ಸೆ.17ರ ಕಪ್ಪು ಬಾವುಟ ಪ್ರತಿಭಟನೆ ಕೈಬಿಡಿ: ಕಮಕನೂರ್ ಮನವಿ
ತಳವಾರರಿಗೆ ಎಸ್ಟಿ ಪ್ರಮಾಣಪತ್ರ ನೀಡಲು ಸರ್ಕಾರ ಬದ್ಧ; ಬಾಕಿ ಅರ್ಜಿಗಳ ತ್ವರಿತ ವಿಲೇವಾರಿಗೆ ಕ್ರಮ

ಕಲಬುರಗಿ, ಸೆ.15: ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡ (ಎಸ್ಟಿ) ಪ್ರಮಾಣಪತ್ರ ನೀಡುವ ಕುರಿತು ರಾಜ್ಯ ಸರ್ಕಾರ ಈಗಾಗಲೇ ಅಗತ್ಯ ಕ್ರಮ ಕೈಗೊಂಡಿದ್ದು, ಸಮಾಜದ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಹರಿಸಲು ಸರ್ಕಾರ ಬದ್ಧವಾಗಿದೆ. ಹೀಗಾಗಿ ಸೆ.17ರಂದು ನಗರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯನ್ನು ಕೈಬಿಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೋಲಿ ಸಮಾಜದ ಮುಖಂಡ ತಿಪ್ಪಣ್ಣಪ್ಪ ಕಮಕನೂರ್ ಮನವಿ ಮಾಡಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಳವಾರ ಸಮಾಜದ ಅರ್ಹರಿಗೆ ಎಸ್ಟಿ ಪ್ರಮಾಣಪತ್ರ ನೀಡುವಂತೆ ಜಿಲ್ಲಾಧಿಕಾರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ. ಈ ಸಂಬಂಧ ಗ್ರೇಡ್–2 ತಹಸಿಲ್ದಾರರ ಸಭೆಯನ್ನೂ ನಡೆಸಲಾಗಿದೆ. ಅರ್ಹರಿಗೆ ಯಾವುದೇ ತೊಂದರೆಯಾಗದಂತೆ ಪ್ರಮಾಣಪತ್ರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ಸುಮಾರು 300 ಅರ್ಜಿಗಳು ಬಾಕಿ ಉಳಿದಿದ್ದು, ಅಫಜಲಪುರ ಮತ್ತು ಜೇವರ್ಗಿ ತಾಲ್ಲೂಕುಗಳಲ್ಲಿ ಹೆಚ್ಚಿನ ಸಮಸ್ಯೆ ಕಂಡುಬಂದಿತ್ತು. ಇದೀಗ ಅವುಗಳನ್ನೂ ಪರಿಹರಿಸಲಾಗಿದ್ದು, ಬಾಕಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಣ್ಣ ನೀರಾವರಿ ಹಾಗೂ ವಿಜ್ಞಾನ–ತಂತ್ರಜ್ಞಾನ ಸಚಿವ ಡಾ. ಅಜಯಸಿಂಗ್ ಮತ್ತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರಂತಹ ಪ್ರಭಾವಿ ನಾಯಕರು ಇದ್ದಾರೆ. ತಳವಾರ ಸಮಾಜಕ್ಕೆ ಅನ್ಯಾಯವಾಗಲು ಅವರು ಬಿಡುವುದಿಲ್ಲ. ಸರ್ಕಾರವೇ ಸಮಸ್ಯೆ ಪರಿಹರಿಸಲು ಮುಂದಾಗಿರುವ ಸಂದರ್ಭದಲ್ಲಿ ಪದೇಪದೇ ಹೋರಾಟ ನಡೆಸುವುದು ಸೂಕ್ತವಲ್ಲ ಎಂದು ಹೇಳಿದರು.
ಕಪ್ಪು ಬಾವುಟ ಪ್ರದರ್ಶನದಿಂದ ಸಮಾಜದ ಬೇಡಿಕೆಗಳ ಈಡೇರಿಕೆಗೆ ಅಡ್ಡಿಯಾಗುವ ಸಾಧ್ಯತೆಯಿದ್ದು, ಇಂತಹ ಕ್ರಮಕ್ಕೆ ಅವಕಾಶ ನೀಡಬಾರದು. ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಕಮಕನೂರ್ ಮನವಿ ಮಾಡಿದರು.
ಈಗಾಗಲೇ ಸಮಾಜದ ಹಲವು ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದೆ. ಚೌಡದಾನಪುರ ಅಭಿವೃದ್ಧಿಗೆ ₹100 ಕೋಟಿ ಅನುದಾನದ ಬೇಡಿಕೆ ಇದೆ. ನಗರದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಪ್ರತಿಮೆ ಸ್ಥಾಪನೆ ಕಾಮಗಾರಿ ಅಂತಿಮ ಹಂತದಲ್ಲಿದೆ. ಬೆಂಗಳೂರಿನ ವಿಧಾನಸೌಧದ ಮುಂದೆಯೂ ಅಂಬಿಗರ ಚೌಡಯ್ಯನವರ ಪ್ರತಿಮೆ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೋಲಿ ಸಮಾಜದ ಪರ್ಯಾಯ ಪದಗಳನ್ನು ಎಸ್ಟಿ ಪಟ್ಟಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲಿದೆ. ಕೋಲಿ ಮತ್ತು ತಳವಾರ ಸಮಾಜದ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿರುವುದರಿಂದ ಪ್ರತಿಭಟನೆ ಕೈಬಿಟ್ಟು ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಅವರು ಕೋರಿದರು.



