ಮಹಿಳೆಯೊಂದಿಗಿನ ವಿವಾದದ ಪ್ರಕರಣ: ತನಿಖೆ ಪೂರ್ಣಗೊಳ್ಳುವವರೆಗೆ ರಾಷ್ಟ್ರ ರಕ್ಷಣಾ ಪಡೆಯ ಜವಾಬ್ದಾರಿಯಿಂದ ದೂರವಾದ ಅಮರಾವತಿ

ಕಲಬುರಗಿ, ಜು. 29: ಮಹಿಳೆಯೊಬ್ಬರೊಂದಿಗೆ ಉಂಟಾಗಿರುವ ವೈಯಕ್ತಿಕ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ಹಿನ್ನೆಲೆಯಲ್ಲಿ ರಾಷ್ಟ್ರ ರಕ್ಷಣಾ ಪಡೆಯ ಜವಾಬ್ದಾರಿಯಿಂದ ತಾತ್ಕಾಲಿಕವಾಗಿ ದೂರವಿರುವುದಾಗಿ ಸಂಘಟನೆಯ ಮುಖಂಡ ಮಡಿವಾಳಪ್ಪ ಬಸವರಾಜ ಅಮರಾವತಿ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬಿಕಾ ಎಂಬ ಮಹಿಳೆ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಹಣ ವಸೂಲಿ ಮಾಡಲು ಯತ್ನಿಸಿದ್ದು, ಬಳಿಕ ತಮ್ಮ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಆರೋಪಿಸಿದರು. ಪ್ರಕರಣದಲ್ಲಿ ತಮ್ಮ ಪತ್ನಿಯ ಹೆಸರನ್ನೂ ಉಲ್ಲೇಖಿಸಿರುವುದಾಗಿ ತಿಳಿಸಿದರು.
ಪರಿಚಯದ ಮೂಲಕ ಮಹಿಳೆಯೊಂದಿಗೆ ಸಂಪರ್ಕ ಬೆಳೆದ ಬಳಿಕ ವಿವಿಧ ಕಾರಣಗಳನ್ನು ಮುಂದಿಟ್ಟು ತಮ್ಮಿಂದ ಹಲವು ಬಾರಿ ಹಣ ಪಡೆದುಕೊಂಡಿದ್ದು, ಹಣ ವರ್ಗಾವಣೆ ಮಾಡಿರುವ ದಾಖಲೆಗಳು ತಮ್ಮ ಬಳಿ ಇವೆ ಎಂದು ಅವರು ಹೇಳಿದರು. ನಂತರ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿ ಮತ್ತಷ್ಟು ಹಣಕ್ಕಾಗಿ ಒತ್ತಡ ಹೇರಲಾಗಿದೆ ಎಂದು ದೂರಿದರು.
ಇತ್ತೀಚೆಗೆ ನಗರಕ್ಕೆ ಕರೆಸಿ ಹಣ ನೀಡುವಂತೆ ಒತ್ತಾಯಿಸಿದ್ದು, ಹಣ ನೀಡದಿದ್ದರೆ ತಮ್ಮ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಈ ಬೆಳವಣಿಗೆಗಳ ನಡುವೆಯೇ ತಮ್ಮ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಫ್‌ಐಆರ್ ಪ್ರತಿಯೊಂದಿಗೆ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿ ಮಾನಹಾನಿಗೆ ಯತ್ನಿಸಲಾಗಿದೆ ಎಂದು ಆರೋಪಿಸಿದರು.
ಈ ಕುರಿತು ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಅಮರಾವತಿ, ತಮ್ಮ ಮೇಲಿನ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಪ್ರಕರಣದ ತನಿಖೆ ಪೂರ್ಣಗೊಂಡು ಸತ್ಯಾಂಶ ಹೊರಬರುವವರೆಗೆ ರಾಷ್ಟ್ರ ರಕ್ಷಣಾ ಪಡೆಯ ಜವಾಬ್ದಾರಿಯಿಂದ ದೂರವಿದ್ದು ತನಿಖೆಗೆ ಸಂಪೂರ್ಣ ಸಹಕರಿಸುವುದಾಗಿ ಹೇಳಿದರು.
ಈ ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ಆರೋಪಗಳ ಸತ್ಯಾಸತ್ಯತೆ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.



