ಮಳೆ ಕೊರತೆ: ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪಟ್ಟಿಗೆ ಸೇರಿಸದಿರುವುದು ಖಂಡನೀಯ-ನಿತಿನ್ ಗುತ್ತೇದಾರ್

ಅಫಜಲಪುರ: ಮಳೆ ಕೊರತೆಯಿಂದ ಕಲಬುರಗಿ ಜಿಲ್ಲೆಯಲ್ಲಿ ಸಾವಿರಾರು ಎಕರೆ ಪ್ರದೇಶದ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ರಾಜ್ಯ ಸರ್ಕಾರ ಪ್ರಕಟಿಸಿರುವ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಅಫಜಲಪುರ ಸೇರಿದಂತೆ ಜಿಲ್ಲೆಯ ಯಾವುದೇ ತಾಲೂಕುಗಳನ್ನು ಸೇರ್ಪಡೆ ಮಾಡದಿರುವುದು ಖಂಡನೀಯ ಎಂದು ಜಿಪಂ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಜನರು ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆಗೂ ಮೀರಿದ ಬೆಂಬಲ ನೀಡಿದ್ದಾರೆ. ಆದರೆ ಬರಗಾಲ ಘೋಷಣೆ ಸಂದರ್ಭದಲ್ಲಿ ಇಡೀ ಜಿಲ್ಲೆಯನ್ನು ಕಡೆಗಣಿಸಿರುವುದು ರೈತರಿಗೆ ಮಾಡಿರುವ ಅನ್ಯಾಯವಾಗಿದೆ ಎಂದು ಆರೋಪಿಸಿದರು.
ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ಜಿಲ್ಲೆಯ ಎಲ್ಲ ತಾಲೂಕುಗಳನ್ನು ತಕ್ಷಣ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು. ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ಆಡಳಿತ ಪಕ್ಷದ ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಿ ರೈತರ ನೆರವಿಗೆ ಧಾವಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ತೊಗರಿ ಮತ್ತು ಹತ್ತಿ ಮಳೆ ಕೊರತೆಯಿಂದ ತೀವ್ರ ಹಾನಿಗೊಳಗಾಗುತ್ತಿವೆ. ರೈತರು ಈಗಾಗಲೇ ಸಾಲ ಮಾಡಿ ಬಿತ್ತನೆ ಮಾಡಿದ್ದು, ನಿರೀಕ್ಷಿತ ಮಳೆಯಾಗದ ಹಿನ್ನೆಲೆಯಲ್ಲಿ ಬೆಳೆಗಳು ಒಣಗುತ್ತಿವೆ. ಇಂತಹ ಸಂದರ್ಭದಲ್ಲಿ ಸರ್ಕಾರವೇ ಜಿಲ್ಲೆಯನ್ನು ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿರುವುದು ರೈತ ವಿರೋಧಿ ಧೋರಣೆಯನ್ನು ತೋರಿಸುತ್ತದೆ ಎಂದು ಟೀಕಿಸಿದರು.
ಕಲಬುರಗಿ ಜಿಲ್ಲೆಯ ಆರ್ಥಿಕತೆ ಕೃಷಿಯನ್ನೇ ಪ್ರಮುಖವಾಗಿ ಅವಲಂಬಿಸಿದ್ದು, ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ತೊಗರಿ ಮೇಲೆ ಮಳೆ ಕೊರತೆಯ ಪರಿಣಾಮ ಗಂಭೀರವಾಗಿದೆ. ಸಾವಿರಾರು ರೈತ ಕುಟುಂಬಗಳ ಬದುಕು ತೊಗರಿ ಬೆಳೆಯನ್ನೇ ಅವಲಂಬಿಸಿದೆ. ಬೆಳೆ ಹಾನಿಯಾದರೆ ತೊಗರಿ ಬೇಳೆ ಮಿಲ್ಗಳು, ಕೃಷಿ ಉತ್ಪನ್ನಗಳ ವ್ಯಾಪಾರ, ಗೋದಾಮು, ಸಾರಿಗೆ ಹಾಗೂ ಬೀಜ ಸಂಸ್ಕರಣಾ ಘಟಕಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಇದರಿಂದ ರೈತರಷ್ಟೇ ಅಲ್ಲದೆ ವ್ಯಾಪಾರ, ಉದ್ಯೋಗ ಮತ್ತು ಜಿಲ್ಲೆಯ ಒಟ್ಟಾರೆ ಆರ್ಥಿಕ ಚಟುವಟಿಕೆಗಳ ಮೇಲೂ ಪ್ರತಿಕೂಲ ಪರಿಣಾಮ ಉಂಟಾಗಲಿದೆ ಎಂದು ಎಚ್ಚರಿಸಿದರು.
ರಾಜ್ಯ ಸರ್ಕಾರ ಯಾವುದೇ ವಿಳಂಬ ಮಾಡದೆ ಮಳೆ ಕೊರತೆಯಿರುವ ಕಲಬುರಗಿ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ರೈತರಿಗೆ ತಕ್ಷಣ ಪರಿಹಾರ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಆಡಳಿತ ಪಕ್ಷದ ಶಾಸಕರ ವಿರುದ್ಧ ಜಿಲ್ಲೆಯ ಜನರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ನಿತಿನ್ ಗುತ್ತೇದಾರ್ ಎಚ್ಚರಿಸಿದರು.



