ಕಲಬುರಗಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಬರ ಘೋಷಣೆಗೆ ಆಗ್ರಹ

ಕಲಬುರಗಿ, ಆ. 20: ಕಲಬುರಗಿಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ಕರೆ ನೀಡಿದ್ದ ‘ಕಲಬುರಗಿ ಬಂದ್’ಗೆ ಗುರುವಾರ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ಬೆಳಿಗ್ಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ರೈತರು ಜಮಾಯಿಸಿ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಪರದಾಡಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿದ್ದರಿಂದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಹಾಗೂ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು.
ನಗರದ ಗಂಜ್ ಪ್ರದೇಶದಲ್ಲಿಯೂ ರೈತರು ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಬಂದ್ ಹಿನ್ನೆಲೆಯಲ್ಲಿ ಗಂಜ್ ಪ್ರದೇಶದ ಬಹುತೇಕ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು. ಆದರೆ ಸೂಪರ್ ಮಾರ್ಕೆಟ್ ಸೇರಿದಂತೆ ನಗರದ ಇತರ ಪ್ರಮುಖ ಜನನಿಬಿಡ ಪ್ರದೇಶಗಳಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಬರ ಘೋಷಣೆಗೆ ಒತ್ತಾಯ
‘ಸೂಪರ್ ಎಲ್‌ನಿನೋ’ ಪರಿಣಾಮದಿಂದ ಜಿಲ್ಲೆಯಲ್ಲಿ ಭೀಕರ ಬರದ ಛಾಯೆ ಆವರಿಸಿದ್ದು, ಮುಂಗಾರು ಬೆಳೆ ಸಂಪೂರ್ಣ ಕೈಕೊಟ್ಟಿದೆ. ಕಳೆದ ವರ್ಷದ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿಯೂ ಅನ್ಯಾಯವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ತುರ್ತು ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು, ರೈತರ ಸಾಲ ಮನ್ನಾ ಮಾಡಬೇಕು ಹಾಗೂ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಕರ್ನಾಟಕದ ಪಾಲಿನ 15 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಮುಂಗಾರು ಮಳೆಯ ಕೊರತೆಯಿಂದ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿವೆ. ಹೆಸರು, ಉದ್ದು, ಸೋಯಾಬೀನ್, ಎಳ್ಳು, ಹತ್ತಿ ಹಾಗೂ ಕಬ್ಬು ಸೇರಿದಂತೆ ಪ್ರಮುಖ ಬೆಳೆಗಳು ಸಮರ್ಪಕವಾಗಿ ಬೆಳವಣಿಗೆಯಾಗದೆ ರೈತರು ಭಾರಿ ನಷ್ಟ ಅನುಭವಿಸುತ್ತಿದ್ದಾರೆ. ಆದರೂ ಸರ್ಕಾರ ಬರ ಪರಿಹಾರ ಘೋಷಿಸಲು ವಿಳಂಬ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸಂಯುಕ್ತ ಹೋರಾಟ ಕರ್ನಾಟಕದ ಸಂಚಾಲಕ ಶರಣಬಸಪ್ಪ ಮಮಶೆಟ್ಟಿ, ರೈತ ಮುಖಂಡರಾದ ಭೀಮಾಶಂಕರ ಮಾಡಿಯಾಳ, ಮೌಲಾ ಮುಲ್ಲಾ, ನಾಗೇಂದ್ರ ಥಂಬೆ, ಎಂ.ಬಿ. ಸಜ್ಜನ್, ಕರೆಪ್ಪ ಕರಗೊಂಡ, ಸಿದ್ದು ಎಸ್.ಎಲ್., ಪದ್ಮಿನಿ ಕಿರಣಗಿ, ಅಶ್ಫಾಕ್ ಮುಲ್ಲಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಭಾ, ಕರ್ನಾಟಕ ರಾಜ್ಯ ರೈತ ಸಂಘ, ಜೈ ಕನ್ನಡಿಗರ ರಕ್ಷಣಾ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ, ಡಿಎಸ್‌ಎಸ್, ಕರ್ನಾಟಕ ನವ ನಿರ್ಮಾಣ ಸೇನೆ ಹಾಗೂ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿದ್ದವು.
ಬಂದ್ ಹಿನ್ನೆಲೆಯಲ್ಲಿ ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ನಗರದ ಹಲವೆಡೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.



