ವಿಜಯಕುಮಾರ ಕಟ್ಟಿಮನಿ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಲು ಆಗ್ರಹ

ಕಲಬುರಗಿ, ಆ.14: ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 35 ವರ್ಷಗಳಿಂದ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ವಿಜಯಕುಮಾರ ಕಟ್ಟಿಮನಿ ಅವರಿಗೆ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಯುವ ಮುಖಂಡ ಶರಣಬಸವ ಎಸ್. ದೊಡ್ಡಮನಿ ಕೇರಿಬೋಸಗಾ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, 1993ರಲ್ಲಿ ರಾಜಕೀಯ ಪ್ರವೇಶಿಸಿದ ವಿಜಯಕುಮಾರ ಕಟ್ಟಿಮನಿ ಅವರು 1997ರಲ್ಲಿ ಎನ್ಎಸ್ಯುಐ ಗುಲ್ಬರ್ಗಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ವಿವಿಧ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಸಕ್ರಿಯವಾಗಿ ಪ್ರಚಾರ ನಡೆಸುವ ಮೂಲಕ ಸಂಘಟನೆ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.
2000–01ರಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಡಾ. ಶರಣಪ್ರಕಾಶ ಪಾಟೀಲ ಅವರ ಅವಧಿಯಲ್ಲಿ ಗುಲ್ಬರ್ಗಾ ತಾಲ್ಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 2001ರಿಂದ 2006ರವರೆಗೆ ಅಂದಿನ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ ಗುಲ್ಬರ್ಗಾ ತಾಲ್ಲೂಕು ಲ್ಯಾಂಡ್ ಗ್ರಾಂಟ್ ಸಮಿತಿ ಹಾಗೂ ಆರಾಧನಾ ಸಮಿತಿ ಸದಸ್ಯರಾಗಿದ್ದರು. 2004ರಿಂದ 2007ರವರೆಗೆ ಫರಹತಾಬಾದ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು ಎಂದು ವಿವರಿಸಿದ್ದಾರೆ.
2004–05ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಅವಧಿಯಲ್ಲಿ ಕೆಪಿಸಿಸಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, 2007ರಿಂದ 2012ರವರೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದ ಅಲ್ಲಮಪ್ರಭು ಪಾಟೀಲ ಹಾಗೂ ಡಾ. ಶರಣಪ್ರಕಾಶ ಪಾಟೀಲ ಅವರ ಅವಧಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿದ್ದ ಎಸ್. ನಾರಾಯಣಸ್ವಾಮಿ ಅವರ ಅವಧಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. 2017ರಿಂದ 2026ರವರೆಗೆ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ದೀರ್ಘಕಾಲದ ಸಾರ್ವಜನಿಕ ಸೇವೆ, ಪಕ್ಷ ಸಂಘಟನೆಯಲ್ಲಿ ಹೊಂದಿರುವ ಅನುಭವ ಹಾಗೂ ಜಿಲ್ಲೆಯ ವಿವಿಧ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ವಿಜಯಕುಮಾರ ಕಟ್ಟಿಮನಿ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನ ನೀಡಿದರೆ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಳ್ಳಲಿದೆ. ಆದ್ದರಿಂದ ಪಕ್ಷದ ವರಿಷ್ಠರು ಅವರ ಸೇವೆಯನ್ನು ಪರಿಗಣಿಸಿ ಸೂಕ್ತ ಜವಾಬ್ದಾರಿ ನೀಡಬೇಕು ಎಂದು ಶರಣಬಸವ ಎಸ್. ದೊಡ್ಡಮನಿ ಕೇರಿಬೋಸಗಾ ಒತ್ತಾಯಿಸಿದ್ದಾರೆ.