ರಾಷ್ಟ್ರೀಯ

ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ: 29 ದಿನಗಳ ಬಳಿಕ ಎಫ್‌ಐಆರ್

ಕಲಬುರಗಿ, ಸೆ. 9: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಬಳಿಕ, ಅವರು ಭಾಷಣ ಮಾಡಿದ ವೇದಿಕೆಯನ್ನು ಶುದ್ಧೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 29 ದಿನಗಳ ಬಳಿಕ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಆಗಸ್ಟ್ 8ರಂದು ಖರ್ಗೆ ಅವರು ಭಾಷಣ ಮಾಡಿದ್ದರು. ಆಗಸ್ಟ್ 10ರಂದು ವೇದಿಕೆಯನ್ನು ಶುದ್ಧೀಕರಿಸಲಾಗಿದೆ ಎನ್ನಲಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

ಬಿಎನ್‌ಎಸ್‌ನ ಸೆಕ್ಷನ್ 196 ಮತ್ತು 299 ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(ಡಿ) ಅಡಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ನೈನಿತಾಲ್ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಟಿ.ಸಿ. ತಿಳಿಸಿದ್ದಾರೆ.

ಈ ಕುರಿತು ಹಲವಾರು ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳಿಂದ ದೂರುಗಳು ಮತ್ತು ಮನವಿಗಳು ಬಂದಿದ್ದವು. ಅವುಗಳ ಕಾನೂನು ಪರಿಶೀಲನೆ ನಡೆಸಲಾಗುತ್ತಿತ್ತು. ಹಲ್ದ್ವಾನಿಯ ಸಾಮಾಜಿಕ ಕಾರ್ಯಕರ್ತೆ ಹಾಗೂ ವಕೀಲೆ ಅಂಜು ಅವರು ಮೊದಲಿಗೆ ಲಿಖಿತ ದೂರು ನೀಡಿದ್ದು, ಸಂಬಂಧಿತ ವಿಡಿಯೊಗಳನ್ನೂ ಪೊಲೀಸರಿಗೆ ಒದಗಿಸಿದ್ದರು. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಪ್ರಸ್ತಾಪ

ಆಗಸ್ಟ್ 13ರಂದು ರಾಜ್ಯಸಭೆಯಲ್ಲಿ ಖರ್ಗೆ ಅವರೇ ಈ ವಿಷಯವನ್ನು ಪ್ರಸ್ತಾಪಿಸಿ, ಘಟನೆಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಕೇಂದ್ರ ಸಚಿವ ಹಾಗೂ ಸದನದ ನಾಯಕ ಜೆ.ಪಿ. ನಡ್ಡಾ ಅವರು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸದನದಲ್ಲಿ ಭರವಸೆ ನೀಡಿದ್ದರು.

ಇದೇ ವೇಳೆ, ವೇದಿಕೆ ಶುದ್ಧೀಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಘಟನೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು, ಶುದ್ಧೀಕರಣ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ದೆಹಲಿಯಲ್ಲಿ ಸಂಸದರ ಧರಣಿ

ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಸಂಸದರು ಮಂಗಳವಾರ ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದರು. ಸುಮಾರು 37 ಸಂಸದರು ಠಾಣೆಯೊಳಗೆ ಕುಳಿತು, ಪ್ರಕರಣ ದಾಖಲಿಸುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.

ರಾಯಚೂರು ಸಂಸದ ಶಶಿಕಾಂತ್ ಸೆಂಥಿಲ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದರು. ಲಿಖಿತ ದೂರು ನೀಡಿದ್ದರೂ ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.

ಸಂಸದರಾದ ಕೊಡಿಕ್ಕುನ್ನಿಲ್ ಸುರೇಶ್, ಮಲ್ಲು ರವಿ, ವರ್ಷಾ ಗಾಯಕ್ವಾಡ್ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸುಮಾರು ಮೂರು ಗಂಟೆಗಳ ಪ್ರತಿಭಟನೆ ಹಾಗೂ ಒತ್ತಡದ ಬಳಿಕ ಹಲ್ದ್ವಾನಿಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

‘ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನೆ’

ದೇಶದ ಸಂಸದರು ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ಜನರ ಮೇಲೆ ದೌರ್ಜನ್ಯ ನಡೆದ ಸಂದರ್ಭದಲ್ಲಿ ಪೊಲೀಸರು ಹೇಗೆ ಸ್ಪಂದಿಸುತ್ತಾರೆ ಎಂಬ ಪ್ರಶ್ನೆಯನ್ನೂ ಅವರು ಎತ್ತಿದ್ದಾರೆ.

ಈ ಘಟನೆ ಕೇವಲ ಒಂದು ಎಫ್‌ಐಆರ್‌ಗೆ ಸೀಮಿತವಾಗಿಲ್ಲ. ದೇಶದಲ್ಲಿ ಕಾನೂನಿನ ಆಡಳಿತ ಮತ್ತು ಕಾನೂನು ಸುವ್ಯವಸ್ಥೆಯ ಸ್ಥಿತಿಗತಿಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ವರ್ಷಾ ಗಾಯಕ್ವಾಡ್ ಹೇಳಿದ್ದಾರೆ.

ಬಿಜೆಪಿ ನಾಯಕರಲ್ಲೂ ಭಿನ್ನಾಭಿಪ್ರಾಯ

ಖರ್ಗೆ ಅವರು ಭಾಷಣ ಮಾಡಿದ ವೇದಿಕೆಯನ್ನು ಶುದ್ಧೀಕರಿಸಿದ ಕ್ರಮವನ್ನು ಕೇಂದ್ರ ಸಚಿವರಾದ ರಾಮದಾಸ್ ಅಠಾವಳೆ ಮತ್ತು ಚಿರಾಗ್ ಪಾಸ್ವಾನ್ ಖಂಡಿಸಿದ್ದಾರೆ. ಆದರೆ ಉತ್ತರಾಖಂಡ ಬಿಜೆಪಿ ಅಧ್ಯಕ್ಷ ಮಹೇಂದ್ರ ಭಟ್ ಅವರು ಈ ಹಿಂದೆ ಶುದ್ಧೀಕರಣದ ಕ್ರಮವನ್ನು ಸಮರ್ಥಿಸಿಕೊಂಡಿದ್ದರು ಎನ್ನಲಾಗಿದೆ.

ಘಟನೆಯನ್ನು ಖಂಡಿಸಿ ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ವಿವಿಧ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿದ್ದವು. ಇದೀಗ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಮುಂದುವರಿಯಲಿದೆ.

Leave a Reply

Your email address will not be published. Required fields are marked *

Back to top button