ಕಲ್ಯಾಣ ಕರ್ನಾಟಕಜಿಲ್ಲಾಸುದ್ದಿಗಳು

ಭುಮಾನಂದ ಹದ್ದಿನಾಳ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹಆ. 7ರಂದು ಬಿಎಸ್‌ಪಿ ಪ್ರತಿಭಟನೆ

ಆ. 7ರಂದು ಬಹುಜನ ಸಮಾಜ ಪಕ್ಷದ ವತಿಯಿಂದ ಪ್ರತಿಭಟನೆ

ಕಲಬುರಗಿ, ಆ.6: ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ಬಹುಜನ ಸಮಾಜ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಭುಮಾನಂದ ಹದ್ದಿನಾಳ ಅವರ ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಮೃತರ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡುವುದರ ಜೊತೆಗೆ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಕಲಬುರಗಿ ಜಿಲ್ಲಾ ಘಟಕ ಸರ್ಕಾರವನ್ನು ಒತ್ತಾಯಿಸಿದೆ.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಶಿವಯೋಗಿ ಡಿ. ಹಡಗಿಲಕರ, ಹತ್ಯೆ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ತಪ್ಪಿತಸ್ಥರನ್ನು ಕಾನೂನಿನ ಮುಂದೆ ತಂದು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ದಲಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಎಸ್‌ಸಿಪಿ–ಟಿಎಸ್‌ಪಿ ಅನುದಾನದ ಸಮರ್ಪಕ ಬಳಕೆ ಸೇರಿದಂತೆ ದಲಿತ ಸಮುದಾಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಪ್ರಸ್ತಾಪಿಸಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಸಾಮಾಜಿಕ ಬಹಿಷ್ಕಾರದ ಘಟನೆಗಳನ್ನು ಖಂಡಿಸಿದರು.

ಈ ಘಟನೆಗಳನ್ನು ವಿರೋಧಿಸಿ ಆಗಸ್ಟ್‌ 7ರಂದು ಬೆಳಿಗ್ಗೆ 11 ಗಂಟೆಗೆ ನಗರದ ತಿಮ್ಮಾಪೂರಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಬೇಕು ಎಂದು ಅವರು ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಯೋಜಕ ಎಲ್.ಆರ್. ಬೋಸ್ಥೆ, ರಾಜ್ಯ ಕಾರ್ಯದರ್ಶಿ ಡಾ. ಅನೀಲ್ ಟೆಂಗಳಿ, ತಿಪ್ಪಣ್ಣ ಎಂ. ಕಿನ್ನೂರ ಹರವಾಳ, ಮೈಲಾರಿ ಶೇಳಗ್ಗೆ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button