ಯಾಳಗಿ ಜಿಪಂ ಕ್ಷೇತ್ರ: ದಲಿತ ಬಲಗೈ ಸಮಾಜಕ್ಕೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ

ಕೆಂಭಾವಿ: ಪರಿಶಿಷ್ಟ ಜಾತಿಗೆ (ಎಸ್ಸಿ) ಮೀಸಲಾಗಿರುವ ಯಾಳಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ದಲಿತ ಬಲಗೈ ಸಮಾಜದ ಅರ್ಹ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಬೇಕು ಎಂದು ದಲಿತ ಮುಖಂಡ ಶಿವಶರಣ ನಾಗರಡ್ಡಿ ಆಗ್ರಹಿಸಿದ್ದಾರೆ.
ಶಹಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಲಿತ ಬಲಗೈ ಸಮಾಜವು ಹಿಂದಿನಿಂದಲೂ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದು, ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಸಮಾಜದ ಮುಖಂಡರು ಹಾಗೂ ಕಾರ್ಯಕರ್ತರು ಪ್ರಮುಖ ಪಾತ್ರ ವಹಿಸಿದ್ದಾರೆ. ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರ ನಾಯಕತ್ವಕ್ಕೆ ಸಮಾಜದ ಕಾರ್ಯಕರ್ತರು ಬೆಂಬಲವಾಗಿ ನಿಂತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಯಾಳಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ಎಸ್ಸಿಗೆ ಮೀಸಲಾಗಿರುವುದರಿಂದ, ಪಕ್ಷಕ್ಕಾಗಿ ನಿರಂತರವಾಗಿ ದುಡಿಯುತ್ತಿರುವ ಸಮಾಜದ ಅರ್ಹ ಕಾರ್ಯಕರ್ತರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು. ಇಂತಹ ಅಭ್ಯರ್ಥಿಗೆ ಪಕ್ಷದ ಟಿಕೆಟ್ ನೀಡಿದಲ್ಲಿ ಸಮಾಜದ ಮುಖಂಡರು, ಯುವಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತುಂಬಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಕೆಂಭಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಹೊಸಮನಿ ಯಾಳಗಿ ಹಾಗೂ ಕ್ಷೇತ್ರದ ಹಿರಿಯ ನಾಯಕರು ಸಮಾಜದ ಬೇಡಿಕೆಯನ್ನು ಪರಿಗಣಿಸಿ, ದಲಿತ ಬಲಗೈ ಸಮಾಜದ ಅರ್ಹ ಅಭ್ಯರ್ಥಿಗೆ ಟಿಕೆಟ್ ನೀಡುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಬೇಕು ಎಂದು ಶಿವಶರಣ ನಾಗರಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.



