ಕಲಬುರಗಿಜಿಲ್ಲೆ ಸುದ್ದಿ

ಬರ ಪ್ರದೇಶ ಘೋಷಣೆಗೆ ಆಗ್ರಹ: ನಾಳೆ ಸಿಪಿಐ ಕಪ್ಪು ಬಾವುಟ ಪ್ರತಿಭಟನೆ

ಕಲಬುರ್ಗಿ, ಸೆ. 15: ಕಲಬುರ್ಗಿ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರ ನೀಡಲು ಸೆಪ್ಟೆಂಬರ್ 16ರೊಳಗೆ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ, ಸೆಪ್ಟೆಂಬರ್ 17ರಂದು ನಗರಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಜಿಲ್ಲಾ ಕಾರ್ಯದರ್ಶಿ ಡಾ. ಮಹೇಶಕುಮಾರ್ ರಾಠೋಡ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕೆಲ ತಾಲ್ಲೂಕುಗಳನ್ನು ಮಾತ್ರ ಬರಪೀಡಿತವೆಂದು ಘೋಷಿಸಿ, ಉಳಿದ ತಾಲ್ಲೂಕುಗಳನ್ನು ಕಡೆಗಣಿಸಿರುವುದು ಸರಿಯಲ್ಲ. ಜಿಲ್ಲೆಯಲ್ಲಿ ಬಹುತೇಕ ಒಣ ಬೇಸಾಯವಿದ್ದು, ಸಮರ್ಪಕ ನೀರಾವರಿ ಸೌಲಭ್ಯಗಳ ಕೊರತೆಯಿಂದ ರೈತರು ಪ್ರತಿವರ್ಷ ಕೃಷಿ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಹೇಳಿದರು.

ಬಚಾವತ್ ಆಯೋಗದ ಶಿಫಾರಸಿನಂತೆ ಜಿಲ್ಲೆಗೆ ಲಭ್ಯವಾಗಬೇಕಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ರೂಪಿಸಿರುವ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು. ಶಾಶ್ವತ ಬರ ನಿರ್ವಹಣಾ ಕ್ರಮಗಳನ್ನು ಕೈಗೊಂಡು ರೈತರ ಸಂಕಷ್ಟಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಮಲ್ಲಾಬಾದ್ ಯೋಜನೆಗೆ ಆಕ್ಷೇಪ: ಮಲ್ಲಾಬಾದ್ ಏತ ನೀರಾವರಿ ಯೋಜನೆಯ ಕಾಮಗಾರಿ ಸಮರ್ಪಕವಾಗಿ ನಡೆಯುತ್ತಿಲ್ಲ. ರೈತರಿಗೆ ನೋಟಿಸ್ ನೀಡದೆ ಅವರ ಜಮೀನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಶಾಮೀಲಾಗಿ ಮನಬಂದಂತೆ ಕಾಮಗಾರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಯೋಜನೆಯಲ್ಲಿನ ಲೋಪಗಳನ್ನು ಸರಿಪಡಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಗುಣಮಟ್ಟದ ಕಾಮಗಾರಿ ನಡೆಸದಿದ್ದರೆ ಗುತ್ತಿಗೆ ರದ್ದುಪಡಿಸಿ, ಸಂಬಂಧಿಸಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.

ಕೆಕೆಆರ್‌ಡಿಬಿ ಅನುದಾನ ಬಳಕೆಗೆ ತನಿಖೆ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 2014ರಿಂದ ಇದುವರೆಗೆ ₹29 ಸಾವಿರ ಕೋಟಿ ಅನುದಾನ ಒದಗಿಸಲಾಗಿದ್ದು, ಸುಮಾರು ₹16 ಸಾವಿರ ಕೋಟಿ ಖರ್ಚು ಮಾಡಲಾಗಿದೆ. ಆದರೂ ಪ್ರಾದೇಶಿಕ ಅಸಮತೋಲನ ನಿವಾರಣೆಯಾಗಿಲ್ಲ. ಪ್ರೊ. ಗೋವಿಂದರಾವ್ ಸಮಿತಿಯ ವರದಿಯಲ್ಲಿಯೂ ಕಲ್ಯಾಣ ಕರ್ನಾಟಕದ ಎಲ್ಲ ತಾಲ್ಲೂಕುಗಳು ಹಿಂದುಳಿದಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಆದ್ದರಿಂದ ಮಂಡಳಿ ಮೂಲಕ ಖರ್ಚು ಮಾಡಿರುವ ಹಣದ ಬಳಕೆ ಕುರಿತು ಸಮಗ್ರ ತನಿಖೆ ನಡೆಸಬೇಕು. ಬಾಕಿ ಇರುವ ₹13 ಸಾವಿರ ಕೋಟಿ ಅನುದಾನವನ್ನು ಬಿಡುಗಡೆ ಮಾಡಿ, ಸಮರ್ಪಕ ಕ್ರಿಯಾಯೋಜನೆ ರೂಪಿಸಿ ಅಭಿವೃದ್ಧಿಗೆ ಬಳಸಬೇಕು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯ: ಕಲ್ಯಾಣ ಕರ್ನಾಟಕದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದೆ ಹಾಗೂ ವಿಶೇಷ ಅನುದಾನ ನೀಡದೆ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ನಿರ್ಲಕ್ಷಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ತೀವ್ರವಾಗಿದ್ದು, ಸುಮಾರು 30 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದರು.

ಬಹುತೇಕ ಶಾಲೆಗಳಲ್ಲಿ ಕೊಠಡಿ, ಶೌಚಾಲಯ, ಕುಡಿಯುವ ನೀರು, ಗ್ರಂಥಾಲಯ, ಆಟದ ಮೈದಾನ ಹಾಗೂ ಕಂಪ್ಯೂಟರ್ ಸೇರಿದಂತೆ ಮೂಲಸೌಲಭ್ಯಗಳ ಕೊರತೆಯಿದೆ. ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಬಲಪಡಿಸುವ ಬದಲು ಖಾಸಗಿ ವಿಶ್ವವಿದ್ಯಾಲಯಗಳಿಗೆ ಅನುಕೂಲ ಮಾಡಿಕೊಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಜೇವರ್ಗಿಯಲ್ಲಿ ಕಳೆದ ಐದು ತಿಂಗಳಿಂದ ಮುಂದುವರಿದಿರುವ ಪೌರ ಕಾರ್ಮಿಕರ ಸಮಸ್ಯೆಯನ್ನು ಕೂಡಲೇ ಪರಿಹರಿಸಿ, ಅವರಿಗೆ ಕೆಲಸ ಹಾಗೂ ಬಾಕಿ ವೇತನ ಪಾವತಿಸಬೇಕು. ಕಲ್ಯಾಣ ಕರ್ನಾಟಕದಲ್ಲಿ ಗುತ್ತಿಗೆ ಆಧಾರಿತ ಉದ್ಯೋಗಿಗಳ ಸಂಖ್ಯೆ ಹೆಚ್ಚಿದ್ದು, ಗುತ್ತಿಗೆ ಪದ್ಧತಿ ರದ್ದುಪಡಿಸಿ ಖಾಯಂ ಉದ್ಯೋಗ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ್, ಸಿದ್ದಪ್ಪ ಪಾಲ್ಕಿ, ಮೊಹ್ಮದ್ ಚೌಧರಿ, ಸಾಜೀದ್ ಅಹ್ಮದ್, ಶಿವಲಿಂಗಮ್ಮ ಲೆಂಗಟಿಕರ್, ಮಲ್ಲಿಕಾರ್ಜುನ್ ಕೆಲ್ಲೂರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button