ಸೌಜನ್ಯ ಪ್ರಕರಣ: ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ

ಬೆಂಗಳೂರು, ಸೆ.21: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಅಧಿಕೃತ ಆದೇಶ ಇನ್ನೂ ಹೊರಬಂದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಾಧ್ಯಮಗಳಲ್ಲಿ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ವರದಿಗಳು ಪ್ರಕಟವಾಗಿದ್ದರೂ, ಅಧಿಕೃತ ಆದೇಶಕ್ಕಾಗಿ ಸರ್ಕಾರ ಕಾಯುತ್ತಿದೆ. ಸೋಮವಾರ ಸಂಜೆ ವೇಳೆಗೆ ಸುಪ್ರೀಂ ಕೋರ್ಟ್‌ನ ಆದೇಶ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.
‘ಸುಪ್ರೀಂ ಕೋರ್ಟ್‌ನ ಆದೇಶವನ್ನು ಸಂಪೂರ್ಣವಾಗಿ ಪರಿಶೀಲಿಸಿದ ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಬಳಿಕ ಮುಖ್ಯಮಂತ್ರಿಗಳ ಗಮನಕ್ಕೆ ತಂದು, ನ್ಯಾಯಾಲಯದ ಸೂಚನೆಗಳಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸೌಜನ್ಯ ಪ್ರಕರಣದ ತನಿಖೆಯನ್ನು ಈ ಹಿಂದೆ ಸಿಐಡಿಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆ ನಡೆಸಿತ್ತು. ಸಿಬಿಐ ತನಿಖೆಯ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ಸಚಿವರು ಉಲ್ಲೇಖಿಸಿದ್ದಾರೆ.
‘ಇದು ಅತ್ಯಂತ ಸೂಕ್ಷ್ಮ ಪ್ರಕರಣ. ಆದ್ದರಿಂದ ಅಧಿಕೃತ ಆದೇಶ ಹೊರಬರುವ ಮುನ್ನ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದು ಅಥವಾ ತಪ್ಪು ಸಂದೇಶ ರವಾನೆಯಾಗುವಂತೆ ಮಾಡುವುದು ಸೂಕ್ತವಲ್ಲ. ಆದೇಶದ ಸಂಪೂರ್ಣ ವಿವರಗಳನ್ನು ಪರಿಶೀಲಿಸಿದ ನಂತರವೇ ಈ ಕುರಿತು ಪ್ರತಿಕ್ರಿಯಿಸಲಾಗುವುದು’ ಎಂದು ಅವರು ಹೇಳಿದ್ದಾರೆ.
ಸೋಮವಾರ ಸಂಜೆ 6.30ರಿಂದ 7 ಗಂಟೆಯೊಳಗೆ ಆದೇಶ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಸಚಿವರು ತಿಳಿಸಿದ್ದಾರೆ.



