ಗ್ಯಾರಂಟಿ ಯೋಜನೆಗಳನ್ನು ಮನೆಮನೆಗೆ ತಲುಪಿಸಿ: ಭೀಮಣ್ಣ ಸಾಲಿ

ಚಿತ್ತಾಪುರ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ನೂತನವಾಗಿ ಆಯ್ಕೆಯಾದ ಸದಸ್ಯರು ಪ್ರತಿ ಗ್ರಾಮಕ್ಕೂ ಭೇಟಿ ನೀಡಿ, ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿವೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಹೇಳಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಸದಸ್ಯರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸಬೇಕು. ಯೋಜನೆಗಳಿಂದ ವಂಚಿತರಾದ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಸೌಲಭ್ಯ ದೊರೆಯುವಂತೆ ಸದಸ್ಯರು ಕಾರ್ಯನಿರ್ವಹಿಸಬೇಕು. ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
12ನೇ ಶತಮಾನದ ಬಸವಣ್ಣನವರ ಸಮಾನತೆಯ ತತ್ವದಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿವಿಧ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಿ 14 ಮಂದಿಯನ್ನು ಸಮಿತಿಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಹೇಳಿದರು.
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ ಮಾತನಾಡಿ, ಚಿತ್ತಾಪುರ ತಾಲ್ಲೂಕಿನ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಾವಿರಾರು ಕೋಟಿ ರೂಪಾಯಿ ಅನುದಾನ ತಂದಿದ್ದಾರೆ. ಜಾತಿ ಭೇದವಿಲ್ಲದೆ ಸಣ್ಣ ಸಮುದಾಯಗಳಿಗೂ ಅವಕಾಶ ಕಲ್ಪಿಸಿದ್ದಾರೆ ಎಂದು ಹೇಳಿದರು.
ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಮತ್ತು ಸಮಿತಿ ಸದಸ್ಯ ರಮೇಶ ಹಡಪದ ಕೊಲ್ಲೂರು ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮಿತಿಯ 14 ನೂತನ ಸದಸ್ಯರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವರುದ್ರ ಭೀಣಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜಗಣ್ಣಗೌಡ ರಾಮತೀರ್ಥ, ಇಸ್ಮಾಯಿಲ್ ಸಾಬ್ ಕಮರವಾಡಿ, ರಮೇಶ ಕಟ್ಟಿಮನಿ, ಯುವ ಕಾಂಗ್ರೆಸ್ ಅಧ್ಯಕ್ಷ ದೇವು ಯಾಬಾಳ, ಸಂಜಯ ಬುಳಕರ್, ವೆಂಕಟೇಶ ಕುಲಕರ್ಣಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ವಿಠ್ಠಲ್ ಕಟ್ಟಿಮನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.



