ಉತ್ತರ ಕರ್ನಾಟಕದ ಭಾಷೆ, ಇತಿಹಾಸಕ್ಕೆ ಅಪಮಾನ: ಪ್ರದೀಪ್ ಈಶ್ವರ್ ಕ್ಷಮೆಯಾಚನೆಗೆ ಇಲಿಯಾಸ್ ಪಟೇಲ್ ಆಗ್ರಹ
ಕ್ಷಮೆ ಕೇಳದಿದ್ದರೆ ರಾಜ್ಯದಾದ್ಯಂತ ಹೋರಾಟ, ಕಪ್ಪು ಬಾವುಟ ಪ್ರದರ್ಶನದ ಎಚ್ಚರಿಕೆ

ಕೆಂಭಾವಿ: ಉತ್ತರ ಕರ್ನಾಟಕದ ಭಾಷೆ ಮತ್ತು ಸಂಸ್ಕೃತಿಯ ಕುರಿತು ಶಾಸಕ ಪ್ರದೀಪ್ ಈಶ್ವರ್ ಅವರು ನೀಡಿರುವ ಹೇಳಿಕೆ ಖಂಡನೀಯ. ಅವರು ತಕ್ಷಣ ಹೇಳಿಕೆಯನ್ನು ಹಿಂಪಡೆದು, ಬಹಿರಂಗವಾಗಿ ಬೇಷರತ್ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಲೇಖಕ ಇಲಿಯಾಸ್ ಪಟೇಲ್ ಬಳಗಾನೂರ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಉತ್ತರ ಕರ್ನಾಟಕವು ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಾಮಾಜಿಕ ಕ್ರಾಂತಿಯ ಶ್ರೀಮಂತ ಪರಂಪರೆಯನ್ನು ಹೊಂದಿದೆ. 12ನೇ ಶತಮಾನದಲ್ಲಿ ವಚನ ಚಳವಳಿಯ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಾದಿ ಶರಣರು, ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ ಪಂಪ, ರನ್ನ ಹಾಗೂ ಕನಕದಾಸರಂತಹ ಮಹನೀಯರ ನೆಲವಿದು ಎಂದು ಹೇಳಿದ್ದಾರೆ.
ಬ್ರಿಟಿಷರ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಸುರಪುರದ ರಾಜಾ ವೆಂಕಟಪ್ಪ ನಾಯಕ ಅವರಂತಹ ವೀರರು ಈ ನಾಡಿನ ಇತಿಹಾಸದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದಾರೆ. ವಿವಿಧ ಆಡಳಿತ ವ್ಯವಸ್ಥೆಗಳ ಪ್ರಭಾವದ ನಡುವೆಯೂ ಉತ್ತರ ಕರ್ನಾಟಕದ ಜನರು ಕನ್ನಡ ಭಾಷೆ, ಸಂಸ್ಕೃತಿ ಮತ್ತು ಸ್ಥಳೀಯ ಭಾಷಾ ಸೊಗಡನ್ನು ಉಳಿಸಿ ಬೆಳೆಸಿದ್ದಾರೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಏಕೀಕರಣದ ಹೋರಾಟದಲ್ಲಿ ಆಲೂರು ವೆಂಕಟರಾಯರು ಹಾಗೂ ಪಾಟೀಲ ಪುಟ್ಟಪ್ಪ ಸೇರಿದಂತೆ ಅನೇಕ ಮಹನೀಯರು ಮಹತ್ವದ ಪಾತ್ರ ವಹಿಸಿದ್ದಾರೆ. ಇಂತಹ ಐತಿಹಾಸಿಕ ಹಿನ್ನೆಲೆ ಹೊಂದಿರುವ ಉತ್ತರ ಕರ್ನಾಟಕದ ಭಾಷೆ ಮತ್ತು ಜನರ ಭಾವನೆಗಳನ್ನು ಲಘುವಾಗಿ ಪರಿಗಣಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಜನಪ್ರತಿನಿಧಿಗಳು ಮಾತನಾಡುವಾಗ ಈ ನಾಡಿನ ಇತಿಹಾಸ, ಸಂಸ್ಕೃತಿ ಹಾಗೂ ಜನರ ಸ್ವಾಭಿಮಾನವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಬೇಕು. ಇಲ್ಲವಾದರೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ, ಅವರು ಈ ಭಾಗಕ್ಕೆ ಭೇಟಿ ನೀಡಿದಾಗ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಇಲಿಯಾಸ್ ಪಟೇಲ್ ಬಳಗಾನೂರ ಎಚ್ಚರಿಸಿದ್ದಾರೆ.



