ಜಿಲ್ಲಾಸುದ್ದಿಗಳು

ಕೆಂಭಾವಿ ಪುರಸಭೆಯಲ್ಲಿ ಹಣ ದುರ್ಬಳಕೆ ಆರೋಪ: ಸಮಗ್ರ ತನಿಖೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ

ಕೆಂಭಾವಿ: ಕೆಂಭಾವಿ ಪುರಸಭೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಹಣ ದುರ್ಬಳಕೆ ನಡೆದಿದೆ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಯೋಜನಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಪುರಸಭೆ ವ್ಯಾಪ್ತಿಯ ಸಾರ್ವಜನಿಕ ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಾದ ಅನುದಾನವನ್ನು ಸಮರ್ಪಕವಾಗಿ ಬಳಸದೆ ಅವ್ಯವಹಾರ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತಪಡಿಸಿರುವ ಸಮಿತಿ, ಹಣಕಾಸು ವ್ಯವಹಾರಗಳ ಸಂಪೂರ್ಣ ಪರಿಶೀಲನೆ ನಡೆಸಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಒತ್ತಾಯಿಸಿದೆ.

ವಾರ್ಡ್ ಸಂಖ್ಯೆ–2ರ ಡಾ. ಬಿ.ಆರ್. ಅಂಬೇಡ್ಕರ್ ಚೌಕದ ಸಮೀಪದ ಚರಂಡಿಯ ಮೇಲೆ ಆರ್‌ಸಿಸಿ ನಿರ್ಮಾಣ ಮಾಡುವುದಾಗಿ ದಾಖಲೆಗಳಲ್ಲಿ ತೋರಿಸಲಾಗಿದ್ದರೂ, ಸ್ಥಳದಲ್ಲಿ ಕಾಮಗಾರಿ ಪೂರ್ಣಗೊಳಿಸದೇ ಅನುದಾನ ದುರ್ಬಳಕೆ ಮಾಡಲಾಗಿದೆ ಎಂದು ಸಮಿತಿ ಆರೋಪಿಸಿದೆ. ಕಾಮಗಾರಿ ಅಪೂರ್ಣವಾಗಿರುವುದರಿಂದ ಸಾರ್ವಜನಿಕರು ದಿನನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಯ ಗುಣಮಟ್ಟ ಹಾಗೂ ವೆಚ್ಚದ ಕುರಿತು ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸಾರ್ವಜನಿಕ ಹಣದ ದುರ್ಬಳಕೆಯನ್ನು ತಡೆಯಬೇಕು ಎಂದು ಸಮಿತಿ ಆಗ್ರಹಿಸಿದೆ.

ಇದಲ್ಲದೆ, ಸಾರ್ವಜನಿಕರ ಅನುಕೂಲಕ್ಕಾಗಿ ಅಗತ್ಯ ಮೂಲಸೌಕರ್ಯ, ಸ್ವಚ್ಛತಾ ವ್ಯವಸ್ಥೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕು. ಸಾರ್ವಜನಿಕರ ಅಹವಾಲುಗಳನ್ನು ನಿರ್ಲಕ್ಷಿಸದೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಡಳಿತವನ್ನು ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button