ಶಖಾಪುರದಲ್ಲಿ ದಲಿತರ ಮೇಲೆ ಸರಣಿ ಹಲ್ಲೆ ಆರೋಪ: ಸಮಗ್ರ ತನಿಖೆಗೆ ಆಗ್ರಹ

ಕೆಂಭಾವಿ: ಸುರಪುರ ತಾಲೂಕಿನ ಶಖಾಪುರ ಎಸ್.ಎಚ್. ಗ್ರಾಮದಲ್ಲಿ ದಲಿತ ಕುಟುಂಬಗಳ ಮೇಲೆ ಸರಣಿ ಹಲ್ಲೆ, ಸಾಮಾಜಿಕ ಬಹಿಷ್ಕಾರ ಹಾಗೂ ಮೂಲಭೂತ ಸೌಲಭ್ಯಗಳನ್ನು ನಿರಾಕರಿಸಿರುವ ಆರೋಪಗಳು ಕೇಳಿಬಂದಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಆಗ್ರಹಿಸಿದೆ.
ಈ ಕುರಿತು ಸಮಿತಿಯ ತಾಲೂಕು ಘಟಕದ ಪದಾಧಿಕಾರಿಗಳು ಕರ್ನಾಟಕ ಸರ್ಕಾರದ ಗೃಹ ಸಚಿವ ಪ್ರಿಯಾಂಕ ಎಂ. ಖರ್ಗೆ ಹಾಗೂ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಉದ್ದೇಶಿಸಿ ಕೆಂಭಾವಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರ ಮೂಲಕ ಶುಕ್ರವಾರ ಮನವಿ ಸಲ್ಲಿಸಿದರು.ಮನವಿಯಲ್ಲಿ, ಶಖಾಪುರ ಗ್ರಾಮದಲ್ಲಿ ಮೇಲ್ವರ್ಗದ ಯುವತಿಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟ ಪ್ರಕರಣದ ಬಳಿಕ, ಶವ ಸಂಸ್ಕಾರಕ್ಕಾಗಿ ಕುಣಿ ತೋಡಲು ನಿರಾಕರಿಸಿದ್ದಾರೆ ಎಂಬ ಕಾರಣ ನೀಡಿ ಆಗಸ್ಟ್ 1ರಂದು ದಲಿತ ಸಮುದಾಯದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಅಲ್ಲದೆ, ಯುವತಿಯ ಸಾವಿನ ಪ್ರಕರಣವನ್ನು ಪೊಲೀಸರ ಗಮನಕ್ಕೆ ತರದೆ ಮುಚ್ಚಿಹಾಕಲು ಪ್ರಯತ್ನಿಸಲಾಗಿದೆ ಎಂಬ ಗಂಭೀರ ಆರೋಪವನ್ನೂ ಸಮಿತಿ ಮಾಡಿದೆ.ಯುವತಿಯ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ದಲಿತರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಹಲ್ಲೆಗೊಳಗಾದ ಕುಟುಂಬಗಳಿಗೆ ಸೂಕ್ತ ಪರಿಹಾರ, ಭದ್ರತೆ ಹಾಗೂ ಕಾನೂನು ರಕ್ಷಣೆ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಗ್ರಾಮದಲ್ಲಿ ದಲಿತ ಕುಟುಂಬಗಳಿಗೆ ರಸ್ತೆ ಹಾಗೂ ಕುಡಿಯುವ ನೀರಿನ ಸೌಲಭ್ಯ ತಡೆದು ಸಾಮಾಜಿಕ ಬಹಿಷ್ಕಾರ ಹೇರಲಾಗಿದೆ ಎಂಬ ಆರೋಪದ ಬಗ್ಗೆಯೂ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಕುಟುಂಬಗಳಿಗೆ ತುರ್ತಾಗಿ ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯವಿರುವ ಮನೆಗಳಿಗೆ ಶೌಚಾಲಯ ನಿರ್ಮಾಣ, ಅಂಗನವಾಡಿ ಕೇಂದ್ರದ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಲಾಗಿದೆ.ಇದೇ ವೇಳೆ, ದಲಿತ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕಾಗಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೂಲಕ ಸ್ವಯಂ ಉದ್ಯೋಗ ಸಾಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಶರಣಪ್ಪ ಗಾಯಕವಾಡ, ಗೋಪಾಲ ಬಡಿಗೇರ, ಬಸವಣ್ಣೆಪ್ಪ ಮಾಲಹಳ್ಳಿಕರ, ಪರಶುರಾಮ ಮಾಲಹಳ್ಳಿಕರ, ಸಂಗಪ್ಪ ಹೊಸಮನಿ, ಮಲ್ಲಿಕಾರ್ಜುನ ಕಟ್ಟಿಮನಿ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.



