ಕಲಬುರಗಿಜಿಲ್ಲೆ ಸುದ್ದಿ

ಮೀಸಲಾತಿ ವಿರೋಧಿ ಹೇಳಿಕೆ ಖಂಡಿಸಿ ಕೆಂಭಾವಿಯಲ್ಲಿ ಪ್ರತಿಭಟನೆ

ದಲಿತ ವಿರೋಧಿ ಹೇಳಿಕೆಗಳಿಗೆ ಶಿಸ್ತು ಕ್ರಮಕ್ಕೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿ

ಶಹಾಪುರ;ಕೆಂಭಾವಿ: ಸಂವಿಧಾನ ವಿರೋಧಿ ಹಾಗೂ ದಲಿತ ಸಮುದಾಯದ ಗೌರವಕ್ಕೆ ಧಕ್ಕೆ ಉಂಟುಮಾಡುವ ಹೇಳಿಕೆಗಳು ಮತ್ತು ಘಟನೆಗಳನ್ನು ಖಂಡಿಸಿ, ಸಾಮೂಹಿಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಬುಧವಾರ ಪಟ್ಟಣದ ಅಂಬೇಡ್ಕರ್ ಮಹಾನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರು ಉಪತಹಸೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ಬಳಿಕ ಅದೇ ಸ್ಥಳದಲ್ಲಿ ಶುದ್ಧೀಕರಣ ಕಾರ್ಯಕ್ರಮ ನಡೆಸಿದ ಘಟನೆಯನ್ನು ಅವರು ತೀವ್ರವಾಗಿ ಖಂಡಿಸಿದರು.

ರಾಜಕೀಯ ಭಿನ್ನಾಭಿಪ್ರಾಯದ ಕಾರಣಕ್ಕೆ ಸಾರ್ವಜನಿಕ ಸ್ಥಳವನ್ನು ಧಾರ್ಮಿಕ ವಿಧಿವಿಧಾನಗಳ ಮೂಲಕ ಶುದ್ಧೀಕರಿಸಿರುವುದು ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ನಡೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮೀಸಲಾತಿ ಸಂವಿಧಾನ ವಿರೋಧಿಯಾಗಿದೆ ಹಾಗೂ ಅದನ್ನು ಮುಂದುವರಿಸಬಾರದು ಎಂದು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ನೀಡಿರುವ ಹೇಳಿಕೆಗಳಿಗೂ ಪ್ರತಿಭಟನಾಕಾರರು ವಿರೋಧ ವ್ಯಕ್ತಪಡಿಸಿದರು. ಸಾಮಾಜಿಕವಾಗಿ ಹಿಂದುಳಿದ ಹಾಗೂ ಶತಮಾನಗಳಿಂದ ಶೋಷಣೆಗೆ ಒಳಗಾದ ಸಮುದಾಯಗಳಿಗೆ ಸಮಾನ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಂವಿಧಾನದಲ್ಲಿ ಮೀಸಲಾತಿ ವ್ಯವಸ್ಥೆ ಕಲ್ಪಿಸಲಾಗಿದೆ. ಹೀಗಾಗಿ ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ ನೀಡುವುದು ದಲಿತರು ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗೆ ಧಕ್ಕೆ ತರುವಂತದ್ದು ಎಂದು ಮುಖಂಡರು ಹೇಳಿದರು.

ಕರ್ನಾಟಕ ಸರ್ಕಾರದ ಸಚಿವ ವಿಜಯಾನಂದ ಕಾಶಪ್ಪನವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ದಲಿತರನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದಾರೆಂದು ಆರೋಪಿಸಿದ ಪ್ರತಿಭಟನಾಕಾರರು, ಈ ಕುರಿತು ಸಮಗ್ರ ತನಿಖೆ ನಡೆಸಿ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಾತಿ ಆಧಾರಿತ ದೌರ್ಜನ್ಯ, ದಲಿತರ ಮೇಲಿನ ಹಲ್ಲೆ, ಮನೆಗಳಿಗೆ ಬೆಂಕಿ ಹಚ್ಚುವುದು, ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ನಡೆಯುವ ಹತ್ಯೆಗಳು ಹಾಗೂ ಸಾಮಾಜಿಕ ಬಹಿಷ್ಕಾರದಂತಹ ಘಟನೆಗಳು ಇಂದಿಗೂ ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಮೀಸಲಾತಿ ವಿರೋಧಿ ಹಾಗೂ ದಲಿತ ವಿರೋಧಿ ಹೇಳಿಕೆಗಳು ಸಾಮಾಜಿಕ ನ್ಯಾಯದ ಆಶಯಗಳಿಗೆ ವಿರುದ್ಧವಾಗಿವೆ ಎಂದು ಅವರು ತಿಳಿಸಿದರು.

ಪ್ರತಿಭಟನೆಯಲ್ಲಿ ಸಾಮೂಹಿಕ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು, ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button