ಶಹಾಪುರದಲ್ಲಿ ‘ಬಾಗಿಲಿಗೆ ಬಂತು ಸರ್ಕಾರ’ ಪ್ರಜಾಸೇವೆ ಅಭಿಯಾನ
ಸಾರ್ವಜನಿಕರಿಂದ ಅಹವಾಲು ಸ್ವೀಕಾರ; ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಶಾಸಕ ದರ್ಶನಾಪುರ ಸೂಚನೆ

ಶಹಾಪುರ: ಕರ್ನಾಟಕ ಸರ್ಕಾರದ ವತಿಯಿಂದ ಹಮ್ಮಿಕೊಂಡಿದ್ದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ತಾಲೂಕು ಮಟ್ಟದ ಪ್ರಜಾಸೇವೆ ಅಭಿಯಾನವು ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
‘ಜನರ ಬಳಿಗೆ ಸರ್ಕಾರ–ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ’ ಎಂಬ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳ ಕುರಿತು ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಸರ್ಕಾರದ ಸವಲತ್ತುಗಳು ಹಾಗೂ ಜನಪರ ಯೋಜನೆಗಳು ಯಾವುದೇ ವಿಳಂಬವಿಲ್ಲದೆ ಕಟ್ಟಕಡೆಯ ಅರ್ಹ ಫಲಾನುಭವಿಗೂ ತಲುಪಬೇಕು. ಸಾರ್ವಜನಿಕರ ಕೆಲಸಗಳನ್ನು ಅಧಿಕಾರಿಗಳು ಆದ್ಯತೆಯ ಮೇರೆಗೆ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು ಮತ್ತು ನೂರಾರು ಸಾರ್ವಜನಿಕರು ಪಾಲ್ಗೊಂಡಿದ್ದರು.