ಸಚಿವ ಸ್ಥಾನ ಸಿಗದಿದ್ದಕ್ಕೆ ನೋವು; ಹತಾಶನಲ್ಲ: ಬಿ.ಆರ್. ಪಾಟೀಲ್

ಕಲಬುರಗಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದಿರುವುದಕ್ಕೆ ನೋವಾಗಿದೆ. ಆದರೆ ಇದರಿಂದ ತಾನು ಹತಾಶನಾಗಿಲ್ಲ ಎಂದು ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ.
ಈ ಕುರಿತು ಬುಧವಾರ ಪ್ರಕಟಣೆ ಬಿಡುಗಡೆ ಮಾಡಿದ ಅವರು, ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ತಮ್ಮ ಪರವಾಗಿ ಬೇಸರ ವ್ಯಕ್ತಪಡಿಸಿರುವ ಕಾರ್ಯಕರ್ತರು, ಬೆಂಬಲಿಗರು ಹಾಗೂ ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
“ಮಹಾತ್ಮ ಗಾಂಧಿ, ರಾಮ ಮನೋಹರ ಲೋಹಿಯಾ, ಜಯಪ್ರಕಾಶ್ ನಾರಾಯಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ–ಸಿದ್ಧಾಂತಗಳಲ್ಲಿ ನಂಬಿಕೆ ಇಟ್ಟು ಕಳೆದ ಐದು ದಶಕಗಳಿಂದ ರಾಜಕೀಯ ಮತ್ತು ಸಮಾಜಮುಖಿ ಹೋರಾಟ ನಡೆಸಿದ್ದೇನೆ. ಸಮಾಜವಾದಿ ಚಿಂತನೆಗೆ ಬದ್ಧನಾಗಿ ಮೂಢನಂಬಿಕೆ, ಜಾತಿ ವ್ಯವಸ್ಥೆ, ಬಡತನ, ನಿರುದ್ಯೋಗ ಹಾಗೂ ಅಸಮಾನತೆ ವಿರುದ್ಧ ಹೋರಾಟ ನಡೆಸಿದ್ದು, ಮಹಿಳಾ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ್ದೇನೆ” ಎಂದು ತಿಳಿಸಿದ್ದಾರೆ.
ತಮ್ಮ ರಾಜಕೀಯ ಜೀವನದಲ್ಲಿ ನಾಲ್ಕು ಬಾರಿ ಶಾಸಕರಾಗಿ, ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ಉಪಸಭಾಪತಿಯಾಗಿ ಸೇವೆ ಸಲ್ಲಿಸಿದ್ದೇನೆ. ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿರುವುದಾಗಿ ಅವರು ಉಲ್ಲೇಖಿಸಿದ್ದಾರೆ.
ರೈತ, ಕಾರ್ಮಿಕ, ಪರಿಸರ, ದಲಿತ ಹಾಗೂ ಅಹಿಂದ ಚಳುವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದು, ಸಿಎಎ–ಎನ್‌ಆರ್‌ಸಿ, ರೈತರ ಹೋರಾಟ, ಎಸ್‌ಐಆರ್ ಹಾಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆದ ಪ್ರತಿಭಟನೆಗಳಲ್ಲೂ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿನ ಅಕ್ರಮವನ್ನು (ವೋಟ್ ಚೋರಿ) ಬೆಳಕಿಗೆ ತಂದಿದ್ದು, ಅದರ ಮಾಹಿತಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಿದ್ದೆ. ಈ ವಿಷಯ ರಾಷ್ಟ್ರವ್ಯಾಪಿ ಚರ್ಚೆಗೆ ಗ್ರಾಸವಾಗಿ ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ಬಲ ತುಂಬಿದೆ ಎಂದು ಹೇಳಿದ್ದಾರೆ.
“ಇಷ್ಟೆಲ್ಲ ಸಾಮಾಜಿಕ ನ್ಯಾಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗಾಗಿ ಶ್ರಮಿಸಿದ ಬಳಿಕವೂ ನನ್ನನ್ನು ಸಚಿವ ಸಂಪುಟದಿಂದ ಹೊರಗಿಟ್ಟಿರುವುದು ಸಮಂಜಸವೇ ಎಂಬುದನ್ನು ರಾಜ್ಯದ ಜನರ ವಿವೇಚನೆಗೆ ಬಿಡುತ್ತೇನೆ” ಎಂದು ಬಿ.ಆರ್. ಪಾಟೀಲ್ ತಿಳಿಸಿದ್ದಾರೆ.



