ಕಲಬುರಗಿಜಿಲ್ಲೆ ಸುದ್ದಿ

ಅಸ್ಪೃಶ್ಯತೆ ಆಚರಣೆ ಖಂಡಿಸಿ ಕಠಿಣ ಕ್ರಮಕ್ಕೆ ಆಗ್ರಹ

ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ; ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ

ಕಲಬುರಗಿ: ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಗಂಗಾಜಲ ಸಿಂಪಡಿಸಿ ಶುದ್ಧೀಕರಣ ಮಾಡಿದ ಪ್ರಕರಣವನ್ನು ಖಂಡಿಸಿ ವಿವಿಧ ಸಂಘಟನೆಗಳ ಮುಖಂಡರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಗತ್ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಧರಣಿ ನಡೆಸಿದ ಪ್ರತಿಭಟನಾಕಾರರು, ಪ್ರಕರಣಕ್ಕೆ ಸಂಬಂಧಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬಳಿಕ ಕಲಬುರಗಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರಂತಹ ಹಿರಿಯ ರಾಜಕಾರಣಿ ಹಾಗೂ ದಲಿತ ಸಮುದಾಯದ ಗೌರವದ ಪ್ರತೀಕವಾಗಿರುವ ನಾಯಕರು ಸಭೆ ನಡೆಸಿದ ಸ್ಥಳವನ್ನು ಶುದ್ಧೀಕರಿಸಿರುವುದು ಅಸ್ಪೃಶ್ಯತೆ ಆಚರಣೆಯ ಪ್ರತೀಕವಾಗಿದೆ. ಇಂತಹ ಕೃತ್ಯಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಜಾತಿ ಆಧಾರಿತ ತಾರತಮ್ಯಕ್ಕೆ ಉತ್ತೇಜನ ನೀಡುವಂತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸಂವಿಧಾನದ ಆಶಯಕ್ಕೆ ವಿರುದ್ಧ

ಸಂವಿಧಾನದ 17ನೇ ವಿಧಿಯು ಅಸ್ಪೃಶ್ಯತೆಯನ್ನು ನಿಷೇಧಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಇಂತಹ ಕೃತ್ಯಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದ್ದರೂ, ಕಾನೂನಿನ ಭಯವಿಲ್ಲದೆ ಅಸ್ಪೃಶ್ಯತೆಯ ಆಚರಣೆ ನಡೆಯುತ್ತಿರುವುದು ಆತಂಕಕಾರಿ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಜಾತಿ ಆಧಾರಿತ ತಾರತಮ್ಯ ಮತ್ತು ಅವಮಾನಕರ ಘಟನೆಗಳಿಗೆ ಕಡಿವಾಣ ಹಾಕಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದರು.

ಖರ್ಗೆ ಅವರು ಸಭೆ ನಡೆಸಿದ ಸ್ಥಳವನ್ನು ಶುದ್ಧೀಕರಿಸುವ ಮೂಲಕ ದಲಿತ ಸಮುದಾಯಕ್ಕೆ ಅವಮಾನ ಮಾಡಲಾಗಿದೆ. ಇಂತಹ ಘಟನೆಗಳ ವಿರುದ್ಧ ಕ್ರಮ ಕೈಗೊಳ್ಳದೆ ಹೋದರೆ ಸಮಾಜದಲ್ಲಿ ಅಸ್ಪೃಶ್ಯತೆಯಂತಹ ಅನಿಷ್ಟ ಪದ್ಧತಿಗಳಿಗೆ ಮತ್ತಷ್ಟು ಉತ್ತೇಜನ ದೊರೆಯುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಬಿಜೆಪಿ ಪಕ್ಷದ ನೋಂದಣಿ ರದ್ದುಪಡಿಸುವುದು, ಆರ್‌ಎಸ್‌ಎಸ್ ಹಾಗೂ ಶ್ರೀ ರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದು ಮತ್ತು ಶುದ್ಧೀಕರಣದಲ್ಲಿ ಭಾಗಿಯಾದವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅರ್ಜುನ ಭದ್ರ, ಮಲ್ಲಿಕಾರ್ಜುನ ಕ್ರಾಂತಿ, ಮಹಾದೇಶ ಬಡದಾಳ, ಮಲ್ಲಿಕಾರ್ಜುನ ಖನ್ನಾ, ಸೂರ್ಯಕಾಂತ ಅಜಾದಪೂರ, ರಾಜಕುಮಾರ ನಿಂಬಾಳ, ಶಿವಕುಮಾರ ಕೋರಳ್ಳಿ, ಕುಮಾರ ಕುಳಗೇರಿ, ಪ್ರೀತಮ ನಾಕಮನ, ಸಾಯಬಣ್ಣ ಕೋಕಟನೂರ, ಮಹೇಶ ಕೋಕಿಲೆ, ಪರಶುರಾಮ ರಾಜಾಪೂರ, ರಾಮಣ್ಣ ಪಾಸ್ವಾನ ಹಾಗೂ ರಾಜಶೇಖರ ಹೊಸಮನಿ ಸೇರಿದಂತೆ ವಿವಿಧ ಪದಾಧಿಕಾರಿಗಳು ಪ್ರತಿಭಟನೆ ಮತ್ತು ಮನವಿ ಸಲ್ಲಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button