ಕಲಬುರಗಿಜಿಲ್ಲೆ ಸುದ್ದಿ

ಮುಖ್ಯಮಂತ್ರಿ, ಗೃಹ ಸಚಿವರಿಗೆ ಮನವಿ ಸಲ್ಲಿಸಲು ನಿರ್ಧಾರ; 10 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ

ಕಲಬುರಗಿ, ಸೆ.8: ಜಿಲ್ಲೆಯಲ್ಲಿ ನೈಜ ತಳವಾರ ಸಮುದಾಯದ ಅರ್ಹರಿಗೆ ಪರಿಶಿಷ್ಟ ಪಂಗಡದ (ಎಸ್‌ಟಿ) ಪ್ರಮಾಣಪತ್ರ ಹಾಗೂ ಸಿಂಧುತ್ವ ಪ್ರಮಾಣಪತ್ರ ನೀಡುವಲ್ಲಿ ಆಗುತ್ತಿರುವ ವಿಳಂಬ ಮತ್ತು ಗೊಂದಲವನ್ನು ಖಂಡಿಸಿ ಸೆ.17ರಂದು ನಗರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಬೃಹತ್ ಪ್ರತಿಭಟನೆ ನಡೆಸಲು ತಳವಾರ ಸಮುದಾಯದ ಮುಖಂಡರು ನಿರ್ಧರಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡ ಶಿವಕುಮಾರ್ ನಾಟೀಕಾರ್, ತಳವಾರ ಸಮುದಾಯವು ಸಂವಿಧಾನಾತ್ಮಕವಾಗಿ ಹಾಗೂ ಕಾನೂನಿನ ಪ್ರಕಾರ ಪರಿಶಿಷ್ಟ ಪಂಗಡದ ಸೌಲಭ್ಯಗಳಿಗೆ ಅರ್ಹವಾಗಿದ್ದರೂ, ಜಿಲ್ಲೆಯಲ್ಲಿ ಅರ್ಹರಿಗೆ ಜಾತಿ ಪ್ರಮಾಣಪತ್ರ, ಸಿಂಧುತ್ವ ಪ್ರಮಾಣಪತ್ರ ಸೇರಿದಂತೆ ಸರ್ಕಾರದ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ತಳವಾರ ಸಮುದಾಯದವರಿಗೆ ಪ್ರಮಾಣಪತ್ರ ಹಾಗೂ ಸಿಂಧುತ್ವ ನೀಡಲಾಗುತ್ತಿದೆ. ಆದರೆ ಕಲಬುರಗಿ ಜಿಲ್ಲೆಯಲ್ಲಿ ಮಾತ್ರ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸ್ಥಗಿತಗೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದರಿಂದ ತಳವಾರ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣ ಪ್ರವೇಶ, ವಿದ್ಯಾರ್ಥಿವೇತನ, ಉನ್ನತ ಶಿಕ್ಷಣ, ಸರ್ಕಾರಿ ನೇಮಕಾತಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆಯಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದರು.

28,800 ಜನಸಂಖ್ಯೆ ದಾಖಲು

2014ರಲ್ಲಿ ರಾಜ್ಯ ಸರ್ಕಾರ ಕೈಗೊಂಡ ಕುಲಶಾಸ್ತ್ರೀಯ ಅಧ್ಯಯನ ಹಾಗೂ 2010-11ರ ಜನಗಣತಿ ಆಧಾರದ ಮೇಲೆ ಜಿಲ್ಲೆಯಲ್ಲಿ ತಳವಾರ ಸಮುದಾಯದ 28,800 ಜನಸಂಖ್ಯೆ ದಾಖಲಾಗಿರುವುದು ತಿಳಿದುಬಂದಿದೆ. ಹಾಗಿದ್ದರೂ ಅರ್ಹರಿಗೆ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಏಕೆ ಗೊಂದಲ ಉಂಟಾಗುತ್ತಿದೆ ಎಂಬುದಕ್ಕೆ ಜಿಲ್ಲಾಡಳಿತ ಸ್ಪಷ್ಟನೆ ನೀಡಬೇಕು ಎಂದು ಮುಖಂಡರು ಒತ್ತಾಯಿಸಿದರು.

ತಳವಾರ ಸಮುದಾಯದವರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುವ ಸಂದರ್ಭಗಳಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸಿ, ಶೀಘ್ರದಲ್ಲೇ ಪ್ರಮಾಣಪತ್ರ ನೀಡಲಾಗುವುದು ಎಂಬ ಭರವಸೆ ನೀಡುವ ಮೂಲಕ ಹೋರಾಟಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಸರ್ಕಾರದ ಆದೇಶ ಜಾರಿಗೆ ಆಗ್ರಹ

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾಯ್ದೆಗಳು, ಆದೇಶಗಳು ಮತ್ತು ಸುತ್ತೋಲೆಗಳನ್ನು ಜಿಲ್ಲಾಡಳಿತ ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಅರ್ಹ ತಳವಾರರಿಗೆ ಯಾವುದೇ ವಿಳಂಬವಿಲ್ಲದೆ ಪರಿಶಿಷ್ಟ ಪಂಗಡದ ಪ್ರಮಾಣಪತ್ರ ನೀಡಬೇಕು ಎಂದು ಮುಖಂಡರು ಆಗ್ರಹಿಸಿದರು.

ಸೆ.17ರಂದು ಕಲಬುರಗಿ ನಗರದಲ್ಲಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ತಳವಾರ ಸಮಾಜದ ವತಿಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಪ್ರತಿಭಟನೆಯಲ್ಲಿ 10 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಶಿವಕುಮಾರ್ ನಾಟೀಕಾರ್ ತಿಳಿಸಿದರು.

ನೈಜ ತಳವಾರರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ನೀಡುವುದು, ಜಾತಿ ಹಾಗೂ ಸಿಂಧುತ್ವ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವುದು, ಸರ್ಕಾರಿ ನೇಮಕಾತಿ ಸೇರಿದಂತೆ ಸಂವಿಧಾನಾತ್ಮಕ ಸೌಲಭ್ಯಗಳನ್ನು ಒದಗಿಸುವುದು ಮತ್ತು ಪ್ರಮಾಣಪತ್ರದ ಕುರಿತು ಸರ್ಕಾರ ಸ್ಪಷ್ಟ ಅಧಿಕೃತ ಆದೇಶ ಹೊರಡಿಸಬೇಕು ಎಂದು ಅವರು ಒತ್ತಾಯಿಸಿದರು.

ತಳವಾರ ಸಮಾಜದ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು. ಸರ್ಕಾರ ಮನವಿಗೆ ಸ್ಪಂದಿಸಿ ನ್ಯಾಯ ಒದಗಿಸಿದರೆ ಹೋರಾಟವನ್ನು ಕೈಬಿಡಲಾಗುವುದು. ಇಲ್ಲವಾದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜು ಉಕ್ಕಲಿ, ಮರೆಪ್ಪ ಜಮಾದಾರ್, ಮಹಾಂತೇಶ ಪಾಟೀಲ್, ಸತೀಶ ಬಮ್ಮನಹಳ್ಳಿ, ಸೂರ್ಯಕಾಂತ ಗಡತೋಡಿ, ಬಾಬು ಕೋಬಾಳ್ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button