ಜಿಲ್ಲಾಸುದ್ದಿಗಳು

ಫುಲೆ ಕನಸಿನ ಶಿಕ್ಷಣ ವ್ಯವಸ್ಥೆ ಇಂದು ಅಪಾಯದಲ್ಲಿದೆ: ಸರ್ಕಾರಗಳ ವಿರುದ್ಧ ಕಿನ್ನೂರ ವಾಗ್ದಾಳಿ

ಕಲಬುರಗಿ: ಮಹಾತ್ಮ ಜ್ಯೋತಿರಾವ್ ಫುಲೆ ಅವರ 200ನೇ ಜನ್ಮ ದಿನಾಚರಣೆ ಅಂಗವಾಗಿ ನಗರದ ಹರಳಯ್ಯ ಸಮುದಾಯ ಭವನದಲ್ಲಿ ‘ಮೀಸಲಾತಿಯಲ್ಲಿ ಕೆನೆಪದರು’ ವಿಷಯ ಕುರಿತು ವಿಚಾರ ಸಂಕಿರಣ ನಡೆಯಿತು. ಕಾರ್ಯಕ್ರಮದಲ್ಲಿ ಸಾಮಾಜಿಕ ನ್ಯಾಯ, ಸಾರ್ವತ್ರಿಕ ಶಿಕ್ಷಣ, ಮೀಸಲಾತಿ ಹಾಗೂ ಸಂವಿಧಾನದ ಆಶಯಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಿವಲಿಂಗಪ್ಪ ಕಿನ್ನೂರ ಅವರು, ಮಹಾತ್ಮ ಜ್ಯೋತಿರಾವ್ ಫುಲೆ ಅವರು ಸಮಾಜದ ಶೋಷಿತ, ವಂಚಿತ ಹಾಗೂ ಹಿಂದುಳಿದ ವರ್ಗಗಳಿಗೆ ಶಿಕ್ಷಣದ ಹಕ್ಕು ದೊರೆಯಬೇಕು ಎಂಬ ಮಹತ್ತರ ಉದ್ದೇಶದಿಂದ ತಮ್ಮ ಪತ್ನಿ ಸಾವಿತ್ರಿಬಾಯಿ ಫುಲೆ ಅವರೊಂದಿಗೆ ಶಾಲೆಗಳನ್ನು ಆರಂಭಿಸಿ ಶಿಕ್ಷಣ ಕ್ರಾಂತಿಗೆ ನಾಂದಿ ಹಾಡಿದ್ದರು. ಶಿಕ್ಷಣದ ಮೂಲಕವೇ ಸಾಮಾಜಿಕ ಅಸಮಾನತೆಯನ್ನು ನಿರ್ಮೂಲನೆ ಮಾಡಬಹುದು ಎಂಬುದು ಅವರ ದೃಢ ನಿಲುವಾಗಿತ್ತು. ಆದರೆ ಇಂದು ಬಡ ಹಾಗೂ ಹಿಂದುಳಿದ ಕುಟುಂಬಗಳ ಮಕ್ಕಳು ಶಿಕ್ಷಣದಿಂದ ದೂರವಾಗುವಂತಹ ನೀತಿಗಳು ಜಾರಿಯಾಗುತ್ತಿರುವುದು ಫುಲೆ ಅವರ ಆದರ್ಶಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಶಿಕ್ಷಣದ ಹಕ್ಕು, ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಹಾಗೂ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಪ್ರತಿಭಟನೆ ನಡೆಸಿದಾಗ, ಅವರ ಮೇಲೆ ಲಾಠಿಚಾರ್ಜ್ ನಡೆಸಿ ಹೋರಾಟಗಳನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿರುವುದು ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳನ್ನು ಸಂವಾದದ ಮೂಲಕ ಪರಿಹರಿಸಬೇಕೇ ಹೊರತು ದಮನದ ಮೂಲಕ ಅಲ್ಲ. ಇಂತಹ ಬೆಳವಣಿಗೆಗಳು ಸಂವಿಧಾನದ ಆಶಯಗಳು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಮಹಾತ್ಮ ಫುಲೆ ಅವರು ಪ್ರತಿಪಾದಿಸಿದ್ದ ಸಮಾನತೆ, ಶಿಕ್ಷಣ, ಮಹಿಳಾ ಸಬಲೀಕರಣ ಹಾಗೂ ಸಾಮಾಜಿಕ ನ್ಯಾಯದ ತತ್ವಗಳು ಕೇವಲ ಜಯಂತಿ ಆಚರಣೆಗಳಿಗೆ ಸೀಮಿತವಾಗದೆ ಆಡಳಿತದ ನೀತಿಗಳಲ್ಲೂ ಪ್ರತಿಬಿಂಬಿಸಬೇಕು. ಸಮಾಜದ ಕೊನೆಯ ವ್ಯಕ್ತಿಗೂ ಗುಣಮಟ್ಟದ ಶಿಕ್ಷಣ, ಉದ್ಯೋಗ, ಸಾಮಾಜಿಕ ನ್ಯಾಯ ಹಾಗೂ ಗೌರವಯುತ ಬದುಕಿನ ಅವಕಾಶ ಕಲ್ಪಿಸುವ ಜವಾಬ್ದಾರಿ ಸರ್ಕಾರಗಳ ಮೇಲಿದೆ ಎಂದು ಅವರು ಹೇಳಿದರು.

ಹಿಂದುಳಿದ ವರ್ಗಗಳು ಹಾಗೂ ಕೆನೆಪದರು ಸೇರಿದಂತೆ ವಿವಿಧ ಸಮುದಾಯಗಳ ಇತಿಹಾಸ, ಹಕ್ಕುಗಳು ಮತ್ತು ಸಾಮಾಜಿಕ ಕೊಡುಗೆಗಳ ಕುರಿತು ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಯುವಜನರು ಮಹಾತ್ಮ ಜ್ಯೋತಿರಾವ್ ಫುಲೆ, ಸಾವಿತ್ರಿಬಾಯಿ ಫುಲೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳನ್ನು ಅಳವಡಿಸಿಕೊಂಡು ಸಮಾನತೆ, ವೈಜ್ಞಾನಿಕ ಮನೋಭಾವ ಮತ್ತು ಸಾಮಾಜಿಕ ಸಾಮರಸ್ಯವನ್ನು ಬೆಳೆಸಬೇಕು ಎಂದು ಕರೆ ನೀಡಿದರು.

ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಿ, ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ಅನುದಾನ ಹಾಗೂ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಬೇಕು. ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ. ಮಲ್ಲಿಕಾರ್ಜುನ ಮುಕ್ಕಾ , ಶಂಕರ ಕಟ್ಟಿಸಂಗಾವಿ, ವೆಂಕಟೇಶ್ ದೊರೆಪಲಿ, ಬಿ.ಎಂ. ರಾವೂರ, ಅಣ್ಣಪ್ಪ ಜಮಾದಾರ್, ಮಲ್ಲಿಕಾರ್ಜುನ ಹೇಳವ್ವರ, ಶ್ರೀಮಂತ ಮಾವನೂರು, ಮೈಲಾರಿ ಶಳ್ಳಿಗಿ ಸೇರಿದಂತೆ ಹಲವು ಗಣ್ಯರು ಮಾತನಾಡಿದರು. ವಿವಿಧ ಸಂಘಟನೆಗಳ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button