
ಬೆಂಗಳೂರು: ಕೋಲಿ ಸಮುದಾಯದ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದ್ದು, ನಿಗಮದ ಮೂಲಕ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಕೋಲಿ ಸಮುದಾಯದ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು ಯೋಜನೆ, ಶೈಕ್ಷಣಿಕ ಸಾಲ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳ ಜತೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ತಿಪ್ಪಣ್ಣಪ್ಪ ಕಮಕನೂರ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ ತಂಗಡಗಿ, ಈ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.


