ಸಾಮಾಜಿಕ ಜಾಲತಾಣದ ಮಾನಹಾನಿಕರ ಪೋಸ್ಟ್‌ಗಳ ವಿರುದ್ಧ ಕ್ರಮಕ್ಕೆ ಕಟ್ಟಿಮನಿ ಆಗ್ರಹ

ಕಲಬುರಗಿ, ಸೆ.14: ಕೋಲಿ ಸಮಾಜದ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಲಚಪ್ಪ ಜಮಾದಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ಹಾಗೂ ಮಾನಹಾನಿಕರ ಹೇಳಿಕೆಗಳನ್ನು ಪ್ರಕಟಿಸಿರುವುದನ್ನು ಖಂಡಿಸಿ ಸೆ.16ರಂದು ನಗರದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ಅಹಿಂದ ಜನ ಸಂಘದ ರಾಜ್ಯ ಕಾರ್ಯದರ್ಶಿ ಜಯಶ್ರೀ ಎಂ. ಕಟ್ಟಿಮನಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.
ಲಚಪ್ಪ ಜಮಾದಾರ್ ಅವರ ವ್ಯಕ್ತಿತ್ವ ಹಾಗೂ ಸಾಮಾಜಿಕ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆಗಳು ಮತ್ತು ಪೋಸ್ಟ್‌ಗಳನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲು ಸಾಧ್ಯವಿಲ್ಲ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕು. ಆರೋಪಗಳು ಸತ್ಯವೆಂದು ದೃಢಪಟ್ಟಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ವ್ಯಕ್ತಿಗಳ ವಿರುದ್ಧ ಆಧಾರರಹಿತ ಆರೋಪಗಳು ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ಹರಡುವುದರಿಂದ ಸಮಾಜದಲ್ಲಿ ಅನಗತ್ಯ ಗೊಂದಲ, ವೈಮನಸ್ಸು ಹಾಗೂ ಅಶಾಂತಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಇಂತಹ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸಿದ್ದು ಹಿರೇಮಠ ಹಾಗೂ ಆಂದೋಲದ ಸಿದ್ದಲಿಂಗ ಸ್ವಾಮಿ ಅವರ ವಿರುದ್ಧವೂ ದೂರುಗಳು ಅಥವಾ ಆರೋಪಗಳು ಇದ್ದಲ್ಲಿ, ಅವುಗಳ ಬಗ್ಗೆಯೂ ಕಾನೂನುಬದ್ಧವಾಗಿ ತನಿಖೆ ನಡೆಸಬೇಕು. ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವುದು ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಕಟ್ಟಿಮನಿ ತಿಳಿಸಿದ್ದಾರೆ.
ಸೆ.16ರಂದು ನಡೆಯಲಿರುವ ಪ್ರತಿಭಟನೆ ಶಾಂತಿಯುತ ಹಾಗೂ ಕಾನೂನುಬದ್ಧವಾಗಿ ನಡೆಯಲಿದೆ. ವಿವಿಧ ಸಮುದಾಯಗಳ ಮುಖಂಡರು, ಸಾಮಾಜಿಕ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.



