ಜಿಲ್ಲಾಸುದ್ದಿಗಳು

ವಿಷಾಹಾರ ಪ್ರಕರಣ: ಸಿಒಡಿ ತನಿಖೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಕಲಬುರಗಿ, ಆ. 11: ದಂಡೋತಿ ಮತ್ತು ಕರಜಗಿ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ನಡೆದ ವಿಷಾಹಾರ ಸೇವನೆ ಘಟನೆ ಕುರಿತು ಸಮಗ್ರ ಸಿಒಡಿ ತನಿಖೆ ನಡೆಸಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಯಿತು.

ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಪ್ರತಿಭಟನಾಕಾರರು, ಜಿಲ್ಲೆಯ ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಇಂದಿರಾಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಕ್ರೈಸ್ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿದೆ ಎಂದು ಆರೋಪಿಸಿದರು.

ದಂಡೋತಿ ಮತ್ತು ಕರಜಗಿ ವಸತಿ ಶಾಲೆಗಳಲ್ಲಿ ವಿಷಾಹಾರ ಸೇವನೆಗೆ ಆಹಾರ ಪೂರೈಕೆಯಲ್ಲಿನ ಲೋಪಗಳು ಕಾರಣವಾಗಿರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಮಟ್ಟದ ತನಿಖೆ ನಡೆಸುವುದಕ್ಕಿಂತ ಸಿಒಡಿ ಮೂಲಕ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ವಸತಿ ಶಾಲೆಗಳಿಗೆ ಆಹಾರ ಸಾಮಗ್ರಿ ಖರೀದಿ, ದುರಸ್ತಿ ಕಾಮಗಾರಿ, ಆಹಾರ ಪೂರೈಕೆ ಹಾಗೂ ಹೊರಗುತ್ತಿಗೆ ನೌಕರರ ವೇತನ ಪಾವತಿಗೆ ಸಂಬಂಧಿಸಿದ ಟೆಂಡರ್‌ಗಳಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಂಘದ ಪದಾಧಿಕಾರಿಗಳು ದೂರಿದರು. ವಿದ್ಯಾರ್ಥಿಗಳ ಪ್ರವೇಶ, ಅಡುಗೆ ಸಿಬ್ಬಂದಿ ನೇಮಕ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ಹಣದ ವಹಿವಾಟು ನಡೆಯುತ್ತಿದೆ ಎಂಬ ಆರೋಪಗಳ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ನಾಲ್ಕು ತಿಂಗಳಿನಿಂದ ವೇತನ ಬಾಕಿ

ಸರ್ಕಾರ ಕನಿಷ್ಠ ವೇತನ ಪರಿಷ್ಕರಿಸಿ ಜಾರಿಗೆ ಆದೇಶಿಸಿದ ಬಳಿಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಮೇ ಮತ್ತು ಜೂನ್ ತಿಂಗಳ ವೇತನವನ್ನು ಪರಿಷ್ಕೃತ ದರದಲ್ಲಿ ಪಾವತಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿಯೂ ಜೂನ್ ತಿಂಗಳ ವೇತನ ಪಾವತಿಯಾಗಿದೆ. ಆದರೆ ಸಮಾಜ ಕಲ್ಯಾಣ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಕ್ರೈಸ್ ವಸತಿ ನಿಲಯಗಳ ನೌಕರರಿಗೆ ಮೂರು ತಿಂಗಳಿನಿಂದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳ ನೌಕರರಿಗೆ ಮೂರು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಅವರು ಆರೋಪಿಸಿದರು.

ಸರ್ಕಾರ ಜಾರಿಗೆ ತಂದ ಕನಿಷ್ಠ ವೇತನವನ್ನು ಹಿಂಪಡೆದಿರುವುದು ಖಂಡನೀಯ. ಕೂಡಲೇ ಪರಿಷ್ಕೃತ ಕನಿಷ್ಠ ವೇತನವನ್ನು ಮರುಜಾರಿಗೊಳಿಸಿ, ಬಾಕಿ ಇರುವ ವೇತನವನ್ನು ಪಾವತಿಸಬೇಕು ಎಂದು ಒತ್ತಾಯಿಸಿದರು.

ಕ್ರೈಸ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರರ ವೇತನ ಪಾವತಿಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಟೆಂಡರ್ ಪ್ರಕ್ರಿಯೆ ನಡೆಸದೆ ಮುಂದುವರಿಸಿರುವ ಆರೋಪಗಳ ಬಗ್ಗೆಯೂ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬೇಡಿಕೆ ಈಡೇರುವವರೆಗೆ ಧರಣಿ

ದಂಡೋತಿ ಮತ್ತು ಕರಜಗಿ ವಸತಿ ಶಾಲೆಗಳ ವಿಷಾಹಾರ ಘಟನೆ ಕುರಿತು ಸಿಒಡಿ ತನಿಖೆ, ತಪ್ಪಿತಸ್ಥರ ವಿರುದ್ಧ ಕ್ರಮ, ಹೊರಗುತ್ತಿಗೆ ನೌಕರರಿಗೆ ಬಾಕಿ ವೇತನ ಪಾವತಿ ಹಾಗೂ ಪರಿಷ್ಕೃತ ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವವರೆಗೆ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಮುಂದುವರಿಸಲಾಗುವುದು ಎಂದು ಸಂಘದ ಮುಖಂಡರು ಎಚ್ಚರಿಸಿದರು.

ಈ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಶೀಘ್ರ ಈಡೇರಿಸುವಂತೆ ಒತ್ತಾಯಿಸಿದರು.

ಧರಣಿಯಲ್ಲಿ ಜಿಲ್ಲಾಧ್ಯಕ್ಷ ಪರುಶುರಾಮ ಮೇಘರಾಜ ಕರಾರ, ಜಿಲ್ಲಾ ಕಾರ್ಯದರ್ಶಿ ಮಮ್ಮದ್ ಜಮೀರೊದ್ದಿನ್ ಬಾಬಾ, ಬಾಬು ಹೊಸಮನಿ, ಅಲ್ಲಾ ಪಟೇಲ್ ವಾಡಿ, ರವಿ ಎರಗೋಳ್, ಲಕ್ಷ್ಮೀಮತಿ ಬಿ. ಕಲ್ಯಾಣಿ, ಮಲ್ಲಮ್ಮ ಕೊಡ್ಲಿ, ನಾಗರಕ್ಕೆ ಮಧನಕರ್ ಸೇರಿದಂತೆ ವಿವಿಧ ತಾಲ್ಲೂಕುಗಳ ಪದಾಧಿಕಾರಿಗಳು ಹಾಗೂ ಹೊರಗುತ್ತಿಗೆ ನೌಕರರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button