ಪ್ರಜಾ ಸೇವೆ ಆಂದೋಲನ: ಅಂತಿಮ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

ಕಲಬುರಗಿ: ರಾಜ್ಯದ ಜನತೆಯ ಕುಂದುಕೊರತೆ ಹಾಗೂ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಕಮಲಾಪುರದಲ್ಲಿ ನಡೆಯಲಿರುವ ‘ಪ್ರಜಾ ಸೇವೆ’ ಆಂದೋಲನ ಸಭೆಯ ಅಂತಿಮ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಶುಕ್ರವಾರ ಪರಿಶೀಲಿಸಿದರು.
ಕಮಲಾಪುರ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅತ್ತೂರು ಶ್ರೀನಿವಾಸುಲು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಸಂಕನೂರು ಅವರೊಂದಿಗೆ ವೇದಿಕೆ, ಪಾರ್ಕಿಂಗ್, ಊಟದ ವ್ಯವಸ್ಥೆ ಸೇರಿದಂತೆ ವಿವಿಧ ಸ್ಥಳಗಳನ್ನು ವೀಕ್ಷಿಸಿದರು.
ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದರು.
ಸಾರ್ವಜನಿಕರಿಗೆ ಮೂಲಸೌಕರ್ಯ
ಕಮಲಾಪುರ ತಾಲೂಕಿನ ವಿವಿಧ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಅಗತ್ಯ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು. ಕುಡಿಯುವ ನೀರು, ಊಟ, ಮೊಬೈಲ್ ಶೌಚಾಲಯ, ಆಸನ ಹಾಗೂ ಶಾಮಿಯಾನ ವ್ಯವಸ್ಥೆ ಮಾಡಬೇಕು. ಗಣ್ಯರು, ಅಧಿಕಾರಿಗಳು ಮತ್ತು ಸಾರ್ವಜನಿಕರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ, ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಕಾರ್ಯಕ್ರಮದ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸುವುದರ ಜತೆಗೆ, ತುರ್ತು ಪರಿಸ್ಥಿತಿಗಾಗಿ ಸ್ಥಳದಲ್ಲಿ ಆಂಬುಲೆನ್ಸ್ ಮತ್ತು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸುವಂತೆ ಸೂಚಿಸಿದರು.
ಸಾರ್ವಜನಿಕರ ಊಟಕ್ಕೆ ಯಾವುದೇ ತೊಂದರೆಯಾಗದಂತೆ ಜನಸಂಖ್ಯೆಗೆ ಅನುಗುಣವಾಗಿ ಊಟದ ಕೌಂಟರ್‌ಗಳನ್ನು ಸ್ಥಾಪಿಸಬೇಕು. ಕಾಲೇಜು ಆವರಣದಲ್ಲಿ ಸಂಪೂರ್ಣ ಸ್ವಚ್ಛತೆ ಕಾಪಾಡುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ನಿರ್ದೇಶನ ನೀಡಿದರು.
19 ಗ್ರಾ.ಪಂ.ಗಳಿಗೆ ಪ್ರತ್ಯೇಕ ಕೌಂಟರ್
ಕಮಲಾಪುರ ತಾಲೂಕಿನ 19 ಗ್ರಾಮ ಪಂಚಾಯಿತಿಗಳಿಗೆ ಪ್ರತ್ಯೇಕ ಕೌಂಟರ್‌ಗಳನ್ನು ಸ್ಥಾಪಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಇದಲ್ಲದೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಕಂದಾಯ, ಗ್ರಾಮೀಣಾಭಿವೃದ್ಧಿ, ಪಟ್ಟಣ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಲೀಡ್ ಬ್ಯಾಂಕ್, ಎಸ್‌ಐಆರ್, ವಿಬಿ-ಜಿ-ರಾಮ್‌ಜಿ, ಭಾರತ್ ಜೋಡೊ ಯುವ ಸಂಘ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಕಲ್ಯಾಣ, ಆಹಾರ, ಜೆಸ್ಕಾಂ, ಯುವನಿಧಿ ಹಾಗೂ ಸಹಕಾರ ಸೇರಿದಂತೆ ಪ್ರಮುಖ ಇಲಾಖೆಗಳು ತಮ್ಮದೇ ಆದ ಮಳಿಗೆಗಳನ್ನು ಸ್ಥಾಪಿಸಬೇಕು ಎಂದು ತಿಳಿಸಿದರು.
ಈ ಮಳಿಗೆಗಳ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವುದರ ಜೊತೆಗೆ, ಅವರ ಅರ್ಜಿ ಹಾಗೂ ಅಹವಾಲುಗಳಿಗೆ ಮಾರ್ಗದರ್ಶನ ನೀಡಬೇಕು. ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿ ಕೌಂಟರ್ ಸ್ಥಾಪಿಸುವಂತೆಯೂ ಸೂಚಿಸಿದರು.
ಪ್ರತಿ ಮಳಿಗೆಯಲ್ಲಿಯೂ ಕಂಪ್ಯೂಟರ್ ಆಪರೇಟರ್ ಹಾಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಇಂಟರ್‌ನೆಟ್ ಮತ್ತು ವಿದ್ಯುತ್ ವ್ಯವಸ್ಥೆ ಸಮರ್ಪಕವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು.
ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ
‘ಪ್ರಜಾ ಸೇವೆ’ ಸಭೆಯಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದ ದೂರು ಹಾಗೂ ಅರ್ಜಿಗಳನ್ನು ಸಚಿವರ ಮುಂದೆ ಸಲ್ಲಿಸುವ ಸಾಧ್ಯತೆ ಇದೆ. ಹೀಗಾಗಿ ಕಮಲಾಪುರ ತಾಲೂಕಿಗೆ ಸಂಬಂಧಿಸಿದ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಸಚಿವರು ಯಾವುದೇ ವಿಷಯದ ಕುರಿತು ಪ್ರಶ್ನಿಸಿದ ಸಂದರ್ಭದಲ್ಲಿ ಸ್ಥಳದಲ್ಲಿಯೇ ಸಮರ್ಪಕ ಮಾಹಿತಿ ನೀಡಿ ಉತ್ತರಿಸಬೇಕು. ಉತ್ತರ ನೀಡುವಲ್ಲಿ ವಿಳಂಬ ಅಥವಾ ತಡಬಡಿಕೆ ತೋರಿಸಿ ಸರ್ಕಾರಕ್ಕೆ ಮುಜುಗರ ಉಂಟುಮಾಡುವ ರೀತಿಯಲ್ಲಿ ಅಧಿಕಾರಿಗಳು ನಡೆದುಕೊಂಡರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸೇಡಂ ಸಹಾಯಕ ಆಯುಕ್ತ ಪ್ರಭುರೆಡ್ಡಿ, ಕಮಲಾಪುರ ತಹಶೀಲ್ದಾರ್ ಮೊಹಮ್ಮದ್ ಮೋಹಸೀನ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಪಾಟೀಲ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಕಾರ್ಯಕ್ರಮಕ್ಕೆ ನಿಯೋಜಿಸಲಾದ ಸಿಬ್ಬಂದಿ ಉಪಸ್ಥಿತರಿದ್ದರು.



