ಮತದಾರರ ಹಕ್ಕುಗಳ ರಕ್ಷಣೆಗಾಗಿ ಅ.2ರಂದು ಕಲಬುರಗಿಯಲ್ಲಿ ಧರಣಿ ಸತ್ಯಾಗ್ರಹ

ಕಲಬುರಗಿ, ಸೆ.30: ಮತದಾರರ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಕಾಪಾಡುವಂತೆ ಒತ್ತಾಯಿಸಿ ನಾಗರಿಕರ ಹಕ್ಕುಗಳ ರಕ್ಷಣಾ ಆಂದೋಲನದ ವತಿಯಿಂದ ಅ.2ರಂದು ಕಲಬುರಗಿಯಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಆಂದೋಲನದ ಸಂಚಾಲಕ ಸಲೀಂ ಅಹಮದ್ ಚಿತ್ತಾಪುರಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿನ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕುವುದು ಸೇರಿದಂತೆ ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಕ್ರಮಗಳ ಕುರಿತು ಆಂದೋಲನವು ಆಕ್ಷೇಪ ವ್ಯಕ್ತಪಡಿಸಿದೆ. ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಉಂಟಾಗಿರುವ ಅನುಮಾನಗಳಿಗೆ ಸ್ಪಷ್ಟತೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸೇರಿದಂತೆ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ವಿಷಯಗಳ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ. ಈ ಹಿನ್ನೆಲೆಯಲ್ಲಿ ನಾಗರಿಕರ ಹಕ್ಕುಗಳ ರಕ್ಷಣೆಗೆ ಸಂಘಟಿತವಾಗಿ ಧ್ವನಿ ಎತ್ತಲು ಧರಣಿ ಆಯೋಜಿಸಲಾಗಿದೆ ಎಂದು ಹೇಳಿದರು.
ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರು ಮತದಾರರ ನೋಂದಣಿ, ಹೆಸರುಗಳ ಅಳಿಸುವಿಕೆ ಹಾಗೂ ಮರುಸ್ಥಾಪನೆ ಮತ್ತು ಎಸ್ಐಆರ್ಗೆ ಸಂಬಂಧಿಸಿದ ನಿರ್ಧಾರಗಳ ಕುರಿತು ಆಕ್ಷೇಪಗಳನ್ನು ದಾಖಲಿಸಿರುವುದಾಗಿ ಅವರು ತಿಳಿಸಿದರು. ತಮ್ಮ ಅಭಿಪ್ರಾಯಗಳನ್ನು ಪರಿಗಣಿಸದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದರು.
ಮತದಾರರ ಪಟ್ಟಿಯ ಪರಿಷ್ಕರಣೆಗೆ ಮಾತ್ರ ಸೀಮಿತವಾಗದೆ, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಹಾಗೂ ಅದರ ಪಾರದರ್ಶಕತೆಯ ಬಗ್ಗೆಯೂ ಪ್ರಶ್ನೆಗಳು ಕೇಳಿಬರುತ್ತಿವೆ. ಚುನಾವಣಾ ಆಯೋಗದ ಸ್ವತಂತ್ರ ಹಾಗೂ ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನು ಖಾತರಿಪಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಚುನಾವಣಾ ಆಯುಕ್ತರ ನೇಮಕ ಪ್ರಕ್ರಿಯೆಯಲ್ಲಿ ಪ್ರಧಾನಿ, ವಿರೋಧ ಪಕ್ಷದ ನಾಯಕ ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ವ್ಯವಸ್ಥೆ ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದರು.
ಅ.2ರಂದು ನಗರದ ಸೂಪರ್ ಮಾರ್ಕೆಟ್ನಿಂದ ಜಗತ್ ವೃತ್ತದವರೆಗೆ ಮೆರವಣಿಗೆ ನಡೆಸಿ, ಸಂಜೆ 4ಕ್ಕೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಸಲೀಂ ಅಹಮದ್ ಚಿತ್ತಾಪುರಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಡಾ. ಮಹೇಶಕುಮಾರ್ ರಾಠೋಡ್, ಅಫಜಲ್ ಮಹಿಮೂದ್, ಶರಣಬಸಪ್ಪ ಮಮಶೆಟ್ಟಿ, ಮಹೇಶ್ ಎಸ್.ಬಿ., ಅಬ್ದುಲ್ ಜಬ್ಬಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.



