ರಾಜ್ಯ

ಜೀವಂತವರ ಹೆಸರಿನಲ್ಲಿ ಮರಣ ಪ್ರಮಾಣಪತ್ರ: ವಿಜಯಪುರದಲ್ಲಿ ಪ್ರತಿಭಟನೆ

ವಿಜಯಪುರ: ಜಿಲ್ಲೆಯಲ್ಲಿ ಮೃತಪಟ್ಟವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಜೀವಂತಗೊಳಿಸಲಾಗಿದೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪದ ಬೆನ್ನಲ್ಲೇ, ಮತದಾರರ ಪಟ್ಟಿ ವಿಚಾರವಾಗಿ ಜಿಲ್ಲೆಯಲ್ಲಿ ವಿವಾದ ತೀವ್ರಗೊಂಡಿದೆ.

ತಮ್ಮ ಹೆಸರಿನಲ್ಲಿ ಮರಣ ಪ್ರಮಾಣಪತ್ರ ನೀಡಲಾಗಿದೆ ಎಂದು ಆರೋಪಿಸಿರುವ ಕೆಲ ಮತದಾರರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು.

‘ನಾವು ಜೀವಂತವಾಗಿದ್ದರೂ ನಮ್ಮ ಹೆಸರಿನಲ್ಲಿ ಮರಣ ಪ್ರಮಾಣಪತ್ರವನ್ನು ಹೇಗೆ ನೀಡಲಾಗಿದೆ?’ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು, ಮರಣ ಪ್ರಮಾಣಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಈ ಕುರಿತು ಆರೋಪ ಮಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಕಮಿಷನರ್ ವಿಜಯ ಮೆಕ್ಕಳಕಿ ಅವರಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಮುಂದುವರಿಸಿದರು.

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ಉದ್ದೇಶದಿಂದ ನಕಲಿ ಮರಣ ಪ್ರಮಾಣಪತ್ರಗಳನ್ನು ಸೃಷ್ಟಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಗರದ 198 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಸುಮಾರು 1,046 ಜೀವಂತ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಮುಂದಾಗಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಈ ಕುರಿತು ಸೂಕ್ತ ತನಿಖೆ ನಡೆಸಿ, ಮತದಾರರ ಹಕ್ಕುಗಳಿಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

janabhipraya

https://janabhipraya.com

Related Articles

Leave a Reply

Your email address will not be published. Required fields are marked *

Back to top button