ಶಾಲಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾರ್ಗಸೂಚಿ ಉಲ್ಲಂಘನೆ ಆರೋಪ: ತನಿಖೆಗೆ ಆಗ್ರಹ

ಕಲಬುರಗಿ: ಜಿಲ್ಲೆಯ ದಕ್ಷಿಣ ವಲಯ ವ್ಯಾಪ್ತಿಯ ಹತ್ತಗುಂದಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳ ಕೋಣೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಿದೆ.
ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಶಿವಲಿಂಗ ಹಳಿಮನಿ ಅವರು ಕಲಬುರಗಿ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿ, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಹಾಗೂ ಇಲಾಖಾ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
2026ರ ಜುಲೈ 21ರಂದು ಹತ್ತಗುಂದಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮುಖ್ಯಗುರುಗಳ ಕೋಣೆ ಉದ್ಘಾಟನಾ ಕಾರ್ಯಕ್ರಮಕ್ಕೆ ಯಾವುದೇ ಜನಪ್ರತಿನಿಧಿಗಳು ಉಪಸ್ಥಿತರಿರಲಿಲ್ಲ. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸದೆ ಮುಖ್ಯಗುರುಗಳು ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ವೇದಿಕೆ ಆರೋಪಿಸಿದೆ. ಈ ಕುರಿತು ಸಂಜೆವಾಣಿ ದಿನಪತ್ರಿಕೆಯಲ್ಲಿ ವರದಿ ಪ್ರಕಟವಾಗಿರುವುದನ್ನೂ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಏಂಖಅ-2/1/48/2025, ಜುಲೈ 1, 2025ರ ಸುತ್ತೋಲೆಯಲ್ಲಿ ನೀಡಿರುವ ಮಾರ್ಗಸೂಚಿಗಳನ್ನು ಕಾರ್ಯಕ್ರಮದಲ್ಲಿ ಉಲ್ಲಂಘಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ವೇದಿಕೆ ಆಗ್ರಹಿಸಿದೆ.
ಇದಲ್ಲದೆ, ಕೆಲವು ಶಿಕ್ಷಕರು ಶಾಲಾ ಕರ್ತವ್ಯಕ್ಕೆ ಸಮರ್ಪಕವಾಗಿ ಹಾಜರಾಗದೆ ಹಾಜರಿ ಪುಸ್ತಕದಲ್ಲಿ ಸಹಿ ಮಾಡಿ ಕರ್ತವ್ಯ ನಿರ್ವಹಿಸಿದಂತೆ ತೋರಿಸುತ್ತಿದ್ದಾರೆ. ಶಾಲಾ ಅವಧಿಯಲ್ಲಿಯೇ ಸಭೆ, ಸಮಾರಂಭಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂಬ ಆರೋಪಗಳನ್ನೂ ವೇದಿಕೆ ಮಾಡಿದೆ.
ಶಾಲೆಯ ಮುಖ್ಯಗುರು ದೇವಿಂದ್ರಪ್ಪ ಗಣಮುಖೆ, ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಕೆ. ಗಂಗು, ಕಲಬುರಗಿ ದಕ್ಷಿಣ ತಾಲೂಕು ಅಧ್ಯಕ್ಷ ಸಂಗಣ್ಣ ಜಾಬಾ, ಕಾರ್ಯದರ್ಶಿ ಪರಮೇಶ್ವರ ದೇಸಾಯಿ, ಕಮಲಾಪುರ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಪರಮೇಶ್ವರ ಓಕಳಿ, ಕಲಬುರಗಿ ಜಿಲ್ಲಾ ಸಂಘದ ಖಜಾಂಚಿ ಸಿದ್ದರಾಮ ವಾಲಿ ಸೇರಿದಂತೆ ಸಂಬಂಧಪಟ್ಟವರ ವಿರುದ್ಧದ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸರ್ಕಾರದ ನಿಯಮಾವಳಿಗಳನ್ನು ಉಲ್ಲಂಘಿಸಿರುವುದು ತನಿಖೆಯಲ್ಲಿ ಸಾಬೀತಾದರೆ ಸಂಬಂಧಪಟ್ಟ ಮುಖ್ಯಗುರುಗಳು, ಶಿಕ್ಷಕರು ಹಾಗೂ ಸಂಘದ ಪದಾಧಿಕಾರಿಗಳ ವಿರುದ್ಧ ಕಾನೂನುಬದ್ಧ ಮತ್ತು ಇಲಾಖಾ ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ವೇದಿಕೆ ಆಗ್ರಹಿಸಿದೆ.
ಈ ಕುರಿತು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ. ಮನವಿಯೊಂದಿಗೆ ಸಂಬಂಧಪಟ್ಟ ದಾಖಲೆಗಳನ್ನೂ ಶಿಕ್ಷಣ ಇಲಾಖೆಗೆ ಸಲ್ಲಿಸಲಾಗಿದೆ.



