ಕಲಬುರಗಿಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಬಿಎಸ್ಪಿ ಆಗ್ರಹ
ರೈತರಿಗೆ ಎಕರೆಗೆ ₹30 ಸಾವಿರದಿಂದ ₹50 ಸಾವಿರ ಪರಿಹಾರ ನೀಡುವಂತೆ ಒತ್ತಾಯ

ಕಲಬುರಗಿ: ಮಳೆಯ ಕೊರತೆಯಿಂದ ಕಲಬುರಗಿ ಜಿಲ್ಲೆಯ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆಗಳು ಒಣಗಿ ನಾಶವಾಗಿದ್ದು, ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ತಕ್ಷಣ ಬರಪೀಡಿತ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಕಲಬುರಗಿ ಜಿಲ್ಲಾ ಘಟಕ ಆಗ್ರಹಿಸಿದೆ.
ಈ ಕುರಿತು ಬಿಎಸ್ಪಿ ಜಿಲ್ಲಾ ಅಧ್ಯಕ್ಷ ಶಿವಯೋಗಿ ಡಿ. ಹಡಗಿಲಕರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ, ಅಲ್ಪ ಪ್ರಮಾಣದ ಮಳೆಯಾದ ನಂತರ ಬಿತ್ತನೆ ಮಾಡಿದ್ದ ಬೆಳೆಗಳು ತೇವಾಂಶದ ಕೊರತೆಯಿಂದ ಒಣಗಿ ನಾಶವಾಗಿವೆ. ಬಾವಿ, ಕೆರೆ ಹಾಗೂ ಕೊಳವೆಬಾವಿಗಳು ಬತ್ತುತ್ತಿರುವುದರಿಂದ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಲಾಗಿದೆ.
ರಾಜ್ಯ ಸರ್ಕಾರ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದರೂ, ತೀವ್ರ ಬರದಿಂದ ಬಳಲುತ್ತಿರುವ ಕಲಬುರಗಿ ಜಿಲ್ಲೆಯ ತಾಲ್ಲೂಕುಗಳನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ರೈತರಿಗೆ ಮಾಡಿದ ಅನ್ಯಾಯವಾಗಿದೆ ಎಂದು ಬಿಎಸ್ಪಿ ಆರೋಪಿಸಿದೆ.
ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಕೂಡಲೇ ಬರಪೀಡಿತ ಎಂದು ಘೋಷಿಸಿ, ರೈತರಿಗೆ ಬೆಳೆ ವಿಮೆ ಹಾಗೂ ಬೆಳೆ ಪರಿಹಾರವನ್ನು ಬಿಡುಗಡೆ ಮಾಡಬೇಕು. ಪ್ರತಿ ಎಕರೆಗೆ ₹30 ಸಾವಿರದಿಂದ ₹50 ಸಾವಿರದವರೆಗೆ ಪರಿಹಾರ ನೀಡಬೇಕು ಎಂದು ಪಕ್ಷ ಒತ್ತಾಯಿಸಿದೆ.
ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ವ್ಯವಸ್ಥೆ ಕಲ್ಪಿಸಬೇಕು. ಗ್ರಾಮೀಣ ಜನರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಬಿಎಸ್ಪಿ ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.
ಈ ಸಂದರ್ಭದಲ್ಲಿ ರಾಜ್ಯ ಸಂಯೋಜಕ ಹಾಗೂ ಕಲಬುರಗಿ ವಲಯ ಉಸ್ತುವಾರಿ ಎಲ್.ಆರ್. ಭೋಸಲೆ, ರಾಜ್ಯ ಕಾರ್ಯದರ್ಶಿ ಡಾ. ಅನೀಲ ತಂಗಳಿ, ಶಿಪ್ಪಣ್ಣ ಎಂ. ಕಿನ್ನೂರ, ರಾಜ್ಯ ಸಮಿತಿ ಸದಸ್ಯ ಮೈಲಾರಿ ಶೇಳಗಿ, ವಿವಿಧ ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು ಹಾಗೂ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು.



