ಕಲಬುರಗಿಜಿಲ್ಲೆ ಸುದ್ದಿ

ಒಳಮೀಸಲಾತಿ ಜಾರಿಗೆ ತರಲಿ; ವಿಶ್ವಕರ್ಮ ಸಮುದಾಯಕ್ಕೆ ವಿಧಾನ ಪರಿಷತ್‌ನಲ್ಲಿ ಪ್ರಾತಿನಿಧ್ಯ ನೀಡಿ

ಕಲಬುರಗಿ, ಆ.18: ಪರಿಶಿಷ್ಟ ಜಾತಿಗಳಲ್ಲಿನ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿರುವುದು ಸ್ವಾಗತಾರ್ಹ. ಇದೇ ಮಾದರಿಯಲ್ಲಿ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿ ವ್ಯವಸ್ಥೆಯನ್ನು ಸಮಗ್ರವಾಗಿ ಮರುಪರಿಶೀಲಿಸಿ, ಅತ್ಯಂತ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಒಬಿಸಿ ವರ್ಗದಲ್ಲೂ ಒಳಮೀಸಲಾತಿ ಜಾರಿಗೆ ತರಬೇಕು ಎಂದು ವಿಶ್ವಕರ್ಮ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ದೇವೇಂದ್ರ ದೇಸಾಯಿ ಕಲ್ಲೂರು ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಮೀಸಲಾತಿಯ ಮೂಲ ಉದ್ದೇಶ ಸಾಮಾಜಿಕ ನ್ಯಾಯ ಹಾಗೂ ಸಮಾನ ಅವಕಾಶ ಕಲ್ಪಿಸುವುದಾಗಿದೆ. ಆದರೆ ಹಿಂದುಳಿದ ವರ್ಗಗಳಲ್ಲಿನ ಕೆಲವೇ ಪ್ರಬಲ ಸಮುದಾಯಗಳು ಮೀಸಲಾತಿಯ ಹೆಚ್ಚಿನ ಸೌಲಭ್ಯಗಳನ್ನು ಪಡೆಯುತ್ತಿದ್ದು, ಅತ್ಯಂತ ಹಿಂದುಳಿದ ಹಲವು ಸಮುದಾಯಗಳು ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಸಮಗ್ರ ಅಧ್ಯಯನ ನಡೆಸಬೇಕು. ಅತ್ಯಂತ ಹಿಂದುಳಿದ ಸಮುದಾಯಗಳನ್ನು ಪ್ರತ್ಯೇಕವಾಗಿ ಗುರುತಿಸಿ, ಅವರಿಗೆ ನ್ಯಾಯಯುತ ಪಾಲು ದೊರೆಯುವಂತೆ ಒಬಿಸಿ ವರ್ಗದಲ್ಲೂ ಒಳಮೀಸಲಾತಿ ಜಾರಿಗೆ ತರುವ ಕುರಿತು ವಿಧಾನಮಂಡಲದ ಅಧಿವೇಶನದಲ್ಲಿ ಗಂಭೀರ ಚರ್ಚೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅಗತ್ಯವಿದ್ದಲ್ಲಿ ತಜ್ಞರ ಸಮಿತಿ ರಚಿಸಿ, ಸಮಗ್ರ ವರದಿ ಪಡೆದು ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ವಿಶ್ವಕರ್ಮ ಪಂಚ ಸಮುದಾಯ ಸೇರಿದಂತೆ ಅನೇಕ ಹಿಂದುಳಿದ ಸಮುದಾಯಗಳಿಗೆ ಸರ್ಕಾರದ ಯೋಜನೆಗಳು ಮತ್ತು ಅವಕಾಶಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಇಂತಹ ಸಮುದಾಯಗಳ ಸಬಲೀಕರಣಕ್ಕಾಗಿ ವಿಶೇಷ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯವಿದೆ ಎಂದು ದೇವೇಂದ್ರ ದೇಸಾಯಿ ಕಲ್ಲೂರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ವಿಶ್ವಕರ್ಮ ಪಂಚ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ ಸಮುದಾಯದ ಅರ್ಹ ವ್ಯಕ್ತಿಯೊಬ್ಬರನ್ನು ಕರ್ನಾಟಕ ವಿಧಾನ ಪರಿಷತ್ತಿನ ನಾಮನಿರ್ದೇಶಿತ ಸದಸ್ಯರಾಗಿ ನೇಮಕ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಮುದಾಯದ ಸಮಸ್ಯೆಗಳು ವಿಧಾನಮಂಡಲದಲ್ಲಿ ಪರಿಣಾಮಕಾರಿಯಾಗಿ ಪ್ರತಿಧ್ವನಿಸಲು ಇದರಿಂದ ಅವಕಾಶ ದೊರೆಯಲಿದೆ. ಸರ್ಕಾರದ ಮಟ್ಟದಲ್ಲಿ ಸಮುದಾಯದ ಅಭಿವೃದ್ಧಿ ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ದೊರೆಯುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದ್ದಾರೆ.

ಒಬಿಸಿ ಸಮುದಾಯಗಳಲ್ಲಿನ ಅತ್ಯಂತ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶೀಘ್ರವೇ ಸ್ಪಷ್ಟ ನೀತಿ ಪ್ರಕಟಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳಿಗಾಗಿ ರಾಜ್ಯವ್ಯಾಪಿ ಹೋರಾಟ ರೂಪಿಸುವ ಅನಿವಾರ್ಯತೆ ಎದುರಾಗಲಿದೆ ಎಂದು ದೇವೇಂದ್ರ ದೇಸಾಯಿ ಕಲ್ಲೂರು ಎಚ್ಚರಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button