ಕಲಬುರಗಿರಾಜ್ಯ

ಕಮಲಾಪುರದಲ್ಲಿ ‘ಪ್ರಜಾ ಸೇವೆ’ಗೆ ಚಾಲನೆ‘ಆಳುವ ಸರ್ಕಾರವಲ್ಲ, ಜನರ ಸಮಸ್ಯೆ ಆಲಿಸುವ ಸರ್ಕಾರ’

ಕಲಬುರಗಿ, ಸೆ.5: ಜನರ ಅಹವಾಲುಗಳನ್ನು ಆಲಿಸಿ, ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆರಂಭಿಸಿರುವ ‘ಪ್ರಜಾ ಸೇವೆ’ ಅಭಿಯಾನಕ್ಕೆ ಶನಿವಾರ ಕಮಲಾಪುರದಲ್ಲಿ ಚಾಲನೆ ನೀಡಲಾಯಿತು.


ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗೃಹ, ಐಟಿ–ಬಿಟಿ, ಇ–ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ‘ಇದು ಆಳುವ ಸರ್ಕಾರವಲ್ಲ; ಜನರ ಸಮಸ್ಯೆಗಳನ್ನು ಆಲಿಸುವ ಸರ್ಕಾರ’ ಎಂದರು.


‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಜನರ ಸೇವೆಯೇ ಸರ್ಕಾರದ ಮೊದಲ ಆದ್ಯತೆ. ಹೀಗಾಗಿ ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಉದ್ದೇಶದಿಂದ ಪ್ರಜಾ ಸೇವೆ ಅಭಿಯಾನ ಆರಂಭಿಸಲಾಗಿದೆ’ ಎಂದು ಹೇಳಿದರು.


ಪ್ರತಿ ಅರ್ಜಿಗೂ ಸ್ವೀಕೃತಿ ಸಂಖ್ಯೆ ನೀಡಿ, ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುವುದು. ಇನ್ನು ಮುಂದೆ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ತಾಲೂಕು ಮಟ್ಟದಲ್ಲಿ ಸಾರ್ವಜನಿಕರ ಅಹವಾಲು ಆಲಿಸಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನರ ಅಹವಾಲುಗಳನ್ನು ಕಾಲಮಿತಿಯಲ್ಲಿ ಪರಿಹರಿಸುವ ಉದ್ದೇಶದಿಂದ ‘ಪ್ರಜಾ ಸೇವೆ’ಗಾಗಿ ಪ್ರತ್ಯೇಕ ಇಲಾಖೆಯನ್ನು ರಚಿಸಿದ್ದಾರೆ. ಜನರ ದುಃಖ–ದುಮ್ಮಾನಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಸ್ಥಳದಲ್ಲಿಯೇ ಪರಿಹರಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದರು.


ರೈತರಿಗೆ ಪರಿಹಾರದ ಭರವಸೆ
ಜಿಲ್ಲೆಯಲ್ಲಿ ಅನ್ನ, ಅಕ್ಷರ, ಆರೋಗ್ಯ ಹಾಗೂ ಆವಿಷ್ಕಾರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕಳೆದ ವರ್ಷ ಜಿಲ್ಲೆಯಲ್ಲಿ ₹653 ಕೋಟಿ ಬೆಳೆ ಪರಿಹಾರವನ್ನು ರೈತರಿಗೆ ನೀಡಲಾಗಿದ್ದು, ಈ ವರ್ಷವೂ 4.50 ಲಕ್ಷ ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಅರ್ಹ ರೈತರಿಗೆ ಪ್ರಾಮಾಣಿಕವಾಗಿ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ಹೇಳಿದರು.
ಬರಗಾಲ ಘೋಷಣೆ ಕುರಿತು ಮಾತನಾಡಿದ ಅವರು, ಕೇಂದ್ರದ ಎನ್‌ಡಿಆರ್‌ಎಫ್ ಮಾರ್ಗಸೂಚಿಗಳು ಬರಪೀಡಿತ ಪ್ರದೇಶ ಘೋಷಣೆಗೆ ನಿರ್ಬಂಧ ವಿಧಿಸಿವೆ. ಈ ಮಾರ್ಗಸೂಚಿಗಳನ್ನು ಸರಳೀಕರಿಸಬೇಕು ಎಂಬುದು ರಾಜ್ಯ ಸರ್ಕಾರದ ಬಹುದಿನಗಳ ಬೇಡಿಕೆಯಾಗಿದೆ ಎಂದರು.


ಕೇಂದ್ರ ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡುವ ರೀತಿಯಲ್ಲಿ ರೈತರ ಸಾಲವನ್ನೂ ಮನ್ನಾ ಮಾಡಬೇಕು ಎಂದು ಅವರು ಒತ್ತಾಯಿಸಿದರು.


₹5 ಲಕ್ಷದವರೆಗೆ ಸಾಲ ಮನ್ನಾಕ್ಕೆ ಮನವಿ
ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಮಾತನಾಡಿ, ಜಿಲ್ಲೆಯ 11 ತಾಲೂಕುಗಳೂ ಬರ ಪರಿಸ್ಥಿತಿ ಎದುರಿಸುತ್ತಿವೆ. ಬೆಳೆಗಳು ಕೈಕೊಟ್ಟಿದ್ದು, ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ಈಗಾಗಲೇ ಆರು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಕಮಲಾಪುರ ಸೇರಿದಂತೆ ಉಳಿದ ಐದು ತಾಲೂಕುಗಳನ್ನೂ ತಕ್ಷಣ ಬರಪೀಡಿತವೆಂದು ಘೋಷಿಸಬೇಕು ಎಂದು ಮನವಿ ಮಾಡಿದರು.


ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ಸಂಕಷ್ಟದಲ್ಲಿರುವ ರೈತರ ಗರಿಷ್ಠ ₹5 ಲಕ್ಷದವರೆಗಿನ ಬೆಳೆ ಸಾಲ ಮನ್ನಾ ಮಾಡಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಿದರು.


ಮಹಿಳೆಯ ಅಹವಾಲು ಆಲಿಸಿದ ಮುಖ್ಯಮಂತ್ರಿ
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡಲಿಯಿಂದಲೇ ರಾಜ್ಯದ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು.


ಕಮಲಾಪುರದ ಶೇಖಮ್ಮ ಎಂಬ ಮಹಿಳೆ ಮನೆ ನಿರ್ಮಾಣಕ್ಕೆ ಎರಡು ಕಂತು ಹಣ ಬಂದಿದ್ದು, ಮೂರನೇ ಕಂತು ಬಿಡುಗಡೆಯಾಗಿಲ್ಲ. ಪತಿ ನಿಧನ ಹೊಂದಿದ್ದು, ಮಕ್ಕಳೂ ಇಲ್ಲ. ಮನೆ ನಿರ್ಮಿಸಿಕೊಡಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಸಚಿವ ಪ್ರಿಯಾಂಕ್ ಖರ್ಗೆ ನಿಮ್ಮ ಬೇಡಿಕೆ ಈಡೇರಿಸಲಿದ್ದಾರೆ’ ಎಂದು ಭರವಸೆ ನೀಡಿದರು.


40 ಇಲಾಖೆಗಳ ಮಳಿಗೆ
ಪ್ರಜಾ ಸೇವೆ ಅಂಗವಾಗಿ ಕಮಲಾಪುರ ತಾಲೂಕಿನ 19 ಗ್ರಾಮ ಪಂಚಾಯಿತಿಗಳು ಹಾಗೂ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ ಮಳಿಗೆಗಳನ್ನು ತೆರೆಯಲಾಗಿತ್ತು. ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಕಂದಾಯ, ಗ್ರಾಮೀಣಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತ, ಆಹಾರ, ಜೆಸ್ಕಾಂ, ಯುವ ನಿಧಿ, ಸಹಕಾರ ಸೇರಿದಂತೆ 40 ಇಲಾಖೆಗಳ ಮಳಿಗೆಗಳನ್ನು ಸ್ಥಾಪಿಸಿ, ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು.


ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ‘ಜನರು ಸರ್ಕಾರಿ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಹಾಗೂ ವಿಧಾನಸೌಧಕ್ಕೆ ಅಲೆಯುವುದನ್ನು ತಪ್ಪಿಸಿ ಸರ್ಕಾರವೇ ಅವರ ಮನೆ ಬಾಗಿಲಿಗೆ ತೆರಳಿ ಅಹವಾಲು ಆಲಿಸುತ್ತಿರುವುದು ಉತ್ತಮ ಬೆಳವಣಿಗೆ’ ಎಂದರು.
ಕಾರ್ಯಕ್ರಮದಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ವಿವಿಧ ನಿಗಮ–ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಇಕ್ರಂ ಶರೀಫ್, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಸಂಕನೂರು, ಐಜಿಪಿ ಶಾಂತನು ಸಿನ್ಹಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾವಿರಾರು ಸಾರ್ವಜನಿಕರು ಪಾಲ್ಗೊಂಡಿದ್ದರು. ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸ್ವಾಗತಿಸಿದರು.

Related Articles

Leave a Reply

Your email address will not be published. Required fields are marked *

Back to top button