ಕುಡುಒಕ್ಕಲಿಗ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಆಗ್ರಹ

ಕಲಬುರಗಿ: ಕುಡುಒಕ್ಕಲಿಗ ಸಮುದಾಯವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಗೆ ಸೇರ್ಪಡೆಗೊಳಿಸಿ, ಸಮುದಾಯದ ಅರ್ಹರಿಗೆ ಪ್ರವರ್ಗ–3ಎ ಅಡಿಯಲ್ಲಿ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ಕಲಬುರಗಿ ಜಿಲ್ಲಾ ಕುಡುಒಕ್ಕಲಿಗ ಅಭಿವೃದ್ಧಿ ಸೇವಾ ಸಂಘದ ವತಿಯಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಮುಖ್ಯಮಂತ್ರಿ, ಸಚಿವ ಸಂಪುಟದ ಎಲ್ಲ ಸಚಿವರು, ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಸಲ್ಲಿಸಿರುವ ಮನವಿಯಲ್ಲಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ–2025ರಲ್ಲಿ ‘ಒಕ್ಕಲಿಗ’ ಜಾತಿಯ ಅಡಿಯಲ್ಲಿ ‘ಕುಡುಒಕ್ಕಲಿಗ/ಕುಡು ಒಕ್ಕಲ/ಕುಡು ವಕ್ಕಲಿಗ’ (ಕೋಡ್ A-0771) ಎಂಬ ಉಪಜಾತಿಯನ್ನು ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕುಡುಮಕ್ಕಳಿಗ ಸಮುದಾಯವನ್ನು ಹಿಂದುಳಿದ ವರ್ಗಗಳ ಜಾತಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಲಾಗಿದೆ.
ಕುಡುಒಕ್ಕಲಿಗ ಸಮುದಾಯವು ಹಲವು ದಶಕಗಳಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದು, ಹೆಚ್ಚಿನ ಕುಟುಂಬಗಳು ಮಳೆಆಧಾರಿತ ಕೃಷಿ ಹಾಗೂ ಕೂಲಿ ಕೆಲಸವನ್ನೇ ಅವಲಂಬಿಸಿವೆ. ಮೀಸಲಾತಿ ಸೌಲಭ್ಯದಿಂದ ವಂಚಿತರಾಗಿರುವುದರಿಂದ ಸಮುದಾಯದ ಮಕ್ಕಳ ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ಪ್ರಗತಿಗೆ ತೊಂದರೆಯಾಗುತ್ತಿದೆ ಎಂದು ಸಂಘ ಮನವಿಯಲ್ಲಿ ತಿಳಿಸಿದೆ.
ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಬೆಂಗಳೂರು ಸೇರಿದಂತೆ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಗದಗ, ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕುಡುಒಕ್ಕಲಿಗ ಸಮುದಾಯದ ಜನರು ವಾಸಿಸುತ್ತಿದ್ದಾರೆ. ಆದರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸಮುದಾಯ ಸ್ಪಷ್ಟವಾಗಿ ಸೇರ್ಪಡೆಯಾಗದಿರುವ ಕಾರಣ ಜಾತಿ ಪ್ರಮಾಣಪತ್ರ ಪಡೆಯುವಲ್ಲಿ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಸಂಘ ಆರೋಪಿಸಿದೆ.
ಕೆಲವು ಕಂದಾಯ ಅಧಿಕಾರಿಗಳು ಜಾತಿ ಪ್ರಮಾಣಪತ್ರ ನೀಡುತ್ತಿದ್ದರೆ, ಇನ್ನೂ ಕೆಲವು ಕಡೆ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ಇದರಿಂದ ಸಮುದಾಯದ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಮೀಸಲಾತಿ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಆದ್ದರಿಂದ ಸರ್ಕಾರವು ಕುಡುಒಕ್ಕಲಿಗ ಸಮುದಾಯದ ಬಹುದಿನಗಳ ಬೇಡಿಕೆಯನ್ನು ಪರಿಗಣಿಸಿ, ವಿಧಾನಸಭೆ ಅಧಿವೇಶನ ಹಾಗೂ ಸಚಿವ ಸಂಪುಟದ ಮುಂದೆ ಸಂಬಂಧಿಸಿದ ಕಡತ ಮಂಡಿಸಿ ಅನುಮೋದನೆ ನೀಡಬೇಕು. ಅಲ್ಲದೆ ಕಲ್ಯಾಣ ಕರ್ನಾಟಕ ಹಾಗೂ ಸುವರ್ಣ ಕರ್ನಾಟಕ ಭಾಗದ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ಗಳು ಮತ್ತು ಸಂಬಂಧಪಟ್ಟ ಕಂದಾಯ ಅಧಿಕಾರಿಗಳಿಗೆ ಅರ್ಹ ಕುಡುಒಕ್ಕಲಿಗರಿಗೆ ಜಾತಿ ಪ್ರಮಾಣಪತ್ರ ನೀಡುವ ಕುರಿತು ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಸಂಘ ಒತ್ತಾಯಿಸಿದೆ.
ಸಮುದಾಯಕ್ಕೆ ಸಂವಿಧಾನಬದ್ಧ ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯ ದೊರಕಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕಲಬುರಗಿ ಜಿಲ್ಲಾ ಕುಡುಒಕ್ಕಲಿಗ ಅಭಿವೃದ್ಧಿ ಸೇವಾ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಣ್ಣಗೌಡ ಬಿ. ಪಾಟೀಲ ಶಂಕರವಾಡಿ ಮನವಿ ಮೂಲಕ ಆಗ್ರಹಿಸಿದ್ದಾರೆ.



