ಕಲಬುರಗಿಜಿಲ್ಲೆ ಸುದ್ದಿ

ಕಲ್ಯಾಣ ಕರ್ನಾಟಕದಲ್ಲಿ ಸಚಿವ ಸಂಪುಟ ಸಭೆ ನಡೆಸಿ ರೈತರ ಸಮಸ್ಯೆ ಪರಿಹರಿಸಿ: ದಯಾನಂದ ಪಾಟೀಲ

ಕಲಬುರಗಿ, ಆ.20: ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ರೈತರ ಸಂಕಷ್ಟ ಪರಿಹರಿಸಲು ಈ ಭಾಗದಲ್ಲಿ ಒಂದು ದಿನದ ಸಚಿವ ಸಂಪುಟ ಸಭೆ ನಡೆಸಬೇಕು ಎಂದು ನವ ಕರ್ನಾಟಕ ರೈತ ಸಂಘದ ಅಧ್ಯಕ್ಷ ದಯಾನಂದ ಸಿ. ಪಾಟೀಲ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ ಮೂರು ವರ್ಷಗಳಿಂದ ಈ ಭಾಗದ ರೈತರು ಒಂದಿಲ್ಲೊಂದು ಸಂಕಷ್ಟ ಎದುರಿಸುತ್ತಿದ್ದಾರೆ. ಹಿಂದೆ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿತ್ತು. ಬಳಿಕ ಮಳೆ ಕೊರತೆಯಿಂದ ಬೆಳೆ ನಷ್ಟವಾಗಿದೆ. ಪ್ರಸಕ್ತ ವರ್ಷವೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಬರ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.

ಬೆಳೆ ನಷ್ಟ ಹಾಗೂ ಸಾಲದ ಹೊರೆ ತಾಳಲಾರದೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಈ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣ ಸ್ಪಂದಿಸಿ ಕಲ್ಯಾಣ ಕರ್ನಾಟಕದಲ್ಲಿ ಸಚಿವ ಸಂಪುಟ ಸಭೆ ನಡೆಸಿ ರೈತರ ಸಮಸ್ಯೆಗಳ ಕುರಿತು ಸಮಗ್ರ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕವನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವುದು, ರೈತರ ಸಾಲ ಮನ್ನಾ ಮಾಡುವುದು, ಬಾಕಿ ಉಳಿದಿರುವ ಬೆಳೆ ವಿಮೆ ಮೊತ್ತವನ್ನು ಬಿಡುಗಡೆ ಮಾಡುವುದು ಹಾಗೂ ಸಮರ್ಪಕ ಬರ ಪರಿಹಾರ ಒದಗಿಸುವ ಕುರಿತು ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

‘ಸರ್ಕಾರ ಈ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಕಲ್ಯಾಣ ಕರ್ನಾಟಕದ ರೈತರು, ಕೂಲಿಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರನ್ನು ಒಳಗೊಂಡು ಉಗ್ರ ಸ್ವರೂಪದ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಅವರು ಎಚ್ಚರಿಸಿದರು.

ಸಂಘದ ಜಿಲ್ಲಾ ಅಧ್ಯಕ್ಷ ಸುರೇಶ ಗುತ್ತೇದಾರ, ಯುವ ಅಧ್ಯಕ್ಷ ಶಿವರುದ್ರಯ್ಯ ಹಿರೇಮಠ, ಜಿಲ್ಲಾ ಯುವ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ಚೌಧರಿ, ಶಿವಾನಂದ ಮಠಪತಿ, ಅಮರ್ ಝಳಕಿ ಹಾಗೂ ನಾಗೇಂದ್ರ ದಂಡೋತಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

janabhipraya

https://janabhipraya.com

Related Articles

Leave a Reply

Your email address will not be published. Required fields are marked *

Back to top button