ಬಿಗ್ಬಾಸ್ ಮನೆಯಿಂದ ಹೊರಬಂದ ಓಂ ಪ್ರಕಾಶ್ ರಾವ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ‘ಬಿಗ್ಬಾಸ್ ಕನ್ನಡ ಸೀಸನ್ 13’ರ ಸ್ಪರ್ಧಿ ಹಾಗೂ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಬಿಗ್ಬಾಸ್ ಮನೆಯಲ್ಲಿದ್ದಾಗಲೇ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮನೆಯಿಂದ ಹೊರಗೆ ಕರೆತರಲಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಗ್ಬಾಸ್ ಮನೆಯಿಂದ ಹೊರಬಂದ ಬಳಿಕ ಓಂ ಪ್ರಕಾಶ್ ರಾವ್ ಅವರನ್ನು ಕಾಡುಮನೆ ಎಸ್ಟೇಟ್ ಸಮೀಪದ ಆರಾಧ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ವೈದ್ಯರು ಅವರ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಸದ್ಯ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಬಿಗ್ಬಾಸ್ ಮನೆಯಲ್ಲಿದ್ದಾಗಲೇ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು ಎನ್ನಲಾಗಿದ್ದು, ಕುಟುಂಬಸ್ಥರು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ. ಅವರ ಕುಟುಂಬದ ವೈದ್ಯರೂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ಪರಿಶೀಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ತಪಾಸಣೆ ಹಾಗೂ ಚಿಕಿತ್ಸೆಗೆ ಅವರು ನಿಯಮಿತವಾಗಿ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.
ಬಿಗ್ಬಾಸ್ ಮನೆಯ ವಾತಾವರಣ ಹಾಗೂ ಆಟದ ಒತ್ತಡದಿಂದಾಗಿ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿರಬಹುದು ಎಂಬ ಮಾತುಗಳು ಕೇಳಿಬರುತ್ತಿದ್ದರೂ, ಈ ಕುರಿತು ವೈದ್ಯರಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಓಂ ಪ್ರಕಾಶ್ ರಾವ್ ಮತ್ತೆ ಬಿಗ್ಬಾಸ್ ಮನೆಗೆ ಮರಳಲಿದ್ದಾರೆಯೇ ಎಂಬ ಕುತೂಹಲವೂ ಅಭಿಮಾನಿಗಳಲ್ಲಿ ಮೂಡಿದೆ. ಈ ಹಿಂದೆಯೂ ಅವರು ಬಿಗ್ಬಾಸ್ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಅನಾರೋಗ್ಯದ ಕಾರಣದಿಂದ ಹೊರಬಂದಿದ್ದರು ಎನ್ನಲಾಗಿದೆ.
ಸದ್ಯ ಓಂ ಪ್ರಕಾಶ್ ರಾವ್ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬುದರ ಕುರಿತು ವೈದ್ಯರ ಅಧಿಕೃತ ಹೇಳಿಕೆಗಾಗಿ ನಿರೀಕ್ಷಿಸಲಾಗುತ್ತಿದೆ. ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಹಾರೈಸಿದ್ದಾರೆ.



