರಿಸಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳ ಕೃಷಿ ಸಾಲ ಮರುಪಾವತಿಗೆ ಕಾಲಾವಕಾಶ ವಿಸ್ತರಿಸಿ ಸಾಲ ಮನ್ನಾ ಮಾಡಬೇಕು. ಜಾನುವಾರುಗಳಿಗೆ ಮೇವು ಒದಗಿಸಿ ಗೋಶಾಲೆಗಳ ವ್ಯವಸ್ಥೆ ಕಲ್ಪಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಿ ಉದ್ಯೋಗ ಕಲ್ಪಿಸಬೇಕು. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಕರ್ನಾಟಕದ ಪಾಲಿನ 15 ಟಿಎಂಸಿ ನೀರನ್ನು ಭೀಮಾ ನದಿಗೆ ಹರಿಸಬೇಕು. ಕೇಂದ್ರದ ಅಧ್ಯಯನ ತಂಡವನ್ನು ತಕ್ಷಣ ಜಿಲ್ಲೆಗೆ ಕಳುಹಿಸಿ ಬರ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಹೊಣೆಗಾರಿಕೆ ತಪ್ಪಿಸಿಕೊಳ್ಳದೆ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಆಗಸ್ಟ್ 20ರಂದು ನಡೆಯಲಿರುವ ಕಲಬುರಗಿ ಬಂದ್‌ಗೆ ರೈತರು, ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಬೆಂಬಲ ನೀಡುವಂತೆ ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ, ಅರ್ಜುನ್ ಗೊಬ್ಬೂರು, ಕರೆಪ್ಪ ಕರಗೊಂಡ, ಸಿದ್ದು ಎಸ್.ಎಲ್., ಸುಧಾಕರ್ ಇಟಗಿ ಹಾಗೂ ತಾಯಿತಾಳ ಕೊಟ್ಟಿ ಮನವಿ ಮಾಡಿದರು.
ಸರ್ಕಾರ ರೈತರ ಬೇಡಿಕೆಗಳನ್ನು ತಕ್ಷಣ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕದಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದರು.

